ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Anjali Nimbalkar: ವಿಮಾನದಲ್ಲಿ ಕುಸಿದು ಬಿದ್ದ ಮಹಿಳೆಗೆ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಚಿಕಿತ್ಸೆ; ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

CM Siddaramaiah: ವಿಮಾನದಲ್ಲಿ ತೀವ್ರ ಅಸ್ವಸ್ಥಗೊಂಡ ಯುವತಿಗೆ ಸಕಾಲಕ್ಕೆ ಚಿಕಿತ್ಸೆ ನೀಡಿ, ಮಾನವೀಯತೆ ಮೆರೆದ ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮೆರಿಕ ಮೂಲದ ಯುವತಿಯೊಬ್ಬರು ವಿಪರೀತ ನಡುಕ ಉಂಟಾಗಿ, ಆಕೆ ಸ್ಥಳದಲ್ಲೇ ಪ್ರಜ್ಞಾಹೀನರಾಗಿ ಕುಸಿದುಬಿದ್ದಿದ್ದರು.

ವಿಮಾನದಲ್ಲಿ ಕುಸಿದು ಬಿದ್ದ ಮಹಿಳೆಗೆ ಮಾಜಿ ಶಾಸಕಿ ಡಾ. ಅಂಜಲಿ ಚಿಕಿತ್ಸೆ

ಚಿಕಿತ್ಸೆ ನೀಡುತ್ತಿರುವ ಡಾ ಅಂಜಲಿ ನಿಂಬಾಳ್ಕರ್‌ -

Vishakha Bhat
Vishakha Bhat Dec 14, 2025 10:10 AM

ಬೆಂಗಳೂರೂ: ವಿಮಾನದಲ್ಲಿ ತೀವ್ರ ಅಸ್ವಸ್ಥಗೊಂಡ ಯುವತಿಗೆ ಸಕಾಲಕ್ಕೆ ಚಿಕಿತ್ಸೆ ನೀಡಿ, ಮಾನವೀಯತೆ ಮೆರೆದ ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ (Anjali Nimbalkar) ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗೋವಾ ರಾಜ್ಯದ ಎಐಸಿಸಿ ಕಾರ್ಯದರ್ಶಿಯೂ ಆಗಿರುವ ಡಾ. ಅಂಜಲಿ ನಿಂಬಾಳ್ಕರ್ ಅವರು ವಿಮಾನದ ಮೂಲಕ ದೆಹಲಿಗೆ

ಪ್ರಯಾಣಿಸುತ್ತಿದ್ದರು. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ, ಸಹಪ್ರಯಾಣಿಕರಾಗಿದ್ದ ಅಮೆರಿಕ ಮೂಲದ ಯುವತಿಯೊಬ್ಬರು ವಿಪರೀತ ನಡುಕ ಉಂಟಾಗಿ, ಆಕೆ ಸ್ಥಳದಲ್ಲೇ ಪ್ರಜ್ಞಾಹೀನರಾಗಿ ಕುಸಿದುಬಿದ್ದಿದ್ದರು.

ಈ ವೇಳೆ ವಿಮಾನದಲ್ಲಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರು ಗಾಬರಿಗೊಂಡಿದ್ದ ಸಂದರ್ಭದಲ್ಲಿ, ಡಾ. ಅಂಜಲಿ ಅವರು ತಕ್ಷಣವೇ ಆಕೆಯ ನೆರವಿಗೆ ಧಾವಿಸಿದ್ದರು. ಅಂಜಲಿ ಅವರು, ತಮ್ಮ ವೈದ್ಯಕೀಯ ಅನುಭವವನ್ನು ಬಳಸಿ ಕೂಡಲೇ 'ಕಾರ್ಡಿಯೋ–ಪಲ್ಮನರಿ ರಿಸಸ್ಸಿಟೇಷನ್' (ಸಿಪಿಆರ್‌) ಚಿಕಿತ್ಸೆ ನೀಡಲು ಆರಂಭಿಸಿದರು. ಅವರ ಸತತ ಪ್ರಯತ್ನದ ಫಲವಾಗಿ ಯುವತಿಯ ಉಸಿರಾಟ ಮರುಕಳಿಸಿತು. ಚಿಕಿತ್ಸೆಯ ನಂತರ ಚೇತರಿಸಿಕೊಂಡಂತೆ ಕಂಡ ಯುವತಿ, ಸುಮಾರು ಅರ್ಧ ಗಂಟೆಯ ಬಳಿಕ ಮತ್ತೆ ಪ್ರಜ್ಞೆ ತಪ್ಪಿ ಬಿದ್ದರು. ಈ ಹಂತದಲ್ಲಿ ವಿಮಾನದಲ್ಲಿ ಇದ್ದವರ ಆತಂಕ ಮತ್ತಷ್ಟು ಹೆಚ್ಚಾಯಿತು. ಆದರೆ, ಧೈರ್ಯ ಕಳೆದುಕೊಳ್ಳದ ಡಾ. ಅಂಜಲಿ ಅವರು ಮತ್ತೆ ತುರ್ತು ಚಿಕಿತ್ಸೆ ನೀಡಿ ಆಕೆಯ ಪ್ರಾಣದ ರಕ್ಷಣೆ ಮಾಡಿದರು.

ಸಿಎಂ ಟ್ವೀಟ್‌



ವಿಮಾನ ದೆಹಲಿಯಲ್ಲಿ ಲ್ಯಾಂಡ್ ಆಗುವ ಮುನ್ನವೇ ಅಧಿಕಾರಿಗಳನ್ನು ಸಂಪರ್ಕಿಸಿ ತುರ್ತು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಸಿದ್ದರು. ವಿಮಾನ ನಿಲ್ದಾಣ ತಲುಪಿದ ಕೂಡಲೇ ರೋಗಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸುವ ವ್ಯವಸ್ಥೆಯನ್ನು ಖುದ್ದಾಗಿ ನಿಂತು ಮಾಡಿಸಿದ್ದರು. ಇದೀಗ ಅವರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅಂಜಲಿಯವರನ್ನು ಕೊಂಡಾಡಿದ್ದಾರೆ. ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ ರೋಗಿಯೊಬ್ಬರ ನೆರವಿಗೆ ಧಾವಿಸಿದ ಅಂಜಲಿಯವರ ಸೇವಾ ಮನೋಭಾವ ಮತ್ತು ಸಮಯಪ್ರಜ್ಞೆ ಅತ್ಯಂತ ಶ್ಲಾಘನೀಯ ಎಂದು ಹೇಳಿದ್ದಾರೆ.

ಅಧಿಕಾರವಿರಲಿ, ಇಲ್ಲದಿರಲಿ ಜನಸೇವೆ ಎಂದು ಬಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ತನ್ನ ಕೈಲಾದ ಸಹಾಯಕ್ಕೆ ನಿಲ್ಲುವ ಅಂಜಲಿಯಂತವರು ಸಮಾಜಕ್ಕೆ ಮಾದರಿ. ನೂರುಕಾಲ ಅಂಜಲಿಯವರಿಗೆ ಆಯಸ್ಸು ಆರೋಗ್ಯ ನೀಡಿ, ಕಷ್ಟದಲ್ಲಿರುವ ಜೀವಗಳಿಗೆ ಅವರಿಂದ ಇನ್ನಷ್ಟು ನೆರವು ಸಿಗುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.