ಬೆಂಗಳೂರು: ಗ್ರೇಟರ್ ಬೆಂಗಳೂರು ಕಾಯ್ದೆ 2024ರಡಿ 5 ನಗರ ಪಾಲಿಕೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ರಾಜ್ಯ ಪತ್ರದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಅಲ್ಲದೇ ಇದಕ್ಕೆ ನಾಗರಿಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಆಹ್ವಾನಿಸಲಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ, 2024ರಡಿ (Greater Bengaluru) ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಜನಸಂಖ್ಯೆ ವಿಸ್ತೀರ್ಣ, ಜನಸಂಖ್ಯಾ ಸಾಂದ್ರತೆ, ಉತ್ಪತ್ತಿಯಾಗುವ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗದ ಶೇಕಡಾವಾರು, ಆರ್ಥಿಕ ಪ್ರಾಮುಖ್ಯತೆ, ಪ್ರದೇಶದಲ್ಲಿ ಲಭ್ಯವಿರುವ ಮೂಲಸೌಕರ್ಯ ಸೌಲಭ್ಯಗಳು ಮತ್ತು ನಿಗದಿಪಡಿಸಲಾದ ಷರತ್ತುಗಳನ್ನು ಪೂರೈಸಿದ ಅನ್ವಯ, ಕರ್ನಾಟಕ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ 5 ಸಂಖ್ಯೆಯ ನಗರ ಪಾಲಿಕೆಗಳನ್ನು ಸ್ಥಾಪಿಸಲು ಪ್ರಸ್ತಾಪಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
5 ನಗರ ಪಾಲಿಕೆಗಳ ಹೆಸರು:
- ಬೆಂಗಳೂರು ಪಶ್ಚಿಮ ನಗರ ಪಾಲಿಕೆ
- ಬೆಂಗಳೂರು ದಕ್ಷಿಣ ನಗರ ಪಾಲಿಕೆ
- ಬೆಂಗಳೂರು ಉತ್ತರ ನಗರ ಪಾಲಿಕೆ
- ಬೆಂಗಳೂರು ಪೂರ್ವ ನಗರ ಪಾಲಿಕೆ
- ಬೆಂಗಳೂರು ಕೇಂದ್ರ ನಗರ ಪಾಲಿಕೆ
ಈ ಅಧಿಸೂಚನೆಯನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲಾದ ದಿನಾಂಕದಿಂದ ಮೂವತ್ತು ದಿನಗಳು ಪೂರ್ಣಗೊಂಡ ಬಳಿಕ ಪ್ರಸ್ತಾವನೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ನಿರ್ದಿಷ್ಟಪಡಿಸಲಾದ ಅವಧಿ ಪೂರ್ಣಗೊಳ್ಳುವ ಮೊದಲು ಯಾವುದೇ ವ್ಯಕ್ತಿಯಿಂದ ಈ ಕರಡಿಗೆ ಸಂಬಂಧಿಸಿದಂತೆ ಸ್ವೀಕೃತವಾಗುವ ಆಕ್ಷೇಪಣೆ ಅಥವಾ ಸಲಹೆಗಳನ್ನು ರಾಜ್ಯ ಸರ್ಕಾರದಿಂದ ಪರಿಗಣಿಸಲಾಗುವುದು. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕೊಠಡಿ ಸಂಖ್ಯೆ: 436, 4ನೇ ಮಹಡಿ, ವಿಕಾಸ ಸೌಧ, ಡಾ:ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560001 ವಿಳಾಸಕ್ಕೆ ಸಲ್ಲಿಸಬಹುದಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಂದಕುಮಾರ್ .ಬಿ ತಿಳಿಸಿದ್ದಾರೆ.