ಬೆಂಗಳೂರು, ಜ.9: ಮಹಿಳೆಯರ ಆರ್ಥಿಕ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ ಆಗಲಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದರು. ರಾಜಾಜಿನಗರದ ಶ್ರೀ ರಾಮ ಮಂದಿರದ ಆಟದ ಮೈದಾನದಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಲಾಗಿರುವ ಕರ್ಮಣಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಡಿಜಿಟಲ್ ಮಾರ್ಕೆಟಿಂಗ್ ಗ್ರಾಮಾಂತರ ಮಹಿಳೆಯರಿಗೆ ಅನುಕೂಲ ಆಗಲಿದೆ, ಮುಂದಿನ ದಿನಗಳಲ್ಲಿ ಆ್ಯಪ್ ಬಗ್ಗೆ ತಿಳಿಸಲು ಕಾರ್ಯಗಾರ ಹಮ್ಮಿಕೊಳ್ಳಲಾಗುವುದು ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೆ ತರುತ್ತದೆ. ಕಾಂಗ್ರೆಸ್ ಪಕ್ಷದ ಸರ್ಕಾರಗಳು ಮಹಿಳೆಯರ ಪರ ಸದಾ ಚಿಂತಿಸುತ್ತದೆ. ಅಂಗನವಾಡಿ ಕೇಂದ್ರಗಳನ್ನು ಆರಂಭಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಏಳಿಗೆಗೆ ಶ್ರಮಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಹೇಳಿದರು.
ಮಹಿಳಾ ಸಬಲೀಕರಣಕ್ಕಾಗಿ ಕರ್ಮಣಿ ಉತ್ಸವ, ಗೃಹಲಕ್ಷ್ಮಿ ಡಿಜಿಟಲ್ ಅನಾವರಣ ಮಾಡಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನಮ್ಮ ಸರ್ಕಾರ ಎಲ್ಲಾ ರೀತಿಯ ಕೆಲಸ ಮಾಡುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್‌ಗೆ ಚಾಲನೆ
ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಆರಂಭಿಸಲಾಗಿರುವ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್‌ಗೆ ಚಾಲನೆ ನೀಡಲಾಯಿತು. ಬಳಿಕ ನಿಗಮದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.
ಉಡುಪಿ ಪರ್ಯಾಯ ಹಿನ್ನೆಲೆ 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಿ: ಹೆಬ್ಬಾಳ್ಕರ್ ನಿರ್ದೇಶನ
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ರಾಮಲಿಂಗ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪದ್ಮಾವತಿ, ಚಿತ್ರನಟಿ ರಾಗಿಣಿ ದ್ವಿವೇದಿ, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.