ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka New CM: ನಾಳೆಯೇ ನೂತನ ಸಿಎಂ ಆಯ್ಕೆ; ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಲ್‌ಪಿ ಸಭೆ ನಿಗದಿ

CLP Meeting: ಸಿಎಲ್‌ಪಿ ಸಭೆ ಬಗ್ಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಮಾಹಿತಿ ನೀಡಿದ್ದಾರೆ. ವಿಧಾನ ಸೌಧದ 3ನೇ ಮಹಡಿಯಲ್ಲಿರುವ ಕೊಠಡಿ :334 ಸಮ್ಮೇಳನ ಸಭಾಂಗಣದಲ್ಲಿ ಮೇ 30ರಂದು ಶನಿವಾರ ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್.‌

ಬೆಂಗಳೂರು: ರಾಜ್ಯದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಹೊಸ ಮುಖ್ಯಮಂತ್ರಿ (Karnataka New CM) ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರು ಅಂಗೀಕರಿಸಿದ್ದು, ಸಚಿವ ಸಂಪುಟವನ್ನೂ ವಿಸರ್ಜಿಸಿದ್ದಾರೆ. ಹೀಗಾಗಿ ನೂತನ ಸರ್ಕಾರ, ಸಂಪುಟ ರಚನೆಯ ಪ್ರಕ್ರಿಯೆಯ ಭಾಗವಾಗಿ ಕರ್ನಾಟಕ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯನ್ನು (CLP Meeting) ಶನಿವಾರ (ಮೇ 30) ಸಂಜೆ 4 ಗಂಟೆಗೆ ನಿಗದಿ ಮಾಡಲಾಗಿದ್ದು, ಸಭೆಯಲ್ಲಿ ಪಕ್ಷದ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ನಂತರ ಸರ್ಕಾರ ರಚನೆ ಹಕ್ಕು ಮಂಡಿಸಲಾಗುತ್ತದೆ.

ಸಿಎಲ್‌ಪಿ ಸಭೆ ಬಗ್ಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಮಾಹಿತಿ ನೀಡಿದ್ದಾರೆ. ವಿಧಾನ ಸೌಧದ 3ನೇ ಮಹಡಿಯಲ್ಲಿರುವ ಕೊಠಡಿ :334 ಸಮ್ಮೇಳನ ಸಭಾಂಗಣದಲ್ಲಿ ಮೇ 30ರಂದು ಶನಿವಾರ ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.

ಈ ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವಹಿಸಲಿದ್ದಾರೆ. ಈ ಸಭೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲ ವಿಧಾನ ಪರಿಷತ್‌ ಸಭಾ ನಾಯಕರಾದ ಎನ್.ಎಸ್.ಭೋಸರಾಜು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರುಗಳು ಉಪಸ್ಥಿತರಿರುತ್ತಾರೆ. ಆದ್ದರಿಂದ, ಪಕ್ಷದ ಶಾಸಕರೆಲ್ಲ ತಪ್ಪದೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.

ನೂತನ ಸಿಎಂ ಪ್ರಮಾಣವಚನ ಯಾವಾಗ?

ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಆಯ್ಕೆಯಾಗುವುದು ಖಚಿತವಾಗಿದೆ. ಇವರ ಪಟ್ಟಾಭಿಷೇಕಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ. ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತವಾಗಿ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಘೋಷಿಸಲಾಗುತ್ತದೆ.

ಈಗಾಗಲೇ, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಅವರು ದೆಹಲಿಗೆ ಪ್ರಯಾಣಿಸಿದ್ದಾರೆ. ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಕೃತಜ್ಞತೆ ಅರ್ಪಿಸಿದ್ದಾರೆ‌.

CM ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರಿಂದ ಅಂಗೀಕಾರ, ಸಚಿವ ಸಂಪುಟವೂ ವಿಸರ್ಜನೆ

ಎಲ್ಲವೂ ಅಂದುಕೊಂಡಂತೆ ನಡೆದರೆ ಸೋಮವಾರ ಸಂಜೆ ಗೋಧೂಳಿ ಮುಹೂರ್ತದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಥವಾ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದುಬಂದಿದೆ.