ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sugarcane Farmers Protest: ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

CM Siddaramaiah's letter to PM Narendra Modi: ಉತ್ತರ ಕರ್ನಾಟಕದ, ವಿಶೇಷವಾಗಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬೀದರ್, ಬಾಗಲಕೋಟೆ, ಗದಗ, ಹುಬ್ಬಳ್ಳಿ-ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತುರ್ತಾಗಿ ಚರ್ಚಿಸಲು ತಾವು ಅವಕಾಶ ನೀಡಬೇಕು ಎಂದು ಪ್ರಧಾನಿಗೆ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಬೆಂಗಳೂರು, ನ.6: ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ (Sugarcane Farmers Protest) ತೀವ್ರಗೊಂಡ ಹಿನ್ನೆಲೆಯಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಪ್ರಧಾನಿಗಳ ಗಮನಕ್ಕೆ ತರುವುದಾಗಿ ಸಿಎಂ ಸಿದ್ದರಾಮಯ್ಯ ಗುರುವಾರ ಸಂಜೆ ಹೇಳಿದ್ದರು. ಇದರ ಬೆನ್ನಲ್ಲೇ ಪ್ರಧಾನಿ ಭೇಟಿಗೆ ಅವಕಾಶ ಕೋರಿ ಸಿಎಂ ಪತ್ರ ಬರೆದಿದ್ದಾರೆ.

ಉತ್ತರ ಕರ್ನಾಟಕದ, ವಿಶೇಷವಾಗಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬೀದರ್, ಬಾಗಲಕೋಟೆ, ಗದಗ, ಹುಬ್ಬಳ್ಳಿ-ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿದ್ದ ಸಮಸ್ಯೆಗಳ ಬಗ್ಗೆ ತುರ್ತಾಗಿ ಚರ್ಚಿಸಲು ತಾವು ಅವಕಾಶ ನೀಡಬೇಕು ಎಂದು ಪ್ರಧಾನಿಗೆ ಮೋದಿಗೆ ಸಿಎಂ ಮನವಿ ಮಾಡಿದ್ದಾರೆ.

ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ರಾಜ್ಯ ಸರ್ಕಾರ ನಿರಂತರ ಮಾತುಕತೆ ನಡೆಸುತ್ತಿದೆ. ಆದರೆ, ರೈತರ ಹೋರಾಟ ತೀವ್ರಗೊಂಡಿದೆ. ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿ ಶೇ. 11.25 ರಿಕವರಿ ಬಂದರೆ 3,200 ರೂ. ಹಾಗೂ ಶೇ.10.25 ರಿಕವರಿ ಬಂದರೆ 3100 ರೂ. ಗಳನ್ನು (ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) ಪಾವತಿಸುವಂತೆ ಕಾರ್ಖಾನೆಗಳ ಮಾಲೀಕರಿಗೆ ಮನವೊಲಿಸಿದ್ದಾರೆ. ಇನ್ನು ತೂಕದಲ್ಲಿ ನಡೆಯುತ್ತಿದ್ದ ಮೋಸವನ್ನು ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲೂ ಡಿಜಿಟಲ್ ತೂಕ ಯಂತ್ರವನ್ನು ಅಳವಡಿಸಲಾಗಿದೆ.

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಬರೆದಿರುವ ಪತ್ರ



ಕಬ್ಬು ತೂಕ, ಇಳುವರಿ, ಕಟಾವು ಮತ್ತು ಬಿಲ್ ಪಾವತಿಗಳಿಗೆ ಸಂಬಂಧಪಟ್ಟಂತೆ ಪರಿಶೀಲನೆಗೆ ಸಮಿತಿಗಳನ್ನು ರಚಿಸಲಾಗಿದೆ. ಸರ್ಕಾರವು ಎಪಿಎಂಸಿಗಳಲ್ಲಿ ಸ್ಥಾಪಿಸಿರುವ ತೂಕದ ಯಂತ್ರಗಳಲ್ಲಿ ಉಚಿತವಾಗಿ ತೂಕ ಮಾಡಿಕೊಡುವ ವ್ಯವಸ್ಥೆ ಕಲ್ಪಿಸಿದ್ದೇವೆ. ಈ ಕ್ರಮಗಳ ಹೊರತಾಗಿಯೂ, ರೈತರು ಅತೃಪ್ತರಾಗಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

