Pension Income Limit: ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್; ಆದಾಯ ಮಿತಿ 1.2 ಲಕ್ಷಕ್ಕೆ ಹೆಚ್ಚಳ, ಅರ್ಹರಿಗೆ ಸೌಲಭ್ಯ ಮುಂದುವರಿಸಲು ಆದೇಶ
ಫಲಾನುಭವಿಗಳ ಮರು ಪರಿಶೀಲನೆ ನಂತರ 32,000 ರಿಂದ 1,20,000 ರೂ. ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದಿನ ಆದೇಶದವರೆಗೆ ಮುಂದುವರಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
-
ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆಗಳಡಿಯಲ್ಲಿ ಸಂದೇಹಾಸ್ಪದವಾಗಿ ಪಿಂಚಣಿಗಳನ್ನು ಪಡೆಯುತ್ತಿದ್ದ ಫಲಾನುಭವಿಗಳ ಭೌತಿಕ ಪರಿಶೀಲನೆ ನಂತರ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ 32,000 ದಿಂದ 1,20,000 ರೂ. ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರಿಸುವಂತೆ ಆದೇಶ ಹೊರಡಿಸಿದ್ದೇವೆ. ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ ಇತ್ತು. ಬಹಳ ದಿನಗಳಿಂದ ಇದುವೇ ಆದಾಯ ಮಿತಿಯಿದ್ದ ಕಾರಣ ಲಕ್ಷಾಂತರ ಜನರು ಪಿಂಚಣಿ ಸೌಲಭ್ಯದಿಂದ ಹೊರಗೆ ಉಳಿದಿದ್ದರು. ಅದನ್ನು ₹1,20,000 ಗಳಿಗೆ ಏರಿಕೆ ಮಾಡುವ ಮೂಲಕ ಬಹುಕಾಲದ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ₹32,000 ದಿಂದ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರೆಸುವಂತೆ ಆದೇಶ ಹೊರಡಿಸಿದ್ದೇವೆ.
— Dr. G Parameshwara (@DrParameshwara) August 19, 2026
ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ ಇತ್ತು. ಬಹಳ ದಿನಗಳಿಂದ… pic.twitter.com/z88fE8vNCQ
ಕುಟುಂಬ ದತ್ತಾಂಶದಿಂದ ಪಡೆದ ಮಾಹಿತಿಗಳನ್ನು ರಾಜ್ಯದಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿಯೊಂದಿಗೆ ಸಂಯೋಜಿಸಿದಾಗ 23,14,544 ಫಲಾನುಭವಿಗಳು ಸಂದೇಹಾಸ್ಪದ ಎಂದು ಕಂಡುಬಂದಿದ್ದು, ಈ ಫಲಾನುಭವಿಗಳ ಭೌತಿಕ ಪರಿಶೀಲನೆಗಾಗಿ ಸಂಯೋಜನೆ ಮೊಬೈಲ್ ಆ್ಯಪ್ ಸಿದ್ಧಪಡಿಸಿ ಪರಿಶೀಲನೆ ನಡೆಸಲಾಗಿತ್ತು.
ಈ ಸಮಯದಲ್ಲಿ ದಾಖಲಾತಿಗಳನ್ನು ಹಾಜರುಪಡಿಸದ, ನೀಡಿದ ವಿಳಾಸದಲ್ಲಿ ವಾಸವಿಲ್ಲದಿದ್ದ ಮತ್ತು ಆದಾಯ ದೃಢೀಕರಣ ಪತ್ರ ಹಾಜರುಪಡಿಸದಿದ್ದ 18,06,032 ಮಂದಿಯ ಪಿಂಚಣಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಗ್ರಾಮ ಆಡಳಿತಾಧಿಕಾರಿಗಳು ಸಂಯೋಜನೆ ಮೊಬೈಲ್ ಆ್ಯಪ್ ಮೂಲಕ ಪರಿಶೀಲಿಸಿದ ನಂತರ ಸಂಬಂಧಪಟ್ಟ ತಾಲೂಕು ತಹಸೀಲ್ದಾರರಿಂದ ನಿಯಮಾನುಸಾರ ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ನೀಡಲು ನಿರ್ದೇಶನ ನೀಡಲಾಗಿದೆ. ಆದರೆ, 23,14,544 ಸಂದೇಹಾಸ್ಪದ ಫಲಾನುಭವಿಗಳ ಭೌತಿಕ ಪರಿಶೀಲನೆ ಸಮಯದಲ್ಲಿ ಆದಾಯವು ₹32,000 ಕ್ಕಿಂತ ಹೆಚ್ಚಿರುವುದು ಕಂಡುಬಂತು.
23,14,544 ಮಂದಿಯ ಪೈಕಿ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000 ಕ್ಕಿಂತ ಕಡಿಮೆ ವಾರ್ಷಿಕ ಆದಾಯ ಇರುವಂತಹ ಫಲಾನುಭವಿಗಳ ಪಿಂಚಣಿಯನ್ನು ಮುಂದುವರೆಸುವಂತೆ ಈ ಮೊದಲು ಸೂಚಿಸಿದ್ದೆ. ಅದರಂತೆ 23,14,544 ಮಂದಿಯ ಪೈಕಿ ಪರಿಶೀಲನೆಯ ನಂತರ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿಯನ್ನು ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದು ಡಿಸಿಎಂ ತಿಳಿಸಿದ್ದಾರೆ.