ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ (Governor of Karnataka) ಡಾ. ಸುಧಾ ಯಾದವ್ (Dr. Sudha Yadav) ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಹಾಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಿರ್ಗಮಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್, ಪ್ರವಾಸೋದ್ಯಮ ಹಾಗೂ ಇಂದನ ಸಚಿವರಾದ ಕೆ.ಜೆ. ಜಾರ್ಜ್, ಗೃಹ ಸಚಿವ ಪ್ರಿಯಂಕ್ ಖರ್ಗೆ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಹಾಗೂ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಡಾ. ಸುಧಾ ಯಾದವ್ ಅವರು ಕರ್ನಾಟಕದ ರಾಜ್ಯಪಾಲ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆಯಾಗಿದ್ದಾರೆ. ಈ ಹಿಂದೆ 1999 ರಲ್ಲಿ ವಿ.ಎಸ್. ರಮಾದೇವಿ ಅವರು ರಾಜ್ಯದ ಮೊದಲ ಮಹಿಳಾ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದ್ದರು. ಸುಧಾ ಯಾದವ್ ಅವರು ಹರಿಯಾಣ ಮೂಲದವರು. ಇವರ ಪತಿ ಸುಖಬೀರ್ ಸಿಂಗ್ ಯಾದವ್ ಅವರು ಬಿಎಸ್ಎಫ್ (BSF) ಉಪ ಕಮಾಂಡೆಂಟ್ ಆಗಿದ್ದು, 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾಗಿದ್ದರು.
ಸುಧಾ ಯಾದವ್, 1999 ರಿಂದ 2004 ರವರೆಗೆ ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಜೊತೆಗೆ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಉಸ್ತುವಾರಿಯಾಗಿ ಹಾಗೂ ಕೇಂದ್ರ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಸದಸ್ಯೆಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇವರು ಐಐಟಿ ರೂರ್ಕಿಯಲ್ಲಿ ರಸಾಯನಶಾಸ್ತ್ರ ವಿಷಯದಲ್ಲಿ ಎಂಎಸ್ಸಿ ಮುಗಿಸಿ ಚಿನ್ನದ ಪದಕ ಗಳಿಸಿದ್ದು, ಪಿಹೆಚ್ಡಿ ಪದವೀಧರೆಯಾಗಿದ್ದಾರೆ.