ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯ ಬಿಜೆಪಿ ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.

ಸಂಗ್ರಹ ಚಿತ್ರ

ಬೆಂಗಳೂರು: ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡ (Ramachandre Gowda) ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ನಿಧನರಾಗಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೆಗಲಿಗೆ ಹೆಗಲು ಕೊಟ್ಟು ಸಾತ್ ನೀಡಿದ್ದ ಪ್ರಮುಖ ನಾಯಕರಲ್ಲಿ ರಾಮಚಂದ್ರೇಗೌಡರು ಒಬ್ಬರಾಗಿದ್ದರು. ಪಕ್ಷದ ಆರಂಭದ ದಿನಗಳಿಂದಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆರ್‌ಎಸ್‌ಎಸ್‌ ಹಿನ್ನೆಲೆ ಹೊಂದಿದ್ದ ರಾಮಚಂದ್ರೇಗೌಡರು, 1953ರಲ್ಲೇ ಸಂಘವನ್ನು ಸೇರುವ ಮೂಲಕ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದರು. ತದನಂತರ 1970 ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಮಾಡಿದರು.

ಸತತವಾಗಿ ಐದು ಬಾರಿ ವಿಧಾನ ಪರಿಷತ್ (MLC) ಸದಸ್ಯರಾಗಿ ಆಯ್ಕೆಯಾಗಿ ದಾಖಲೆ ಬರೆದಿದ್ದರು. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ಇವರು ವೈದ್ಯಕೀಯ ಶಿಕ್ಷಣ ಸಚಿವರಾಗಿ ಮಹತ್ವದ ಜವಾಬ್ದಾರಿ ನಿಭಾಯಿಸಿದ್ದರು. 2010 ರಲ್ಲಿ ವೈದ್ಯಕೀಯ ಕಾಲೇಜುಗಳ ನೇಮಕಾತಿ ಹಗರಣದಲ್ಲಿ ಇವರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಆದರೆ ಸುದೀರ್ಘ ಕಾನೂನು ಹೋರಾಟದ ನಂತರ ಹೈಕೋರ್ಟ್ ಈ ಪ್ರಕರಣದಲ್ಲಿ ಅವರಿಗೆ ಸಂಪೂರ್ಣ ಕ್ಲೀನ್ ಚಿಟ್ ನೀಡಿತ್ತು.

H Hanumanthappa: ರಾಜ್ಯಸಭೆ ಮಾಜಿ ಸದಸ್ಯ, ಕಾಂಗ್ರೆಸ್‌ ಹಿರಿಯ ನಾಯಕ ಎಚ್​. ಹನುಮಂತಪ್ಪ ನಿಧನ

ರಾಮಚಂದ್ರೇಗೌಡ ಇಹಲೋಕ ತ್ಯಜಿಸಿದ ವಿಷಯ ತಿಳಿಯುತ್ತಿದ್ದಂತೆ ರಾಜ್ಯದ ಅನೇಕ ಗಣ್ಯರು, ರಾಜಕಾರಣಿಗಳು ಹಾಗೂ ಪಕ್ಷದ ಕಾರ್ಯಕರು ಸಂತಾಪ ಸೂಚಿಸಿದ್ದಾರೆ. ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 4:00 ಗಂಟೆಗೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Vishakha Bhat Heggar

View all posts by this author