ಸಚಿವ ಡಿ.ಸುಧಾಕರ್ ನಿಧನದ ಹಿನ್ನೆಲೆ ರಾಜ್ಯದಲ್ಲಿ 3 ದಿನ ಶೋಕಾಚರಣೆ; ನಾಳೆ ಚಿತ್ರದುರ್ಗ ಜಿಲ್ಲೆಗೆ ರಜೆ ಘೋಷಣೆ
Minister D Sudhakar Death: ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಸಚಿವ ಡಿ.ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಮಾಡುತ್ತಿದ್ದು, ಚಿತ್ರದುರ್ಗದಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.
ದಿವಂಗತ ಸಚಿವ ಡಿ. ಸುಧಾಕರ್ ಮತ್ತು ಸಿಎಂ ಸಿದ್ದರಾಮಯ್ಯ. -
ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ಅವರ ಅಗಲಿಕೆಯಿಂದ (Minister D Sudhakar Death) ರಾಜಕೀಯ ಕ್ಷೇತ್ರಕ್ಕೆ ಬಹುದೊಡ್ಡ ನಷ್ಟವುಂಟಾಗಿದೆ. ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಮಾಡುತ್ತಿದ್ದು, ಚಿತ್ರದುರ್ಗದಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.
ಸದಾಶಿವ ನಗರದ ನಿವಾಸದಲ್ಲಿ ಸಚಿವ ಡಿ.ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಸಿಎಂ ಮಾತನಾಡಿದರು. ಇಂದು ಮುಂಜಾನೆ ನಿಧನರಾದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಆಗಿದ್ದ ಡಿ.ಸುಧಾಕರ್ ಅವರ ಅಂತಿಮ ದರ್ಶನ ಪಡೆದು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದೆ ಎಂದು ಹೇಳಿದರು.
ಸುಧಾಕರ್ ಅವರು ಮೂಲತಃ ಚಳ್ಳಕರೆಯವರು. 2008ರಿಂದ ಹಿರಿಯೂರು ಶಾಸಕರಾಗಿದ್ದರು. ಎರಡನೇ ಬಾರಿಗೆ ಮಂತ್ರಿಯಾಗಿದ್ದ ಅವರು ಅತ್ಯಂತ ಜನಪ್ರಿಯ ವ್ಯಕ್ತಿ. ಸಮಾಜ ಕಲ್ಯಾಣ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಹಕಾರ ಕ್ಷೇತ್ರದಲ್ಲಿಯೂ ಸಾಕಷ್ಟು ಕೊಡುಗೆ ನೀಡಿರುವ ಅವರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿದ್ದರು. ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಸುಧಾಕರ್ ಅವರ ಚಿಕ್ಕಪ್ಪ ಜಯಣ್ಣ ಕೂಡ ಶಾಸಕರಾಗಿದ್ದವರು. ರಾಜಕೀಯ ಕ್ಷೇತ್ರದಲ್ಲಿ ಅಪಾರ ಜನಪ್ರಿಯತೆ ಗಳಿಸಿಕೊಂಡಿದ್ದರು. ಚಳ್ಳಕೆರೆ ಎಸ್.ಟಿ ಮೀಸಲು ಕ್ಷೇತ್ರವಾಗಿದ್ದರಿಂದ ಹಿರಿಯೂರಿನಿಂದ ಸ್ಪರ್ಧಿಸಿ ಗೆದ್ದಿದ್ದರು, ರೈತರ ಹಾಗೂ ಬಡವರ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದು, ಬಡವರ ಬಂಧು ಎಂದೇ ಖ್ಯಾತರಾಗಿದ್ದರು.
ಸುಧಾಕರ್ ಅವರು ಪತ್ನಿ, ಪುತ್ರಿ ಹಾಗೂ ಪುತ್ರ ಸೇರಿದಂತೆ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬದವರಿಗೆ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ನಾಳೆ ಚಳ್ಳಕೆರೆಯಲ್ಲಿ ಸಂಜೆ 4.00 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದ್ದು, ನಾನು ಸಹ ಭಾಗಿಯಾಗುತ್ತೇನೆ. ಸುಧಾಕರ್ ಅವರ ಮತಕ್ಷೇತ್ರ ಹಿರಿಯೂರಿನಲ್ಲಿ ಅವರ ಪಾರ್ಥಿವ ಶರೀರವನ್ನು ದರ್ಶನಕ್ಕಾಗಿ ಇರಿಸಲಿದ್ದು, ನಾಳೆ ಚಳ್ಳಕೆರೆಗೆ ತೆಗೆದುಕೊಂಡು ಹೋಗಲಾಗುವುದು ಎಂದು ತಿಳಿಸಿದರು.
ಸಚಿವ ಸುಧಾಕರ್ ನಿಧನಕ್ಕೆ ಸಿಎಂ ಸಂತಾಪ
ಸಚಿವ ಡಿ. ಸುಧಾಕರ್ ನಿಧನಕ್ಕೆ ಸಿಎಂ ಸಂತಾಪ ಸೂಚಿಸಿದ್ದಾರೆ. ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು.
ಸಚಿವ ಡಿ. ಸುಧಾಕರ್ ನಿಧನ; ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರಿಂದ ಸಂತಾಪ
ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ, ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಸುಧಾಕರ್ ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನಗಳಿಗೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.