ಬೆಂಗಳೂರು: ಟಿ.ನರಸೀಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಧನಂಜಯ ಕುರಿತ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಅವರ ಹೇಳಿಕೆಯನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ತೀವ್ರವಾಗಿ ಖಂಡಿಸಿದ್ದಾರೆ. ಮೈಸೂರಿನ ಪೇಟೆ ರೌಡಿ ಪೊಲೀಸರನ್ನು ಬೆದರಿಸಿದ್ದಾನೆ. "ಪೊಲೀಸ್ ಠಾಣೆಗೆ ನುಗ್ಗಿದರೆ" ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಪ್ರತಾಪ್ ಸಿಂಹ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿರುವ ಅವರು, ಮೈಸೂರಿನ ಕಡೆಯ "ಪೇಟೆ ರೌಡಿ"ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಅಸ್ತಿತ್ವ ಕಳೆದುಕೊಂಡು ಕತ್ತಲೆ ಜಗತ್ತಿನ ಅತೃಪ್ತ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ ಎಂದು ಟೀಕಿಸಿದ್ದಾರೆ.
"ಪೊಲೀಸ್ ಠಾಣೆಗೆ ನುಗ್ಗುತ್ತೇನೆ" ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದೆ, ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು! ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲು ಗೃಹ ಇಲಾಖೆ ಸನ್ನದ್ದವಾಗಿದೆ.
ಸೂಕ್ಷ್ಮ ಸಂದರ್ಭಗಳನ್ನು ಬಳಸಿಕೊಂಡು ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪೊಲೀಸರ ನೈತಿಕ ಸ್ಥೈರ್ಯ ಕಸಿಯಲು ಬಿಡುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.