ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶನಿವಾರ ನಡೆದ ಸಮಗ್ರ ವೈದ್ಯಕೀಯ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಕನ್ನಡ ವೈದ್ಯ ಸಾಹಿತ್ಯದಲ್ಲಿ ಶ್ರೇಷ್ಠ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ವೇಳೆ ದಂತ ವೈದ್ಯಕೀಯ ವಿಭಾಗದಿಂದ ಡಾ. ಮುರಲೀ ಮೋಹನ್ ಚೂಂತಾರು (Dr Muralee Mohan Choontharu) ಅವರಿಗೆ 2026ನೇ ಸಾಲಿನ ಶ್ರೇಷ್ಠ ವೈದ್ಯ ಸಾಹಿತಿ ಪ್ರಶಸ್ತಿ ಪ್ರದಾನ (Best Medical Writer Award 2026) ಮಾಡಲಾಯಿತು. ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ಶಾಲು ಹೊದಿಸಿ, ಪೇಟ ತೊಡಿಸಿ, ಫಲ ಪುಷ್ಪ ನೀಡಿ ಸನ್ಮಾನ ಮಾಡಿದರು.
ನವೆಂಬರ್ 20 ಮತ್ತು 21ರಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸಮಗ್ರ ವೈದ್ಯಕೀಯ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಉಪ ಕುಲಪತಿ ಭಗವಾನ್, ರಾಜ್ಯ ವೈದ್ಯಕೀಯ ಪರಿಷತ್ತಿನ ಅಧ್ಯಕ್ಷ ಡಾ ಯೋಗಾನಂದ ರೆಡ್ಡಿ, ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ಯೋಗಣ್ಣ ಉಪಸ್ಥಿತರಿದ್ದರು. ವೈದ್ಯಕೀಯ ವಿಜ್ಞಾನದ ಪ್ರಪ್ರಥಮ ಸಮಗ್ರ ವೈದ್ಯ ಸಾಹಿತ್ಯ ಸಮ್ಮೇಳನ ಇದಾಗಿದ್ದು, ರಾಜ್ಯದ ಎಲ್ಲಾ ವೈದ್ಯ ಪ್ರಕಾರದ ವೈದ್ಯ ಸಾಹಿತಿಗಳು ಮತ್ತು ವೈದ್ಯ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು.