ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Pourakarmikas: ಪೌರಕಾರ್ಮಿಕರು ಕೆಲಸಕ್ಕೆ ಸಮರ್ಪಕವಾಗಿ ಹಾಜರಾಗದಿದ್ರೆ ನಿರ್ದಾಕ್ಷಿಣ್ಯವಾಗಿ ವಜಾ: ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ

Krishna Byre Gowda: ಕೆಲಸಕ್ಕೆ ನಿಯಮಿತವಾಗಿ ಹಾಜರಾಗದ ಪೌರಕಾರ್ಮಿಕರಿಗೆ ಮೂರು ಬಾರಿ ನೋಟಿಸ್ ನೀಡಲಾಗುವುದು. ನೋಟಿಸ್‌ಗಳಿಗೆ ಸ್ಪಂದಿಸದಿದ್ದರೆ ನಿಯಮಾನುಸಾರ ಸೇವೆಯಿಂದ ಸಿಬ್ಬಂದಿಯನ್ನು ವಜಾಗೊಳಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.

ಪೌರಕಾರ್ಮಿಕರು ಕೆಲಸಕ್ಕೆ ಹಾಜರಾಗದಿದ್ರೆ ನಿರ್ದಾಕ್ಷಿಣ್ಯವಾಗಿ ವಜಾ

-

Prabhakara R
Prabhakara R Sep 5, 2026 11:35 PM

ಬೆಂಗಳೂರು: ಕೆಲಸಕ್ಕೆ ಸಮರ್ಪಕವಾಗಿ ಹಾಜರಾಗದ ಪೌರಕಾರ್ಮಿಕರನ್ನು (Pourakarmikas) ಕೆಲಸದಿಂದ ನಿರ್ದಾಕ್ಷಿಣ್ಯವಾಗಿ ವಜಾಗೊಳಿಸಬೇಕು ಎಂದು ಅಧಿಕಾರಿಗಳಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಸೂಚಿಸಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿ ಜನಪ್ರತಿನಿಧಿಗಳೊಂದಿಗೆ ವಿಕಾಸಸೌಧದಲ್ಲಿ ಇಂದು ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಬಿಎ ಅಸ್ತಿತ್ವಕ್ಕೆ ಬಂದ ಬಳಿಕ ಹೊಸ ವ್ಯವಸ್ಥೆಗೆ ಅಗತ್ಯವಿರುವ ವ್ಯವಸ್ಥಿತ ಕಾರ್ಯವಿಧಾನವನ್ನು ರೂಪಿಸಲಾಗುತ್ತಿದೆ ಎಂದರು.

ಪೌರಕಾರ್ಮಿಕರನ್ನು ನಿಯೋಜಿಸಿರುವ ಸ್ಥಳಗಳಲ್ಲಿ ಸುಮಾರು ಶೇ.30ರಷ್ಟು ಮಂದಿ ಕರ್ತವ್ಯಕ್ಕೆ ಸಮರ್ಪಕವಾಗಿ ಹಾಜರಾಗುತ್ತಿಲ್ಲ. ಕೆಲಸಕ್ಕೆ ನಿಯಮಿತವಾಗಿ ಹಾಜರಾಗದ ಪೌರಕಾರ್ಮಿಕರಿಗೆ ಮೂರು ಬಾರಿ ನೋಟಿಸ್ ನೀಡಲಾಗುವುದು. ನೋಟಿಸ್‌ಗಳಿಗೆ ಸ್ಪಂದಿಸದಿದ್ದರೆ ನಿಯಮಾನುಸಾರ ಸೇವೆಯಿಂದ ವಜಾಗೊಳಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುವುದು ಪೌರ ಕಾರ್ಮಿಕರ ಆದ್ಯ ಕರ್ತವ್ಯ. ಅವರು ಕಸ ಸಂಗ್ರಹಣೆಗೆ ತೆರಳದಿದ್ದರೆ ಜನ ಕಸವನ್ನು ರಸ್ತೆಗೆ ಎಸೆಯುತ್ತಾರೆ. ಇದರಿಂದ ಅನಗತ್ಯವಾಗಿ ಕಸದ ಬ್ಲಾಕ್ ಸ್ಪಾಟ್‌ಗಳು ನಿರ್ಮಾಣಗೊಳ್ಳುತ್ತಿವೆ. ಶೇ.30 ರಷ್ಟು ಪೌರ ಕಾರ್ಮಿಕರು ಪ್ರತಿನಿತ್ಯ ತಮ್ಮ ಕೆಲಸಕ್ಕೇ ಹಾಜರಾಗದಿದ್ದಲ್ಲಿ ನಗರವನ್ನು ಸ್ವಚ್ಚವಾಗಿಡುವುದು ಹೇಗೆ ಎಂದು ಅಸಮಾಧಾನ ಹೊರಹಾಕಿದರು.

