ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bike taxi services: ಬೈಕ್ ಟ್ಯಾಕ್ಸಿ ಸೇವೆಗೆ ರಾಜ್ಯ ಸರ್ಕಾರದಿಂದ ಕಠಿಣ ನಿಯಮ: ಪ್ರಯಾಣಿಕರ ಸುರಕ್ಷತೆಯೇ ಮೊದಲ ಆದ್ಯತೆ ಎಂದ ಸಚಿವ ಬೈರತಿ ಸುರೇಶ್‌

ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡುವ ಸಂಬಂಧ ಕರಡು ನಿಯಮಗಳನ್ನು ಸಿದ್ಧಪಡಿಸುವಂತೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಬೈಕ್ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರ, ಅದರಲ್ಲೂ ವಿಶೇಷವಾಗಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ರಾಜ್ಯ ಸರ್ಕಾರ ಮೊದಲ ಆದ್ಯತೆ ನೀಡಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್‌ ತಿಳಿಸಿದ್ದಾರೆ.

ಬೈಕ್ ಟ್ಯಾಕ್ಸಿ ಸೇವೆಗೆ ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿಗೆ ಚಿಂತನೆ

-

Prabhakara R
Prabhakara R Nov 21, 2026 5:34 PM

ಬೆಂಗಳೂರು: ಸುಪ್ರೀಂಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು (Bike taxi services) ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕಠಿಣ ನಿಯಮಾವಳಿಗಳನ್ನು ರೂಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸಾರಿಗೆ ಸಚಿವ ಬೈರತಿ ಸುರೇಶ್‌ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಕಾರ್ಯಾಚರಣೆ ಕುರಿತು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಲಿದೆ ಎಂದಿರುವ ಸಾರಿಗೆ ಸಚಿವರು, ವಿಚಾರದಲ್ಲಿ ಕಾನೂನಾತ್ಮಕ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸುವ ಅಗತ್ಯವಿರುವುದರಿಂದ ಅಡ್ವೋಕೇಟ್ ಜನರಲ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿ ಸರ್ಕಾರ ತನ್ನ ಅಂತಿಮ ನಿರ್ಧಾರವನ್ನು ಪ್ರಕಟಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ಈ ಸಂಬಂಧ ಕರಡು ನಿಯಮಗಳನ್ನು ಸಿದ್ಧಪಡಿಸುವಂತೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಬೈಕ್ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರ, ಅದರಲ್ಲೂ ವಿಶೇಷವಾಗಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ರಾಜ್ಯ ಸರ್ಕಾರ ಮೊದಲ ಆದ್ಯತೆ ನೀಡಲಿದೆ. ಅಸುರಕ್ಷಿತ ಪ್ರಯಾಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಈ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡುವ ಮುನ್ನ ಸವಾರರ ಹಿನ್ನೆಲೆ ಮತ್ತು ದಾಖಲೆಗಳನ್ನು ಕಡ್ಡಾಯವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನು ಹೊಸ ನಿಯಮಾವಳಿಗಳ ಅಡಿಯಲ್ಲಿ ಬೈಕ್ ಟ್ಯಾಕ್ಸಿ ಚಲಾಯಿಸುವವರ ಚಾಲನಾ ಪರವಾನಗಿ ಸೇರಿ ಅಗತ್ಯ ದಾಖಲೆಗಳು, ವಾಹನದ ವಿಮೆ, ವಾಹನಗಳಿಗೆ ಜಿಪಿಎಸ್ ಅಳವಡಿಕೆ ಹಾಗೂ ಇತರ ತಾಂತ್ರಿಕ ಸುರಕ್ಷತಾ ಕ್ರಮಗಳನ್ನು ಕಡ್ಡಾಯಗೊಳಿಸಲು ಇಲಾಖೆ ಮುಂದಾಗಿದೆ. ಈ ಎಲ್ಲಾ ಮಾನದಂಡಗಳನ್ನು ಒಳಗೊಂಡ ಸಮಗ್ರ ನಿಯಮಾವಳಿಗಳನ್ನು ರೂಪಿಸಿದ ಬಳಿಕವಷ್ಟೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅವಕಾಶ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.