ಬೆಂಗಳೂರು: ಸಾರ್ವಜನಿಕ ಸಾರಿಗೆಗೆ ಪ್ರಮುಖ ಆಧಾರವಾಗಿರುವ ನಮ್ಮ ಮೆಟ್ರೋ (Namma Metro) ಸೇವೆಯಲ್ಲಿ ಮೇ 10ರಂದು ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮನವಿ ಮಾಡಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನೇರಳೆ ಮಾರ್ಗದ ಕೆಲವು ಭಾಗಗಳಲ್ಲಿ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.
ಭಾನುವಾರ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಈ ವ್ಯತ್ಯಯ ಇರಲಿದ್ದು, ಎರಡು ಗಂಟೆಗಳ ಕಾಲ ನಿರ್ದಿಷ್ಟ ಮಾರ್ಗಗಳಲ್ಲಿ ಮೆಟ್ರೋ ಸೇವೆ ಲಭ್ಯವಿರುವುದಿಲ್ಲ. ಬಿಎಂಆರ್‌ಸಿಎಲ್ ನೀಡಿರುವ ಮಾಹಿತಿಯ ಪ್ರಕಾರ, ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್) ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ (ಸೆಂಟ್ರಲ್ ಕಾಲೇಜು) ನಡುವಿನ ನೇರಳೆ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಪರಿಣಾಮ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ – ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.
ಉಳಿದ ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ಎಂದಿನಂತೆ ಸಂಚರಿಸಲಿವೆ. ಬೆಳಿಗ್ಗೆ 9 ಗಂಟೆಯ ನಂತರ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ – ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಡುವಿನ ಸೇವೆ ಪುನಃ ಆರಂಭವಾಗಲಿದ್ದು, ಬಳಿಕ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳು ಎಂದಿನಂತೆ ಸಂಚಾರ ನಡೆಸಲಿವೆ. ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಮಾಹಿತಿ ಫಲಕಗಳು ಹಾಗೂ ಪ್ರಕಟಣೆಗಳ ಮೂಲಕ ಪ್ರಯಾಣಿಕರಿಗೆ ಮಾಹಿತಿ ನೀಡಲು ಬಿಎಂಆರ್‌ಸಿಎಲ್ ಕ್ರಮ ಕೈಗೊಂಡಿದೆ. ಜೊತೆಗೆ ಅಧಿಕೃತ ವೆಬ್‌ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕವೂ ಮಾಹಿತಿ ಹಂಚಿಕೊಳ್ಳಲಾಗುತ್ತಿದೆ.
ಬೆಂಗಳೂರಿನ ಪ್ರಯಾಣಿಕರಿಗೆ ಗುಡ್ ನ್ಯೂಸ್; ಬಿಎಂಟಿಸಿ ಮತ್ತು ಮೆಟ್ರೋಗೆ ಇನ್ಮುಂದೆ ಒಂದೇ ಸ್ಮಾರ್ಟ್ ಕಾರ್ಡ್
ಇನ್ನು, ಪ್ರಧಾನಿ ನರೇಂದ್ರ ಮೋದಿ ಮೇ 10 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಈ ಹಿನ್ನೆಲೆ ಕಾರ್ಯಕ್ರಮದ ಸುತ್ತಮುತ್ತಲಿನ ಸ್ಥಳಗಳಲ್ಲಿನ ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ 05:00 ರಿಂದ ಮಧ್ಯಾಹ್ನ 03:00 ಗಂಟೆಯವರೆಗೆ ಹೆಚ್.ಎ.ಎಲ್. ಗೇಟ್ ನಂ. 30ರ ಮುಂಭಾಗ ನಡೆಯಲಿರುವ ಕಾರ್ಯಕ್ರಮದ ಸಂಬಂಧ ಮಾರ್ಗ ಬದಲಾಯಿಸಲಾಗಿದೆ.