ಬೆಂಗಳೂರು: ಮುಡಾ ನಿವೇಶನ ಅಕ್ರಮ ಪ್ರಕರಣಕ್ಕೆ (Muda Case) ಸಂಬಂಧಿಸಿ ತನಿಖೆ ನಡೆಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅಂಗೀಕರಿಸಿದ್ದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ, ಹೈಕೋರ್ಟ್‌ಗೆ ಜಾರಿ ನಿರ್ದೇಶನಾಲಯ (ಇಡಿ) ಅರ್ಜಿ ಸಲ್ಲಿಸಿದೆ. ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸೋಮವಾರ ಇಡಿ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ.
ಇದೇ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ, ಲೋಕಾಯುಕ್ತ ಪೊಲೀಸರು, ಇ.ಡಿ, ಜಮೀನಿನ ಮೂಲ ಮಾಲೀಕ ದೇವರಾಜು, ಮುಖ್ಯಮಂತ್ರಿ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಮುಡಾದ ಮಾಜಿ ಆಯುಕ್ತ ಜಿ. ಟಿ. ದಿನೇಶ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಏನಿದು ಪ್ರಕರಣ?
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ. ಎಂ. ಪಾರ್ವತಿ ಅವರಿಗೆ ಸೇರಿದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್ 464ರ 3 ಎಕರೆ 16 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಂಡು, ಅದರ ಬದಲಿಗೆ ಸುಮಾರು 56 ಕೋಟಿ ಮೌಲ್ಯದ 14 ನಿವೇಶನಗಳನ್ನು ಮುಡಾ ಅಕ್ರಮವಾಗಿ ಹಂಚಿಕೆ ಮಾಡಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಹೀಗಾಗಿ, ಪ್ರಕರಣದ ಕುರಿತು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಕೋರಿ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ 2024ರ ಜುಲೈ 3ರಂದು ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದರು. ನಂತರ ಪ್ರಕರಣದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ, 2024ರ ಜೂನ್-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.
ಈ ಬಗ್ಗೆ ಪರಿಶೀಲನೆ ನಡೆಸಿ, ಪ್ರಕರಣದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಆಗಸ್ಟ್ 17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 19 ರಂದು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್, ಪೊಲೀಸ್ ತನಿಖೆಗೆ ಅನುಮತಿಸಿ 2024ರ ಸೆಪ್ಟಂಬರ್ 24ರಂದು ಆದೇಶಿಸಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ್ದರು. ಅದನ್ನು ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು.
CM Siddaramaiah: ಇನ್ನೆರಡು ವರ್ಷ ಸಿದ್ದರಾಮಯ್ಯನವರೇ ಸಿಎಂ, ಹೈಕಮಾಂಡ್ ಸ್ಪಷ್ಟನೆ ಬೇಕಿಲ್ಲ: ಜಿ ಪರಮೇಶ್ವರ್
ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿರುವ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿರುವ ಬಿ ರಿಪೋರ್ಟ್ ಪಡೆದು ಪರಿಶೀಲಿಸಬೇಕು. ಬಿ ರಿಪೋರ್ಟ್ ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು. ಅಲ್ಲದೇ, ಸ್ವತಂತ್ರ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ವರ್ಗಾಯಿಸಬೇಕು. ತನಿಖೆ ನಡೆಸಿ ಹೊಸದಾಗಿ ವರದಿ ಸಲ್ಲಿಸಲು ಸ್ವತಂತ್ರ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಕೋರಿದ್ದರು. ಈ ನಡುವೆ ಇಡಿ ಸಹ ಅರ್ಜಿ ಸಲ್ಲಿಸಿದೆ.