ಬೆಂಗಳೂರು, (ಜುಲೈ 28): ಧರ್ಮಸ್ಥಳದ ಬುರುಡೆ ಪ್ರಕರಣದಲ್ಲಿ (dharmasthala mass burial case) ಮಾಜಿ ಐಎಎಸ್ ಅಧಿಕಾರಿ ಹಾಗೂ ಹಾಲಿ ಸಂಸದ ಸಸಿಕಾಂತ್ ಸೆಂಥಿಲ್ (Sasikanth Senthil) ಅವರ ಕೈವಾಡ ಇದೆ ಎಂದು ಗಂಭೀರ ಆರೋಪ ಮಾಡಿದ್ದ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸಂಕಷ್ಟ ಎದುರಾಗಿದೆ. ಸಸಿಕಾಂತ್ ಸೆಂಥಿಲ್ ಅವರು ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಸಂಬಂಧ ಆಗಸ್ಟ್ 24ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಜನಾರ್ದನ ರೆಡ್ಡಿಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ತಮಿಳುನಾಡಿ ತಿರುವಳ್ಳೂರು ಸಂಸದ ಸಸಿಕಾಂತ್ ಸೆಂಥಿಲ್ ಅವರು ಧರ್ಮಸ್ಥಳದ ಬುರುಡೆ ಪ್ರಕರಣದ ಸೂತ್ರಧಾರರಾಗಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದರು. ಆದರೆ ಈ ಆರೋಪವನ್ನು ತಳ್ಳಿಹಾಕಿದ್ದ ಸೆಂಥಿಲ್ ಅವರು, ಜನಾರ್ದನ ರೆಡ್ಡಿ ಅವರು ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಆಧಾರರಹಿತ ಸುಳ್ಳು ಆರೋಪ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರ್ಟ್‌ಗೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ನಾನು ಈ ಹಿಂದೆ ಬಳ್ಳಾರಿಯಲ್ಲಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾಗ ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದ ಕೆಲವು ಪ್ರಕರಣಗಳ ಕುರಿತು ಸಿಬಿಐಗೆ ದಾಖಲೆಗಳನ್ನು ಒದಗಿಸಿದ್ದೆ. ಅದಕ್ಕಾಗಿ ಈಗ ರೆಡ್ಡಿ ಅವರು ನನ್ನ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸೆಂಥಿಲ್ ಹೇಳಿದ್ದರು.
ತಮ್ಮ ವಿರುದ್ಧ ಆರೋಪಗಳ ಸಂಬಂಧ ನ್ಯಾಯಾಲಯದಲ್ಲಿ ಸೆಂಥಿಲ್ ಅವರು ನೀಡಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ ನ್ಯಾಯಾಲಯವು ಕಾಗ್ನಿಜೆನ್ಸ್ ತೆಗೆದುಕೊಂಡು, ಪ್ರತಿವಾದಿ ಜನಾರ್ದನ ರೆಡ್ಡಿ ಅವರಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿದೆ.