ಬೆಂಗಳೂರು: ಎಸ್ಐಆರ್ (ವಿಶೇಷ ಮತಪಟ್ಟಿ ಪರಿಷ್ಕರಣೆ) ವಿರುದ್ಧ ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟ ಹೋರಾಟ ಮುಂದುವರಿಸಿದೆ. ಗುರುವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂಡಿ ಘರ್ಜಿಸಿದ್ದು, ಕೇಂದ್ರ ಸರಕಾರ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದೆ. ‘ಮತ ಉಳಿಸಿ ದೇಶ ಉಳಿಸಿ’ ಎಂಬ ಘೋಷ ವಾಕ್ಯದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ, ಇಂಡಿ ಒಕ್ಕೂಟದ ಕಾಂಗ್ರೆಸ್, ಸಿಪಿಐ, ಸಿಪಿಐ (ಎಂ), ಸಿಪಿಐಎಲ, ಆರ್ಜೆಡಿ, ಎನ್ಸಿಪಿ (ಎಸ್ಪಿ), ಸಮಾಜವಾದಿ ಪಕ್ಷ, ಎಂಡಿಎಂಕೆ, ಜಿಕೆಎನ್ಸಿ, ಎಐಟಿಸಿ, ಆರ್ಪಿಐ ಸೇರಿದಂತೆ ವಿವಿಧ ಪಕ್ಷಗಳ ಪ್ರಮುಖರು ಭಾಗವಹಿಸಿ ಎಸ್ಐಆರ್ ರದ್ದುಗೊಳಿಸುವ ಜತೆಜತೆಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ಕುಮಾರ್(Gyanesh Kumar) ರಾಜೀನಾಮೆಗೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(D K Shivakumar), ಎಸ್ಐಆರ್ ವಿರುದ್ಧ ಚುನಾವಣಾ ಆಯೋಗಕ್ಕೆ ಹೋಗಲು ನಮಗೆ ಅವಕಾಶ ನೀಡಿಲ್ಲ. ಮತದಾರ ರ ಹಕ್ಕಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಚುನಾವಣಾ ಆಯೋಗ ಮತಗಳ್ಳತನಕ್ಕೆ ಅವಕಾಶ ಮಾಡಿಕೊಡುತ್ತಿದೆ. ದೇಶದಲ್ಲಿ ಯಾವ ರೀತಿ ಮತಚೋರಿ ನಡೆಯುತ್ತಿದೆ ಎಂಬುದನ್ನು ತೋರಿಸಿದ್ದೇವೆ. ನಮ್ಮ ರಾಜ್ಯ ಸರಕಾರ ಕಾನೂನು ಚೌಕಟ್ಟಿನಲ್ಲಿ ತನಿಖೆ ಮಾಡುತ್ತದೆ ಎಂದು ಹೇಳಿದರು.
ಇದನ್ನೂ ಓದಿ: Bangalore News: ಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಮಾತನಾಡಿ, ಎಸ್ಐಆರ್ ಪ್ರಕ್ರಿಯೆ ಕಾನೂನು ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಈ ಪ್ರಕ್ರಿಯೆಯನ್ನು ಕೂಡಲೇ ರದ್ದುಗೊಳಿಸಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಹಾಗೂ ಅರ್ಹ ಮತದಾರರ ಮತದಾನದ ಹಕ್ಕಿಗೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.
ಎಸ್ಐಆರ್ ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆ ಎಂಬ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಇದು ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ ವಿಚಾರವಲ್ಲ. ದೇಶದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾರರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಮಹತ್ವದ ಹೋರಾಟವಾಗಿದೆ ಎಂದು ಎಚ್ಚರಿಸಿದರು.
ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿದ್ದ ಸಾವಿರಾರು ಕಾರ್ಯಕರ್ತರು ಮತ ಉಳಿಸಿ, ದೇಶ ಉಳಿಸಿ ಎಂಬ ಘೋಷಣೆಗಳನ್ನು ಕೂಗಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿ, ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ರ್ಯಾಲಿಯಲ್ಲಿ ಅಕ್ರಮ ಹಾಗೂ ಪ್ರಜಾಪ್ರಭುತ್ವ ವಿರೋಧಿ ಎಸ್ಐಆರ್ ರದ್ದು ಮಾಡಬೇಕು. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. ಎಸ್ಐಆರ್ ಪಟ್ಟಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂಬ ನಿರ್ಣಯವನ್ನು ಅಂಗೀಕರಿಸಲಾಯಿತು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಸಚಿವರಾದ ಎಂ.ಬಿ.ಪಾಟೀಲ್, ಯತೀಂದ್ರ ಸಿದ್ದರಾಮಯ್ಯ, ಸೇರಿದಂತೆ ಹಲವು ಸಚಿವರು, ಶಾಸಕರು, ಸಿಪಿಐನ ರಾಜ್ಯ ಕಾರ್ಯದರ್ಶಿ ಸ್ವಾತಿ ಸುಂದರೇಶ್, ಸಿಪಿಐ(ಎಂ)ನ ರಾಜ್ಯ ಕಾರ್ಯದರ್ಶಿ ಪ್ರಕಾಶ್, ಫಾರ್ವರ್ಡ್ ಬ್ಲಾಕ್ ಅಧ್ಯಕ್ಷ ಶಿವಶಂಕರ್, ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಮಂಜಪ್ಪ, ಸರ್ವೋದಯ ಕಟಕ ಬಡಗಲಪುರ ನಾಗೇಂದ್ರ, ರಿಪಬ್ಲಿಕ್ ಪಾರ್ಟಿಯ ಆಫ್ ಇಂಡಿಯಾದ ಆರ್. ಮೋಹನ್ರಾಜ್ ಸೇರಿದಂತೆ ಅನೇಕರು ಇದ್ದರು.
![]()
ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವ ಬಿಜೆಪಿ ಹಾಗೂ ಆರ್ಎಸ್ಎಸ್ ಪ್ರಯತ್ನದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ. ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿರುವ ಬಿಜೆಪಿ ಪ್ರಯತ್ನಕ್ಕೆ ನಾವು ಅವಕಾಶ ಕೊಡುವುದಿಲ್ಲ.
-ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