ಬೆಂಗಳೂರು: ಪತ್ರಕರ್ತೆ, ಕಂಟೆಂಟ್ ಕ್ರಿಯೇಟರ್ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಡಾ. ನಂದಿನಿ ಕೆ.ಎಲ್. ಅವರು ಸೋಶಿಯಲ್ ಮೀಡಿಯಾದಲ್ಲಿ ಪ್ರಸ್ತುತ ಮುಂಚೂಣಿಯಲ್ಲಿರುವ ವಿಡಿಯೊ ಕ್ರಿಯೇಟರ್. ಇವರ ವಿಡಿಯೊಗಳು ಕೋಟಿಗಟ್ಟಲೆ ವೀಕ್ಷಣೆಗಳನ್ನೂ ಪಡೆದುಕೊಂಡಿವೆ. ಸದ್ಯ ಇವರ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಿಂದ ಪ್ರತಿಷ್ಠಿತ ‘ವಿಡಿಯೊ ಕ್ರಿಯೇಟರ್ ಅವಾರ್ಡ್ 2026’ ನೀಡಿ ಗೌರವಿಸಲಾಗಿದೆ.
ಕರ್ನಾಟಕದ ಪ್ರವಾಸಿ ತಾಣಗಳು, ಐತಿಹಾಸಿಕ ಸ್ಥಳಗಳು, ಸಂಸ್ಕೃತಿ, ಪರಂಪರೆ ಹಾಗೂ ರಾಜ್ಯದ ವೈವಿಧ್ಯಮಯ ಪ್ರವಾಸೋದ್ಯಮ ಸಾಧ್ಯತೆಗಳನ್ನು ಡಿಜಿಟಲ್ ಮಾಧ್ಯಮದ ಮೂಲಕ ಜನರಿಗೆ ತಲುಪಿಸುವಲ್ಲಿ ಡಾ. ನಂದಿನಿ ಕೆ.ಎಲ್. ಅವರ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ವತಿಯಿಂದ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭವು ಭಾನುವಾರ ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ (Palace Grounds) ನಡೆಯಿತು. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಮತ್ತು ಇಲಾಖೆಯ ಎಲ್ಲ ಗಣ್ಯರು ಉಪಸ್ಥಿತರಿದ್ದರು.
ಸಾಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕದ ಪ್ರವಾಸೋದ್ಯಮವನ್ನು ಮತ್ತಷ್ಟು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಕಂಟೆಂಟ್ ಕ್ರಿಯೇಟರ್‌ಗಳ ಪಾತ್ರ ಮಹತ್ವದ್ದಾಗಿದೆ. ವಿಶೇಷವಾಗಿ ಸ್ಥಳೀಯ ಇತಿಹಾಸ, ಪರಂಪರೆ, ಪ್ರವಾಸಿ ತಾಣಗಳು ಹಾಗೂ ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿಯನ್ನು ಸರಳವಾಗಿ ಮತ್ತು ಆಕರ್ಷಕವಾಗಿ ವೀಡಿಯೋಗಳ ಮೂಲಕ ಜನರಿಗೆ ತಲುಪಿಸುವ ಕಾರ್ಯದಲ್ಲಿ ಡಾ. ನಂದಿನಿ ಕೆ.ಎಲ್. ಅವರು ತೊಡಗಿಸಿಕೊಂಡಿದ್ದಾರೆ.

ಸಮಾರಂಭದಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾದ್ ಮನೋಹರ್, KSTDC ಅಧ್ಯಕ್ಷರಾದ ಶ್ರೀನಿವಾಸ್, KST ಅಧ್ಯಕ್ಷರಾದ ಕೆ. ಶ್ಯಾಮರಾಜು, KSTDC ವ್ಯವಸ್ಥಾಪಕ ನಿರ್ದೇಶಕರಾದ ಶಿವಪ್ರಸಾದ್ ಹಾಗೂ JLR ವ್ಯವಸ್ಥಾಪಕ ನಿರ್ದೇಶಕರಾದ ಶಿವರಾಂ ಬಾಬು ಸೇರಿದಂತೆ ಪ್ರವಾಸೋದ್ಯಮ ಕ್ಷೇತ್ರದ ಹಲವು ಗಣ್ಯರು ಉಪಸ್ಥಿತರಿದ್ದರು.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಡಾ. ನಂದಿನಿ ಕೆ.ಎಲ್. ಅವರು ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. Digital Maadhyama ಸೇರಿದಂತೆ ವಿವಿಧ ಡಿಜಿಟಲ್ ವೇದಿಕೆಗಳ ಮೂಲಕ ಕರ್ನಾಟಕದ ಪ್ರವಾಸೋದ್ಯಮ, ಇತಿಹಾಸ, ಸಂಸ್ಕೃತಿ, ಪರಂಪರೆ ಹಾಗೂ ಜನಜೀವನಕ್ಕೆ ಸಂಬಂಧಿಸಿದ ಹಲವು ವಿಷಯಗಳನ್ನು ವಿಡಿಯೊ ರೂಪದಲ್ಲಿ ಜನರಿಗೆ ತಲುಪಿಸುತ್ತಿದ್ದಾರೆ.

ಕರ್ನಾಟಕದ ಪ್ರವಾಸಿ ತಾಣಗಳನ್ನು ಡಿಜಿಟಲ್ ವೇದಿಕೆಗಳ ಮೂಲಕ ದೇಶ-ವಿದೇಶಗಳ ಪ್ರೇಕ್ಷಕರಿಗೆ ಪರಿಚಯಿಸುವ ಪ್ರಯತ್ನಕ್ಕೆ ಈ ಪ್ರಶಸ್ತಿ ಮತ್ತಷ್ಟು ಉತ್ತೇಜನ ನೀಡಿದೆ. ಪ್ರಶಸ್ತಿ ಸ್ವೀಕರಿಸಿದ ಡಾ. ನಂದಿನಿ ಕೆ.ಎಲ್. ಅವರು, ಕರ್ನಾಟಕದ ಪ್ರವಾಸೋದ್ಯಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಡಿಜಿಟಲ್ ಮಾಧ್ಯಮದ ಮೂಲಕ ಪ್ರಚಾರ ಮಾಡುವ ತಮ್ಮ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.