JDS Protest: ವಿಧಾನಸೌಧ ಮುತ್ತಿಗೆಗೆ ಯತ್ನ; ನಿಖಿಲ್ ಕುಮಾರಸ್ವಾಮಿ ಸೇರಿ ಹಲವು ಜೆಡಿಎಸ್ ನಾಯಕರು ವಶಕ್ಕೆ
Sakappa Saku Congress Sarkara: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಜೆಡಿಎಸ್ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿ ಹಲವು ಜೆಡಿಎಸ್ ನಾಯಕರು ಪಾಲ್ಗೊಂಡಿದ್ದರು.

ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


ರಾಜ್ಯದಲ್ಲಿ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಜೆಡಿಎಸ್ ಸಮರ ಸಾರಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಜೆಡಿಎಸ್ ಪಕ್ಷದಿಂದ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ದಳ ಕಾರ್ಯಕರ್ತರು, ಮುಖಂಡರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಸಂಸದರಾದ ಮಲ್ಲೇಶ್ ಬಾಬು ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು ಸೇರಿದಂತೆ ಅನೇಕ ನಾಯಕರು ಅಸಂಖ್ಯಾತ ಕಾರ್ಯಕರ್ತರು ಪಾಲ್ಗೊಂಡಿದ್ದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದರು. ಎಲ್ಲೆಡೆ ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಫಲಕಗಳು ರಾರಾಜಿಸಿದವು.

ಇನ್ನು ಪ್ರತಿಭಟನಾ ಸಭೆ ಮುಕ್ತಾಯವಾದ ನಂತರ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಾಯಕರು, ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಅಡ್ಡಗಟ್ಟಿದ ಪೊಲೀಸರು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ಮುಖಂಡರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನನ್ನ ಬಳಿ ಟನ್ ಗಟ್ಟಲೆ ದಾಖಲೆಗಳು ಇವೆ ಎಂಬುದು ನಿಜ. ಆದರೆ ಕೆಲವರು ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ದನಿಯನ್ನು ಅಡಗಿಸುವ ಕೆಲಸ ಯಾರಿಂದಲೂ ಸಾಧ್ಯವಿಲ್ಲ. ಹೆದರುವ ವ್ಯಕ್ತಿಯೂ ನಾನಲ್ಲ ಎಂದು ಗುಡುಗಿಸಿದರು.

ಕಾಂಗ್ರೆಸ್ ಪಕ್ಷದ ಪುಢಾರಿಗಳು ನನ್ನನ್ನು ಹೆದರಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಗೊತ್ತಿರಲಿ, ನಾನು ಹೆದರುವ ವ್ಯಕ್ತಿ ಅಲ್ಲ. ನನ್ನ ವಿರುದ್ಧ ಪ್ರತಿಭಟನೆ ಮಾಡಿ ಲಾರಿಯಲ್ಲಿ ದಾಖಲೆಗಳನ್ನು ತಂದು ಕೊಡುತ್ತಾರಂತೆ. ತಂದು ಕೊಡಲಿ, ನಾನೂ ನೋಡುತ್ತೇನೆ. ಯಾವ ಮಟ್ಟದಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಕಾಂಗ್ರೆಸ್ ಪುಡಾರಿಗಳು ಎನ್ನುವುದು ನನಗೆ ಗೊತ್ತಿದೆ. ನನ್ನಲ್ಲಿರುವ ದಾಖಲೆಗಳನ್ನು ಬಿಚ್ಚಿಟ್ಟರೆ ಜನರೇ ಇವರನ್ನು ಓಡಿಸುತ್ತಾರೆ ಎಂದು ಎಚ್ಡಿಕೆ ಎಚ್ಚರಿಕೆ ನೀಡಿದರು.