2025-26ರ ಹಂಗಾಮಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿದ ನ್ಯಾಯಸಮ್ಮತ ಮತ್ತು ಲಾಭದಾಯಕ ದರ (ಎಫ್‌ಆರ್‌ಪಿ) ಕ್ವಿಂಟಲ್‌ಗೆ 355 ರೂ. (ಪ್ರತಿ ಟನ್‌ಗೆ 23,550) ಆಗಿದ್ದು, ರಿಕವರಿ ದರ 10.25% ಆಗಿದೆ. ಆದರೆ ಪ್ರತಿ ಟನ್‌ಗೆ 800 ರಿಂದ 900 ರೂ. ರವರೆಗೆ ಕಟಾವು ಮತ್ತು ಸಾಗಣೆ ವೆಚ್ಚ ಕಡಿತಗೊಳಿಸಿದ ನಂತರ, ರೈತರಿಗೆ ಪ್ರತಿ ಟನ್‌ಗೆ ಸಿಗುವುದು ಕೇವಲ 2,600-3,000 ಮಾತ್ರ. ಅಲ್ಲದೆ ರಸಗೊಬ್ಬರ, ಕೂಲಿ, ನೀರಾವರಿ ಮತ್ತು ಸಾರಿಗೆ ವೆಚ್ಚಗಳಲ್ಲಿನ ತೀವ್ರ ಹೆಚ್ಚಳದಿಂದಾಗಿ ರೈತರು ನಷ್ಟ ಎದುರಿಸುವಂತಾಗಿದೆ.

ಈ ಸುದ್ದಿಯನ್ನೂ ಓದಿ | Belagavi Farmers Protest: ಕಬ್ಬು ಬೆಳೆಗಾರರ ಪ್ರತಿಭಟನೆ; ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಜತೆ ಸಿಎಂ ಸಭೆ

ಹೀಗಾಗಿ ನಮ್ಮ ರೈತರು ಕಾಲಮಿತಿಯೊಳಗೆ ಪ್ರತಿ ಟನ್ ಕಬ್ಬಿಗೆ ನ್ಯಾಯಸಮ್ಮತ ಮತ್ತು ಲಾಭದಾಯಕ ದರ (ಎಫ್‌ಆರ್‌ಪಿ) ನಿವ್ವಳ 3,500 ರೂ. ನೀಡುವಂತೆ ಒತ್ತಾಯಿಸುತ್ತಿದ್ದಾರೆ. ರೈತರು ನ್ಯಾಯಯುತ, ಪಾರದರ್ಶಕ ಮತ್ತು ಜಾರಿಗೊಳಿಸಬಹುದಾದ ಬೆಲೆ ನಿಗದಿ ಕಾರ್ಯವಿಧಾನಗಳನ್ನು ಬಯಸುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ತಕ್ಷಣವೇ ಪ್ರತಿ ಟನ್ ಕಬ್ಬಿಗೆ ನಿವ್ವಳ 3,500 ರೂ. ನೀಡುವುದು, ರಿಕವರಿ ಪ್ರಮಾಣವನ್ನು ಇಳಿಸುವುದು, ಎಫ್‌.ಆರ್.ಪಿ. ದರ ಪರಿಷ್ಕರಿಸುವುದು, ಬಾಕಿ ಶೀಘ್ರ ಪಾವತಿ, ಸಕ್ಕರೆ ರಫ್ತು, ಎಥನಾಲ್‌ ಖರೀದಿ ಪ್ರಮಾಣ ಹೆಚ್ಚಳಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಿಎಂ ಮಾಡಿದ್ದಾರೆ.