ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತ; ನಾಳೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Bengaluru Rains: ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆ ಬುಧವಾರವೂ ಮುಂದುವರಿದಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಅಪರಾಹ್ನ ಭರ್ಜರಿ ಮಳೆ ಸುರಿದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ರಿಚ್ಮಂಡ್ ಟೌನ್, ಶಾಂತಿನಗರ, ಎಂ.ಜಿ. ರೋಡ್, ಸರ್ಜಾಪುರ, ಕೆ. ಆರ್. ಮಾರುಕಟ್ಟೆ, ಕಾರ್ಪೊರೇಷನ್ ಸರ್ಕಲ್ ಸೇರಿ ಹಲವೆಡೆ ಉತ್ತಮ ಮಳೆಯಾಗಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಸೆ. 30: ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆರ್ಭಟಿಸುತ್ತಿರುವ ವರುಣ ಇಂದೂ (ಬುಧವಾರ) ಹಾಜರಿ ಹಾಕಿದ್ದಾನೆ (Bengaluru Rains). ಬೆಂಗಳೂರಿನ ವಿವಿಧ ಭಾಗಗಳಲ್ಲಿ ಅಪರಾಹ್ನ ಭರ್ಜರಿ ಮಳೆ ಸುರಿದಿದ್ದು, ಸಾರ್ವಜನಿಕರು ಪರದಾಡಿದರು. ರಸ್ತೆಗಳಲ್ಲಿ ನೀರು ಕಟ್ಟಿ ನಿಂತು ವಾಹನ ಸಂಚಾರ ಅಸ್ತವ್ಯಸ್ತವಾಯಿತು. ರಿಚ್ಮಂಡ್ ಟೌನ್, ಶಾಂತಿನಗರ, ಎಂ.ಜಿ. ರೋಡ್, ಸರ್ಜಾಪುರ, ಕೆ.ಆರ್. ಮಾರುಕಟ್ಟೆ, ಕಾರ್ಪೊರೇಷನ್ ಸರ್ಕಲ್ ಸೇರಿ ಹಲವೆಡೆ ಉತ್ತಮ ಮಳೆಯಾಗಿದೆ. ಮಂಗಳವಾರ ಮಧ್ಯರಾತ್ರಿಯಿಂದ ಮುಂಜಾನೆವರೆಗೆ ಸುರಿದ ಮಳೆ ಅಪರಾಹ್ನ ಮತ್ತೊಮ್ಮೆ ಹಾಜರಾಯಿತು.
ಬೆಂಗಳೂರಿನ ಜತೆಗೆ ರಾತ್ರಿ ಕರಾವಳಿಯ ವಿವಿಧ ಕಡೆ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರವೂ (ಅಕ್ಟೋಬರ್ 1) ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ:
#ಮಳೆ #ಮುನ್ನೆಚ್ಚರಿಕೆ :#Heavy #rainfall (64.5mm to 115.4mm) #Warning for #Karnataka #Yellow #Alert@KarnatakaVarthe #KSNDMC #KarnatakaRains #SouthwestMonsoon pic.twitter.com/42XDqiEJjd
— Karnataka State Natural Disaster Monitoring Centre (@KarnatakaSNDMC) September 30, 2026
ನಾಳೆಯೂ ಸುರಿಯಲಿದೆ ವರ್ಷಧಾರೆ
ಗುರುವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಹಗುರ ಮಳೆ ಸುರಿಯಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಕಂಡು ಬರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ವರ್ಷಧಾರೆಯಾಗಲಿದೆ.
ಮುಂದಿನ ದಿನಗಳಲ್ಲಿ ಮಳೆ ಸಾಧ್ಯತೆ
ಅಕ್ಟೋಬರ್ 2ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಪಶ್ಚಿಮಮುಖಿಯಾಗಿ ಅರಬ್ಬಿ ಸಮುದ್ರ ಸೇರುವ ಬೇಡ್ತಿ, ಪೂರ್ವಕ್ಕೆ ಹರಿವಳೇ?
ದಕ್ಷಿಣ ಒಳನಾಡಿನ ಬೆಂಗಳೂರು (ನಗರ, ಗ್ರಾಮಾಂತರ), ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಇನ್ನು ಅಕ್ಟೋಬರ್ 3ರಂದೂ ಕರಾವಳಿ, ಬೆಂಗಳೂರು ಸೇರಿ ವಿವಿಧ ಕಡೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ ನೀನೊ ಪ್ರಭಾವದಿಂದ ಸದ್ಯ ರಾಜ್ಯಾದ್ಯಂತ ಮಳೆ ಕೊರತೆ ಎದುರಾಗಿದ್ದು, ಹಿಂಗಾರು ಮಳೆಯುತ್ತ ಎಲ್ಲರ ನಿರೀಕ್ಷೆ ನೆಟ್ಟಿದೆ.
ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.