Fire Accident: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಅರಮನೆ ಮೈದಾನದಲ್ಲಿ ಕಾಣಿಸಿಕೊಂಡ ಬೆಂಕಿ
ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ದುರಂತ ನಡೆದಿದೆ. ಅರಮನೆ ಮೈದಾನದಲ್ಲಿ ಡೆಕೋರೇಷನ್ ವೇಸ್ಟ್ ವಸ್ತುಗಳು ಇದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದೆ.

ಬೆಂಕಿ ಅವಘಡ.

ಬೆಂಗಳೂರು: ಅರಮನೆ ಮೈದಾನದಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಅರಮನೆ ಮೈದಾನದಲ್ಲಿ ಡೆಕೋರೇಷನ್ ವೇಸ್ಟ್ ವಸ್ತುಗಳು ಇದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ (Fire Accident). ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆಗಸದೆತ್ತರಕ್ಕೆ ವ್ಯಾಪಿಸಿದ್ದ ಹೊಗೆಯನ್ನು ಕಂಡು ಸ್ಥಳೀಯರು ಕೆಲವು ಹೊತ್ತು ಬೆಚ್ಚಿ ಬಿದ್ದಿದ್ದರು. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಬೆಂಕಿ ಅವಘಡ ಘಟನೆ ಪದೇ ಪದೆ ಪುನರಾವರ್ತನೆಯಾಗುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಇಬ್ಬರು ಕಾರ್ಮಿಕರ ದುರ್ಮರಣ
ನೆಲಮಂಗಲ: ಕೆಲವು ದಿನಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸಮೀಪ ನಡೆದ ಬೆಂಕಿ ಅವಘಡದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಉತ್ತರ ಪ್ರದೇಶ ಮೂಲದ ಉದಯ್ ಭಾನು(40) ಮತ್ತು ಬಿಹಾರ ಮೂಲದ ರೋಷ ನ್ (23) ಮೃತ ದುರ್ದೈವಿಗಳು.
ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ವುಡ್ ವರ್ಕ್ಸ್ ಕೆಲಸ ಮಾಡಲಾಗುತ್ತಿದ್ದ ವೇಳೆ ದುರಂತ ಸಂಭವಿಸಿತ್ತು. ಈ ವೇಳೆ ನೀರಿನ ಟ್ಯಾಂಕರ್ ಮೇಲೆ ಕುಳಿತುಕೊಂಡುದ್ದ ಕಾರ್ಮಿಕನೊಬ್ಬನ ರಕ್ಷಣೆ ಮಾಡಲಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದರು. ಸ್ಥಳಕ್ಕೆ ಮಾಧನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ಪರೀಶೀಲನೆ ನಡೆಸಿದ್ದರು.
ಅದಕ್ಕೂ ಮೊದಲು ಹೊಸ ವರ್ಷದ ಮೊದಲ ದಿನ (ಜ. 1) ರಾತ್ರಿ ಬೆಂಗಳೂರಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂ. ಮೌಲ್ಯದ ಬೈಕ್‌ಗಳು ಸುಟ್ಟು ಕರಕಲಾಗಿದ್ದವು. ಬೆಂಗಳೂರಿನ ಮಹದೇವಪುರ ವ್ಯಾಪ್ತಿಯ ಬಿ.ನಾರಾಯಣಪುರದಲ್ಲಿ ಈ ಘಟನೆ ನಡೆದಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದರು.