ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸರ್ಕಾರದ ಪ್ರಕರಣಗಳಲ್ಲಿ ಸಮರ್ಥ ವಾದ ಮಂಡನೆಗೆ ಒತ್ತು ನೀಡಿ; ಪ್ರಾಸಿಕ್ಯೂಷನ್‌ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

Priyank Kharge: ಸರ್ಕಾರದ ಪರವಾಗಿ ನ್ಯಾಯಾಲಯಗಳಲ್ಲಿ ವಾದಿಸುವ ವಕೀಲರಿಗೆ ಅಗತ್ಯ ದಾಖಲೆಗಳು ಮತ್ತು ಮಾಹಿತಿ ಸಮಯಕ್ಕೆ ಸರಿಯಾಗಿ ತಲುಪುವುದು, ಇಲಾಖೆಗಳ ನಡುವೆ ನಿರಂತರ ಸಮನ್ವಯ, ಪ್ರಕರಣಗಳ ಪರಿಣಾಮಕಾರಿ ಮೇಲ್ವಿಚಾರಣೆ ಹಾಗೂ ತಂತ್ರಜ್ಞಾನದ ಸಮರ್ಪಕ ಬಳಕೆ ಈ ನಾಲ್ಕೂ ಅಂಶಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸರ್ಕಾರದ ಪ್ರಕರಣಗಳ ನಿರ್ವಹಣೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ.

ಬೆಂಗಳೂರು, ಸೆ. 11: ನ್ಯಾಯಾಲಯಗಳಲ್ಲಿ ಸರ್ಕಾರದ ಪರವಾಗಿ ನಡೆಯುವ ವಿವಿಧ ಮೊಕದ್ದಮೆಗಳಲ್ಲಿ ಸರ್ಕಾರದ ನಿಲುವು ಹಾಗೂ ಹಿತಾಸಕ್ತಿಯನ್ನು ಸಮರ್ಥವಾಗಿ ಬಿಂಬಿಸುವ ನಿಟ್ಟಿನಲ್ಲಿ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಗೃಹ, ಮಾಹಿತಿ ಹಾಗೂ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸೂಚಿಸಿದರು.

ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಪ್ರಕರಣಗಳು ಕೇವಲ ನ್ಯಾಯಾಲಯದಲ್ಲಿ ವಾದ ಮಂಡಿಸುವ ಹಂತಕ್ಕೆ ಸೀಮಿತವಾಗದೆ, ಪ್ರಕರಣದ ಆರಂಭಿಕ ಹಂತದಿಂದಲೇ ಸಂಬಂಧಿಸಿದ ಇಲಾಖೆಗಳು, ತನಿಖಾಧಿಕಾರಿಗಳು ಹಾಗೂ ಸರ್ಕಾರಿ ವಕೀಲರ ನಡುವೆ ಸಮನ್ವಯ ಇರಬೇಕು ಎಂದು ಹೇಳಿದರು.

ವ್ಯವಸ್ಥೆಯಲ್ಲಿನ ಲೋಪಗಳು, ಅಗತ್ಯ ಮಾಹಿತಿಯ ಕೊರತೆ ಅಥವಾ ಇಲಾಖೆಗಳ ನಡುವಿನ ಸಮನ್ವಯದ ಕೊರತೆಯಿಂದ ಯಾವುದೇ ಸರ್ಕಾರದ ಪ್ರಕರಣ ದುರ್ಬಲವಾಗಬಾರದು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸುವ ಸರ್ಕಾರಿ ವಕೀಲರಿಗೆ ಪ್ರಕರಣದ ಸಂಪೂರ್ಣ ಹಿನ್ನೆಲೆ, ಅಗತ್ಯ ದಾಖಲೆಗಳು ಹಾಗೂ ವಾಸ್ತವಾಂಶಗಳು ಸಮಯಕ್ಕೆ ಸರಿಯಾಗಿ ಲಭ್ಯವಾಗುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸಚಿವರು ನಿರ್ದೇಶಿಸಿದರು.‌

ದೇಶದ ಹಿತಾಸಕ್ತಿ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ನ್ಯಾಯಾಲಯದ ಪ್ರಕರಣಗಳ ಕುರಿತು ಸಮರ್ಪಕ ಹಾಗೂ ಸಂಪೂರ್ಣ ಮಾಹಿತಿಯನ್ನು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಗೆ ಕಾಲಮಿತಿಯಲ್ಲಿ ಸಲ್ಲಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು, ಆದೇಶಗಳು, ಇಲಾಖೆಯ ನಿಲುವು ಹಾಗೂ ಅಗತ್ಯ ಕಾನೂನು ಮಾಹಿತಿ ಲಭ್ಯವಿದ್ದಾಗ ಮಾತ್ರ ನ್ಯಾಯಾಲಯದಲ್ಲಿ ಸರ್ಕಾರದ ಪರ ವಾದವನ್ನು ಪರಿಣಾಮಕಾರಿಯಾಗಿ ಮಂಡಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಆದ್ಯತೆ

ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಎದುರಿಸುವ ಪ್ರಕ್ರಿಯೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸಲು ತಂತ್ರಜ್ಞಾನ ಕೌಶಲ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಪ್ರಕರಣಗಳ ಮಾಹಿತಿ, ದಾಖಲೆಗಳ ನಿರ್ವಹಣೆ, ಪ್ರಕರಣಗಳ ಪ್ರಗತಿ ಹಾಗೂ ನ್ಯಾಯಾಲಯದ ಆದೇಶಗಳು ಸೇರಿದಂತೆ ಅಗತ್ಯ ಮಾಹಿತಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಮೂಲಕ ಸರ್ಕಾರಿ ವಕೀಲರಿಗೆ ಪ್ರಕರಣದ ಸಂಪೂರ್ಣ ಮಾಹಿತಿ ತ್ವರಿತವಾಗಿ ಲಭ್ಯವಾಗುವಂತೆ ವ್ಯವಸ್ಥೆಯನ್ನು ಬಲಪಡಿಸಬೇಕು. ತಂತ್ರಜ್ಞಾನ ಆಧಾರಿತ ಪ್ರಕರಣ ನಿರ್ವಹಣೆಯಿಂದ ಪ್ರಕರಣಗಳ ಮೇಲ್ವಿಚಾರಣೆ ಹಾಗೂ ಇಲಾಖೆಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಸುಧಾರಿಸಬಹುದು ಎಂದು ಅವರು ಹೇಳಿದರು.

ರಾಜ್ಯದಾದ್ಯಂತ 8 ವಿಭಾಗಗಳಲ್ಲಿ ಕಾನೂನು ಅಧಿಕಾರಿಗಳ ಕಾರ್ಯನಿರ್ವಹಣೆ

ಇಲಾಖೆಯ ಕಾನೂನು ಅಧಿಕಾರಿ (ಹಿರಿಯ) ಹುದ್ದೆಗಳು ರಾಜ್ಯದ 8 ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಬೆಳಗಾವಿ, ಕಲಬುರಗಿ ಹಾಗೂ ಬಳ್ಳಾರಿ ವಿಭಾಗಗಳ ವ್ಯಾಪ್ತಿಯಲ್ಲಿ ವಿವಿಧ ಜಿಲ್ಲೆಗಳನ್ನು ಒಳಗೊಂಡು ಇಲಾಖೆಯ ಕಾರ್ಯನಿರ್ವಹಣೆ ನಡೆಯುತ್ತಿದೆ.

2026ರ ಜೂನ್ ಪರಿಶೀಲನಾ ಅವಧಿಯಲ್ಲಿ ಒಟ್ಟು 14,320 ಪ್ರಕರಣಗಳು ವಿಲೇವಾರಿಯಾಗಿವೆ. ಈ ಅವಧಿಯಲ್ಲಿ ಎನ್‌.ಡಿ.ಪಿ.ಎಸ್. ಪ್ರಕರಣಗಳಲ್ಲಿ ಶೇ. 40.74ರಷ್ಟು ಶಿಕ್ಷೆ ಪ್ರಮಾಣ ಹಾಗೂ ವಿದ್ಯುತ್ ಕಾಯ್ದೆಯ ಪ್ರಕರಣಗಳಲ್ಲಿ ಶೇ. 50ರಷ್ಟು ಶಿಕ್ಷೆ ಪ್ರಮಾಣ ದಾಖಲಾಗಿದೆ.

ವಿಶೇಷ ಪ್ರಕರಣಗಳ ನಿರ್ವಹಣೆಗೆ ಆದ್ಯತೆ

ಎಸ್‌.ಸಿ./ಎಸ್‌.ಟಿ. ಕಾಯ್ದೆ, ಪೋಕ್ಸೋ, ಎನ್‌.ಡಿ.ಪಿ.ಎಸ್., ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ, ಕರ್ನಾಟಕ ಠೇವಣಿದಾರರ ಹಿತರಕ್ಷಣೆ ಕಾಯ್ದೆ ಸೇರಿ ವಿವಿಧ ವಿಶೇಷ ಕಾಯ್ದೆಗಳಡಿ ದಾಖಲಾಗಿರುವ ಪ್ರಕರಣಗಳ ನಿರ್ವಹಣೆಯನ್ನೂ ಸಭೆಯಲ್ಲಿ ಪರಿಶೀಲಿಸಲಾಯಿತು. ಮಾಹಿತಿಯಂತೆ ಎಸ್‌.ಸಿ./ಎಸ್‌.ಟಿ. ಪ್ರಕರಣಗಳಲ್ಲಿ ಶೇ. 9.43ರಷ್ಟು ಹಾಗೂ ಎಸ್‌.ಸಿ./ಎಸ್‌.ಟಿ. ಜತೆಗೆ ಪೋಕ್ಸೋ ಪ್ರಕರಣಗಳಲ್ಲಿ ಶೇ. 14.28ರಷ್ಟು ಶಿಕ್ಷೆ ಪ್ರಮಾಣ ದಾಖಲಾಗಿದೆ. ಮಹಿಳೆಯರು, ಮಕ್ಕಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಪರಿಣಾಮಕಾರಿ ಕಾನೂನು ಕ್ರಮ ಹಾಗೂ ಪ್ರಕರಣಗಳ ತ್ವರಿತ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ಸಚಿವರು ಸೂಚಿಸಿದರು.

416 ಪ್ರಕರಣಗಳಿಗೆ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಮುಖ ಪ್ರಕರಣಗಳ ನಿರ್ವಹಣೆಗೆ ಸರ್ಕಾರದಿಂದ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಿರುವ ಬಗ್ಗೆಯೂ ಸಭೆಯಲ್ಲಿ ಪರಿಶೀಲಿಸಲಾಯಿತು. ಪ್ರಮುಖ ಹಾಗೂ ಸೂಕ್ಷ್ಮ ಪ್ರಕರಣಗಳಲ್ಲಿ ಸರ್ಕಾರದ ಹಿತಾಸಕ್ತಿಯನ್ನು ಪರಿಣಾಮಕಾರಿಯಾಗಿ ಪ್ರತಿನಿಧಿಸುವುದರ ಜತೆಗೆ, ಪ್ರಕರಣಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸುವ ವ್ಯವಸ್ಥೆ ಇರಬೇಕು ಎಂದು ಸಚಿವರು ತಿಳಿಸಿದರು.

ಸರ್ಕಾರದ ಪರವಾಗಿ ನ್ಯಾಯಾಲಯಗಳಲ್ಲಿ ವಾದಿಸುವ ವಕೀಲರಿಗೆ ಅಗತ್ಯ ದಾಖಲೆಗಳು ಮತ್ತು ಮಾಹಿತಿ ಸಮಯಕ್ಕೆ ಸರಿಯಾಗಿ ತಲುಪುವುದು, ಇಲಾಖೆಗಳ ನಡುವೆ ನಿರಂತರ ಸಮನ್ವಯ, ಪ್ರಕರಣಗಳ ಪರಿಣಾಮಕಾರಿ ಮೇಲ್ವಿಚಾರಣೆ ಹಾಗೂ ತಂತ್ರಜ್ಞಾನದ ಸಮರ್ಪಕ ಬಳಕೆ—ಈ ನಾಲ್ಕೂ ಅಂಶಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸರ್ಕಾರದ ಪ್ರಕರಣಗಳ ನಿರ್ವಹಣೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪೊಲೀಸ್ ವಾಹನ ವ್ಯವಸ್ಥೆ ಆಧುನೀಕರಣಕ್ಕೆ ರಾಜ್ಯ ಸರ್ಕಾರ ಹೊಸ ಚಿಂತನೆ; ಬಾಡಿಗೆ ಮಾದರಿಯ ಸಾಧ್ಯತೆ ಪರಿಶೀಲನೆ

ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ.ಎಸ್. ಪೊನ್ನಣ್ಣ, ರಾಜ್ಯದ ಅಡ್ವೋಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರಕುಮಾರ್‌ ಕಠಾರಿಯ, ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಹಾಗೂ ಹಿರಿಯ ಸರ್ಕಾರಿ ವಕೀಲರು ಪಾಲ್ಗೊಂಡಿದ್ದರು.