ಬೆಂಗಳೂರು, ನ.12: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣದ (Dharmasthala case) ಬಗ್ಗೆ ಎಸ್‌ಐಟಿ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಇದರಿಂದ ಈ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರಿಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ. ಜಯಂತ್ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ, ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ಮತ್ತು ವಿಠಲ್‌ಗೌಡ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪಿ. ಎಂ. ನವಾಜ್ ಅವರಿದ್ದ ಪೀಠ ತಡೆಯಾಜ್ಞೆ ತೆರವುಗೊಳಿಸಿ ಆದೇಶಿಸಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಅರ್ಜಿದಾರರಿಗೆ ಈ ಹಿಂದೆ ಹಲವು ಬಾರಿ ನೋಟಿಸ್ ನೀಡಿ, 150 ತಾಸು ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಆದರೆ, ಆ ನೋಟಿಸ್ ಮತ್ತು ವಿಚಾರಣೆ ನಡೆಸಿರುವ ಸಂದರ್ಭದಲ್ಲಿ ಅರ್ಜಿದಾರರನ್ನು ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿತ್ತು. ಇದೀಗ ಅರ್ಜಿದಾರರನ್ನು ಆರೋಪಿಗಳನ್ನಾಗಿ ಪರಿಗಣಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ಪೀಠ, ತಡೆಯಾಜ್ಞೆ ತೆರವುಗೊಳಿಸಿ ವಿಚಾರಣೆಯನ್ನು ಮುಂದೂಡಿತು.
ಈ ಹಿಂದೆ ಅರ್ಜಿಯ ಸಂಬಂಧ ವಿಚಾರಣೆ ನಡೆದ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು, 'ಅರ್ಜಿದಾರರಿಗೆ ಈಗಾಗಲೇ 9 ಬಾರಿ ನೋಟಿಸ್ ಜಾರಿಗೊಳಿಸಿ ವಿಚಾರಣೆ ನಡೆಸಿದ್ದಾರೆ. ಆದರೆ ಎಫ್‌ಐಆರ್‌ನಲ್ಲಿ ಅವರನ್ನು ಆರೋಪಿಗಳೆಂದು ಉಲ್ಲೇಖಿಸಿಲ್ಲ. ಖುದ್ದಾಗಿ ನೋಟಿಸ್ ಜಾರಿ ಮಾಡದೇ ವಾಟ್ಸ್ಆ್ಯಪ್, ಇಮೇಲ್ ಮೂಲಕ ಜಾರಿ ಮಾಡಿದ್ದಾರೆ. ಬಿಎನ್‌ಎಸ್‌ಎಸ್ ಸೆಕ್ಷನ್ 35(3) ಅಡಿ ಸಮನ್ಸ್ ನೀಡಲಾಗಿದೆ. ಎಸ್‌ಐಟಿ ಸಮನ್ಸ್ ನೀಡಿರುವುದು ಕಾನೂನುಬಾಹಿರ. ಅರ್ಜಿದಾರರು ಆರೋಪಿಗಳೂ ಅಲ್ಲ, ಸಾಕ್ಷಿಗಳೂ ಅಲ್ಲ. ಹಾಗಾಗಿ, ನೋಟಿಸ್ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದರು.
ಅಲ್ಲದೇ, ರಾಜಕೀಯ ವೈರತ್ವ, ಧಾರ್ಮಿಕ ವೈರತ್ವ, ಸಂಘಟನಾತ್ಮಕ ವೈರತ್ವದಿಂದ ನೋಟಿಸ್‌ಗಳನ್ನು ನೀಡಲಾಗಿದೆ. ಇದೀಗ 10ನೇ ನೋಟಿಸ್ ನೀಡಿ ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ಕೂರಿಸುತ್ತಾರೆ. ಈಗಾಗಲೇ 150 ಗಂಟೆಗೂ ಅಧಿಕ ಕಾಲ ದೂರುದಾರರನ್ನು ವಿಚಾರಣೆ ನಡೆಸಲಾಗಿದೆ. ಆರಂಭದಲ್ಲಿ 211(ಎ) ಅಡಿ ಎಫ್‌ಐಆರ್ ದಾಖಲಿಸಿ ಬಳಿಕ ಇತರ ಸೆಕ್ಷನ್‌ಗಳನ್ನು ಸೇರ್ಪಡೆ ಮಾಡಿದ್ದಾರೆ. ಅದೂ ಎರಡೂವರೆ ತಿಂಗಳ ನಂತರ ಹೊಸ ಸೆಕ್ಷನ್‌ಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಪೀಠಕ್ಕೆ ತಿಳಿಸಿದ್ದರು.
ಈ ಸುದ್ದಿಯನ್ನೂ ಓದಿ | DK Shivakumar: ಧರ್ಮಸ್ಥಳ ಪ್ರಕರಣ; ಎಸ್‌ಐಟಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ: ಡಿ.ಕೆ. ಶಿವಕುಮಾರ್
ಎಸ್‌ಐಟಿ ಪರ ವಕೀಲರು, ಅರ್ಜಿದಾರರ ಪ್ರಚೋದನೆ ಮೇಲೆಯೇ ಚಿನ್ನಯ್ಯ ದೂರು ನೀಡಿದ್ದಾರೆ. ನಂತರ 164 ಹೇಳಿಕೆ ನೀಡಿ ಅರ್ಜಿದಾರರ ಮೇಲೆ ಆರೋಪ ಮಾಡಿದ್ದಾರೆ. ಆರಂಭದಲ್ಲಿ ಸಾಕ್ಷಿಗಳಾಗಿ ಅರ್ಜಿದಾರರ ಪ್ರಚೋದನೆ ನಡೆಸಲಾಗಿತ್ತು. ಧರ್ಮಸ್ಥಳ ಗ್ರಾಮದ 20 ಕಡೆ ಅಗೆದು ಪರಿಶೀಲನೆ ನಡೆಸಲಾಯಿತು. ಆನಂತರ ಆರೋಪ ಬಹುತೇಕ ಸುಳ್ಳೆಂದು ದೃಢಪಟ್ಟ ಹಿನ್ನೆಲೆಯಲ್ಲಿ ದೂರುದಾರರನ್ನು ಆರೋಪಿಗಳನ್ನಾಗಿ ಮಾಡಿ ತನಿಖೆ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು. ವಾದ ಆಲಿಸಿದ್ದ ನ್ಯಾಯಪೀಠ ಎಸ್ಐಟಿ ತನಿಖೆಗೆ ತಡೆ ನೀಡಿ ಆದೇಶಿಸಿತ್ತು.