ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) (PM Awas Yojana) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಫಲಾನುಭವಿಗಳ ವಂತಿಕೆ ಒಟ್ಟು ರೂ. 134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಲು ಸೂಚನೆ ನೀಡಿದರು.
ಸ್ಲಂ ಬೋರ್ಡ್ ಅಡಿ 42 ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸಲಾಗುವುದು. ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ) ಅಡಿ 900 ಕೋಟಿ ಅನುದಾನ ಬಜೆಟ್‌ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ | Nepal Riots: ನೇಪಾಳದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ: ಸಿಎಂ
ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸುವ ಅಗತ್ಯ ಅನುದಾನ ಹಂಚಿಕೆ ಕುರಿತಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.