ಅನಾಥ ವಾಹನಗಳ ತೆರವಿಗೆ ಕ್ರಮ:

ಅನಾಥ ಹಾಗೂ ಬಳಕೆಯಲ್ಲಿಲ್ಲದ ವಾಹನಗಳನ್ನು ತೆರವುಗೊಳಿಸಲು ಗುತ್ತಿಗೆದಾರರನ್ನು ನಿಯೋಜಿಸಲಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಈ ಕಾರ್ಯದ ಮೇಲ್ವಿಚಾರಣೆ ನಡೆಸಿ, ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುವ ಕೆಲಸ ಮಾಡಬೇಕು. ಇದಲ್ಲದೆ ತ್ಯಾಜ್ಯ ತೆರವುಗೊಳಿಸ ಹಾಗೂ ಖಾಸಗಿ ನಿವೇಶನಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುವುದರ ಮೇಲೂ ಮೇಲ್ವಿಚಾರಣೆ ಮಾಡಿ ತೆರವುಗೊಳಿಸುವ ಕೆಲಸಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

ತ್ಯಾಜ್ಯ ಸಂಗ್ರಹಣೆಗೆ ಹೊಸ ವ್ಯವಸ್ಥೆ:

ನಗರದಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ಒಟ್ಟು 33 ಪ್ಯಾಕೇಜ್‌ಗಳನ್ನು ರೂಪಿಸಲಾಗಿದೆ. ಇದರಲ್ಲಿ 21 ಪ್ಯಾಕೇಜ್‌ಗಳಿಗೆ ಅನುಮೋದನೆ ದೊರೆತಿದ್ದು, ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ಎರಡು ತಿಂಗಳಲ್ಲಿ ಕಾರ್ಯಾರಂಭ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಪ್ರಸ್ತುತ ಇರುವ ಆಟೋ ಟಿಪ್ಪರ್‌ಗಳ ಸಾಮರ್ಥ್ಯ 1 ಟನ್ ಮಾತ್ರವಿದ್ದು, ಹೊಸ ಟೆಂಡರ್‌ನಲ್ಲಿ ತ್ಯಾಜ್ಯ ಸಂಗ್ರಹಣೆಗೆ 3 ಟನ್ ಸಾಮರ್ಥ್ಯದ ಹೊಸ ವಾಹನಗಳನ್ನು ಬಳಸಲಾಗುವುದು. ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಕಡ್ಡಾಯವಾಗಿರಲಿದೆ. ಪ್ರತಿಯೊಂದು ಆಟೋಗೆ ನಿರ್ದಿಷ್ಟ ಮಾರ್ಗವನ್ನು ನಿಗದಿಪಡಿಸಲಾಗುವುದು ಹಾಗೂ ಪ್ರತಿದಿನವೂ ನಿಗದಿತ ಮಾರ್ಗದಲ್ಲಿ ಸಂಚರಿಸಿ ತ್ಯಾಜ್ಯ ಸಂಗ್ರಹಿಸುವುದು ಕಡ್ಡಾಯವಾಗಿರಲಿದೆ.

ಸಾರ್ವಜನಿಕರು ರಸ್ತೆಗಳಲ್ಲಿ ತ್ಯಾಜ್ಯವನ್ನು ಬಿಸಾಡುವ ಪದ್ಧತಿಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ರಸ್ತೆ ಬದಿಯಲ್ಲಿ ಕಸದ ಡಬ್ಬಿಗಳನ್ನು ಇಡುವ ಪದ್ಧತಿಯನ್ನು ಮುಂದುವರಿಸಲಾಗುವುದಿಲ್ಲ. ಪ್ರತಿಯೊಂದು ಮನೆಗೂ ತ್ಯಾಜ್ಯ ಸಂಗ್ರಹಣಾ ವಾಹನವನ್ನು ಕಳುಹಿಸಲಾಗುವುದು. ಸಾರ್ವಜನಿಕರು ತಮ್ಮ ಮನೆಯ ತ್ಯಾಜ್ಯವನ್ನು ಕಡ್ಡಾಯವಾಗಿ ವಾಹನಕ್ಕೆ ನೀಡಬೇಕು. ರಸ್ತೆ ಬದಿಯಲ್ಲಿ ತ್ಯಾಜ್ಯ ಹಾಕಬಾರದು ಎಂದು ಸಚಿವರು ಮನವಿ ಮಾಡಿದರು.

ಪ್ರಸ್ತುತ ಪ್ರತಿನಿತ್ಯ 5200 ಮೆ.ಟ ತ್ಯಾಜ್ಯ ಸಂಗ್ರಹಿಸುವ ಸಾಮರ್ಥ್ಯವಿದ್ದು, ಹೊಸ ಟೆಂಡರ್ ವ್ಯವಸ್ಥೆಯಡಿ ದಿನಕ್ಕೆ ಸುಮಾರು 9,000 ಮೆ. ಟನ್ ತ್ಯಾಜ್ಯವನ್ನು ಸಂಗ್ರಹಿಸಿ ಸಾಗಿಸುವ ಸಾಮರ್ಥ್ಯ ಹೊಂದಿರುವ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ. ಸಾರ್ವಜನಿಕರು ಎಷ್ಟು ಪ್ರಮಾಣದ ತ್ಯಾಜ್ಯ ನೀಡಿದರೂ ಅದನ್ನು ಸಮರ್ಪಕವಾಗಿ ಸಂಗ್ರಹಿಸಿ ವಿಲೇವಾರಿ ಮಾಡುವ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿಶೇಷ ಅಭಿಯಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.