Rain Alert: ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ; ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯದ ಹಲವೆಡೆ ಮಳೆ ಅಬ್ಬರ ಜೋರಾಗಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಉತ್ತಮ ಮಳೆ ಸುರಿದಿದ್ದು, ಕರಾವಳಿ, ಉತ್ತರ ಒಳನಾಡು, ಉತ್ತರ ಕರ್ನಾಟಕ ಸೇರಿ ಹಲವೆಡೆ ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರ (Rain Alert) ಜೋರಾಗಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಉತ್ತಮ ಮಳೆ ಸುರಿದಿದ್ದು, ಚಿತ್ರದುರ್ಗ, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಆಗಸ್ಟ್ 6ರಂದು ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ 150 ಮಿಮೀಗಿಂತಲೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್‌ನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಡಿಸಿ ರಜೆ ಘೋಷಿಸಿದ್ದಾರೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಅಬ್ಬರ ಮುಂದುವರಿಯಲಿದೆ. ಇಂದು (ಆ.6) ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ: Bengaluru Rains: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಅಬ್ಬರ; ಜು.25ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ!
ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಗಡಿ ಜಿಲ್ಲೆ ಬೀದರ್‌ನಲ್ಲಿ ಭಾರೀ ಮಳೆಯಾಗಿದೆ. ಬೀದರ್, ಬಸವಕಲ್ಯಾಣದಲ್ಲಿ, ಕಮಲನಗರ್, ಭಾಲ್ಕಿ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದೆ. ವಿಜಯಪುರ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಗುಡುಗು, ಸಿಡಿಲು ಸಮೇತ ವರುಣ ಆರ್ಭಟ ಜೋರಾಗಿದೆ. ಇನ್ನೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ಭಾರೀ ಮಳೆಯಾಗಿ ರಸ್ತೆಗಳು ಜಲಾವೃತಗೊಂಡಿವೆ.