ಬೆಲೆ ಏರಿಕೆಗೆ ಒಂದು ಮಿತಿ ಬೇಡವೇ? ದರ ಏರಿಕೆ ಎಂದರೆ ಸುಲಿಗೆ. ಕೆಂಪೇಗೌಡರು ದೂರದೃಷ್ಟಿಯಿಂದ ಕಟ್ಟಿದ್ದ ಈ ನಗರವನ್ನು ಸುಲಿಗೆಗೆ ಕೇಂದ್ರ ಸ್ಥಾನ ಮಾಡಿಕೊಂಡಿದ್ದಾರೆ. ದೇವರೇ ಬಂದರೂ ಈ ನಗರವನ್ನು ಸರಿಮಾಡಲು ಆಗಲ್ಲ ಎಂದು ಸ್ವತಃ ಡಿಸಿಎಂ ಅವರೇ ಹೇಳಿದ್ದಾರೆ. ಗ್ಯಾರಂಟಿ ಹೆಸರು ಹೇಳಿಕೊಂಡು ಬಂದ ಇವರು, ಈಗ ಜನರನ್ನು ಕಿತ್ತು ತಿನ್ನುತ್ತಿದ್ದಾರೆ. ನುಡಿದಂತೆ ನಡೆದಿದ್ದೇವೆ ಅಂತಾರೆ, ಹಾಗೆಂದರೆ ಜನರನ್ನು ಕಿತ್ತು ತಿನ್ನುವುದಾ? ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ನಿಖಿಲ್ ಕುಮಾರಸ್ವಾಮಿ ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡು ಶೂನ್ಯವಾಗಿದೆ. ಕಾಂಗ್ರೆಸ್ ಎರಡು ವರ್ಷಗಳ ಅಧಿಕಾರದಲ್ಲಿ ರಾಜ್ಯದ ಜನತೆಗೆ ಸಂಕಷ್ಟದ ದಿನಗಳನ್ನ ತಂದೊಡ್ಡಿದೆ. ಬರ್ತ್ ಸರ್ಟಿಫಿಕೇಟ್ನಿಂದ ಡೆತ್ ಸರ್ಟಿಫಿಕೇಟ್ವರೆಗೂ ದರ ಹೆಚ್ಚಳ ಮಾಡಿದ್ದಾರೆ. ಬಸ್, ಮೆಟ್ರೋ, ಆಸ್ಪತ್ರೆ ಶುಲ್ಕ ಎಲ್ಲದರ ಬೆಲೆ ಏರಿಕೆ ಮಾಡಿದ್ದಾರೆ ಎಂದು ಕಿಡಿಕಾರಿದರು.

ಈ ಸರ್ಕಾರದಲ್ಲಿ ನಾವು ತೆಗೆದುಕೊಳ್ಳುವ ಗಾಳಿ ಒಂದು ಬಿಟ್ಟು ಇನ್ನೆಲ್ಲದರ ಬೆಲೆ ಏರಿಕೆ ಮಾಡಿದ್ದಾರೆ. ಸಿಎಂ ಆರ್ಥಿಕ ಸಲಹೆಗಾರರೇ ಕರ್ನಾಟಕದಲ್ಲಿ ಭ್ರಷ್ಟಾಚಾರ ಮೊದಲನೇ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ. ಸತ್ಯವಾದ ಮಾತನ್ನ ಹೇಳಿದ್ದಾರೆ, ಬಸವರಾಜ ರಾಯರೆಡ್ಡಿ ಅವರೇ ನಮಗೊಂದು ಅವಕಾಶ ಕೊಡಿ ಕಮೀಷನ್ ಭ್ರಷ್ಟಾಚಾರ ಸಂಪೂರ್ಣವಾಗಿ ನಿರ್ಮೂಲನೆ ಮಾಡ್ತೀವಿ. ಸ್ವ ಪಕ್ಷದ ಸಚಿವರ ಕುಟುಂಬಸ್ಥರು ಕಮಿಷನ್ ಏಜೆಂಟ್ ಆಗಿ ಕೆಲಸ ಮಾಡ್ತಿದ್ದಾರೆ ಎಂದು ಅವರು ಆರೋಪಿಸಿದರು.

ಕಾಂಗ್ರೆಸ್ ನಾಯಕರು ದಾಖಲೆಗಳನ್ನು ನಮ್ಮ ಕಚೇರಿಗೆ ಲಾರಿ ಕಳಿಸುವ ಬದಲು ಬೆಂಗಳೂರ ನಗರದಲ್ಲಿ ತುಂಬಿರುವ ಕಸವನ್ನು ಎತ್ತಲು ಅದನ್ನು ಬಳಸಿ , ಇದರಿಂದ ಬೆಂಗಳೂರು ಜನಕ್ಕೂ ಉಪಯೋಗ ಆಗಲಿದೆ, ಬೆಂಗಳೂರು ಕಸದಿಂದ ನಾರುತ್ತಿದೆ, ನಿಮ್ಮ ಲಾರಿಯಲ್ಲಿ ಆ ಕಸವನ್ನು ತುಂಬಿಕೊಂಡು ಹೋಗಿ ಬೆಂಗಳೂರನ್ನು ಕಸಮುಕ್ತಗೊಳಿಸಿ ಎಂದು ಡಿಕೆ ಶಿವಕುಮಾರ್ಗೆ ನಿಖಿಲ್ ಅವರು ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದರು.