ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (Chennamma) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಚೆನ್ನಮ್ಮ ಅವರನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತಜ್ಞ ವೈದ್ಯರ ನಿಗಾದಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನೂ ನಡೆಸಲಾಗುತ್ತಿದೆ.
ಆಸ್ಪತ್ರೆಯ ವೈದ್ಯಕೀಯ ಮೂಲಗಳ ಮಾಹಿತಿ ಪ್ರಕಾರ, ಚೆನ್ನಮ್ಮ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಆತಂಕ ಪಡುವಂತಹ ಯಾವುದೇ ಪರಿಸ್ಥಿತಿ ಇಲ್ಲ. ಚಿಕಿತ್ಸೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ವೈದ್ಯರು ನಿರಂತರವಾಗಿ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಹೆಚ್ಚಿನ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಆಸ್ಪತ್ರೆಯಲ್ಲೇ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ತಾಯಿ ಅನಾರೋಗ್ಯ ವಿಷಯ ತಿಳಿಯುತ್ತಿದ್ದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ತಾಯಿಯ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯ ಆರೋಗ್ಯ ವಿಚಾರಿಸಿದ್ದಾರೆ.