Saalumarada Thimmakka Death: ಸಾಲುಮರದ ತಿಮ್ಮಕ್ಕ ಅಂತಿಮ ದರ್ಶನ ಪಡೆದ ಸಿಎಂ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಆದೇಶ
CM Siddaramaiah:114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ -
ಬೆಂಗಳೂರು, ನ.15: ಜಯನಗರದ ಅಪೋಲೋ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಭೇಟಿ ನೀಡಿ, ವಯೋಸಹಜ ಕಾಯಿಲೆಯಿಂದ ನಿಧನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದರು. ಈ ವೇಳೆ ಮಾತನಾಡಿದ ಸಿಎಂ, ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಮಾಗಡಿ ತಾಲೂಕು ಹುಲಿಕಲ್ ಗ್ರಾಮದಲ್ಲಿ ಜನಿಸಿದ್ದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತು ಜನರಿಗೆ ನೆರಳು ನೀಡುತ್ತಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
ಈ ಸುದ್ದಿಯನ್ನೂ ಓದಿ | Saalumarada Thimmakka: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ
ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಸಿಎಂ ಸಂತಾಪ
ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು. ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.