ಬೆಂಗಳೂರು, ಮಾ. 26: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲು ಶುಕ್ರವಾರ (ಮಾರ್ಚ್ 26) ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು (Special Cabinet Meeting) ಮುಂದೂಡಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿ ಆರ್. ಚಂದ್ರಶೇಖರ್ ತಿಳಿಸಿದ್ದಾರೆ. ಬಾಗಲಕೋಟೆ ಮತ್ತು ದಾವಣೆಗೆರೆ ದಕ್ಷಿಣ ಕ್ಷೇತ್ರಗಳಿಗೆ ಉಪ ಚುನಾವಣೆ (Byelection) ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ʼʼಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲು ಮಾರ್ಚ್ 27ರ ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆʼʼ ಎಂದು ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 9ರಂದು ಉಪ ಚುನಾವಣೆ
ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರ ಬೀಳಲಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಒಟ್ಟು 36 ಅಭ್ಯರ್ಥಿಗಳ ನಾಮಪತ್ರ ಸಿಂಧು ಆಗಿದ್ದವು. ಈ ಪೈಕಿ ಮಾರ್ಚ್ 26ರಂದು 11 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಹೀಗಾಗಿ ಅಂತಿಮವಾಗಿ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇನ್ನು ಕಾಂಗ್ರೆಸ್‌ನಿಂದ ಬಂಡಾಯವೆದ್ದಿರುವ ಸಾದಿಕ್ ಖಾಲಿದ್ ಪಕ್ಷೇತರ ಅಭ್ಯರ್ಥಿ ಆಗಿ ಉಳಿದುಕೊಂಡಿದ್ದಾರೆ. ಇವರೊಂದಿಗೆ 14 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮುಸ್ಲಿಂ ಅಭ್ಯರ್ಥಿಗಳು ಸಾದಿಕ್‌ಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಕಾಂಗ್ರೆಸ್ ಶಾಮನೂರು ಕುಟುಂಬಕ್ಕೆ ಮಣೆ ಹಾಕಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಕಣಕ್ಕೆ ಇಳಿದಿದ್ದಾರೆ. ಇದರಿಂದ ರೊಚ್ಚಿಗೆದ್ದು ಸಾದಿಕ್ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬಿಜೆಪಿಯಿಂದ ಶ್ರೀನಿವಾಸ ದಾಸಕರಿಯಪ್ಪ ಸ್ಪರ್ಧಿಸುತ್ತಿದ್ದಾರೆ.
ಏಪ್ರಿಲ್ 9ಕ್ಕೆ ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ; ಮೇ 4ಕ್ಕೆ ಫಲಿತಾಂಶ
ಬಾಗಲಕೋಟೆ ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ದಿವಂಗತ ಶಾಸಕ ಎಚ್.ವೈ. ಮೇಟಿ ಅವರ ಮಕ್ಕಳಾದ ಮಲ್ಲಿಕಾರ್ಜುನ್, ಉಮೇಶ್ ಮತ್ತು ಮಹಾದೇವಿ ನಡುವೆ ಬಹಿರಂಗವಾಗಿಯೇ ಜಗಳ ನಡೆದಿತ್ತು. ಸಿಎಂ ಹಾಗೂ ಡಿಸಿಎಂ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿಯಾಗಿದ್ದು, ಅಂತಿಮವಾಗಿ ಕುಟುಂಬದ ಒಮ್ಮತದ ಮೇರೆಗೆ, ಕುರುಬ ಸಮುದಾಯದ ಮತಗಳನ್ನು ಭದ್ರಪಡಿಸಿಕೊಳ್ಳುವ ಉದ್ದೇಶದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಅವರಿಗೆ ಬಿಜೆಪಿ ಪ್ರಬಲ ಸ್ಪರ್ಧೆ ಒಡ್ಡಿದ್ದು, ವೀರಣ್ಣ ಚರಂತಿಮಠ ಕಣದಲ್ಲಿದ್ದಾರೆ. ಒಟ್ಟಿನಲ್ಲಿ ಎರಡೂ ಕ್ಷೇತ್ರದವೂ ಭಾರಿ ಕುತೂಹಲ ಮೂಡಿಸಿದೆ.
ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.