ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

CJ Roy Death Case: ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಕಾನ್ಫಿಡೆಂಟ್ ಗ್ರೂಪ್‌ ಚೇರ್ಮನ್‌, ರಿಯಲ್‌ ಎಸ್ಟೇಟ್‌ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರದಿಂದ ಉನ್ನತಮಟ್ಟದ ತನಿಖೆ ನಡೆಸುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಇದರ ಬೆನ್ನಲ್ಲೇ ಕೇಸ್‌ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಲಾಗಿದೆ.

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಉದ್ಯಮಿ ಸಿ.ಜೆ.ರಾಯ್‌ (ಸಂಗ್ರಹ ಚಿತ್ರ) -

Prabhakara R
Prabhakara R Jan 31, 2026 6:31 PM

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ ಚೇರ್ಮನ್‌ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ (CJ Roy Death Case) ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ (SIT) ರಚನೆ ಮಾಡಲಾಗಿದ್ದು, ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಅವರು ಮಾಹಿತಿ ನೀಡಿದ್ದಾರೆ.

ಜಂಟಿ ಆಯುಕ್ತ ವಂಶಿಕೃಷ್ಣ ಎಸ್‌ಐಟಿ ನೇತೃತ್ವ ವಹಿಸಲಿದ್ದಾರೆ. ತಂಡದಲ್ಲಿ ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್‌ಬಿ ಎಸಿಪಿ ರಾಮಚಂದ್ರ ಹಾಗೂ ಅಶೋಕನಗರ ಇನ್ಸ್ಪೆಕ್ಟರ್ ರವಿ ಇದ್ದಾರೆ.

ಜ. 30ರಂದು ಮಧ್ಯಾಹ್ನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ ಸಮಯದಲ್ಲಿ ಸಿ.ಜೆ. ರಾಯ್ ಅವರು ಬೆಂಗಳೂಡಿನ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹೀಗಾಗಿ ಎಸ್ಐಟಿ ಮೂಲಕ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.

ರಾಯ್‌ ಆತ್ಮಹತ್ಯೆ ಬಗ್ಗೆ ಉನ್ನತ ಮಟ್ಟದ ತನಿಖೆ: ಡಿ.ಕೆ ಶಿವಕುಮಾರ್

ಕನಕಪುರ: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್‌, ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸರ್ಕಾರದಿಂದ ಉನ್ನತ ಮಟ್ಟದ ತನಿಖೆ ಮಾಡಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ತಿಳಿಸಿದ್ದರು. ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ರಾಯ್ ಒಬ್ಬ ಒಳ್ಳೆಯ ಉದ್ಯಮಿಯಾಗಿದ್ದರು, ಇಂತಹ ಘಟನೆ ನಡೆಯಬಾರದಿತ್ತು. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶವನ್ನು ಜನರ ಮುಂದೆ ಇಡುತ್ತೇವೆ ಎಂದು ಭರವಸೆ ನೀಡಿದ್ದರು.

ಐಟಿ ಅಧಿಕಾರಿಗಳು ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದಾಗ, ಸಿ.ಜೆ. ರಾಯ್ ಅವರು ಐದು ನಿಮಿಷ ಸಮಯ ಕೊಡಿ ಎಂದು ಕೇಳಿ ಕೋಣೆಯೊಳಗೆ ಹೋಗಿದ್ದಾರೆ. ಆದರೆ ಅಲ್ಲಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ದಾಳಿ ನಡೆಸಿದ ತಂಡ ಕೇರಳದಿಂದ ಬಂದಿತ್ತು ಎಂಬ ಬಗ್ಗೆ ಮಾಹಿತಿ ಇದೆ ಎಂದು ಡಿಕೆಶಿ ತಿಳಿಸಿದ್ದರು.

CJ Roy Death: ತಾವೇ ಎದೆಗೆ ಗುಂಡು ಹಾರಿಸಿಕೊಂಡ ಸಿ.ಜೆ.ರಾಯ್‌; ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ

ಈ ಪ್ರಕರಣದ ಬಗ್ಗೆ ದೆಹಲಿಯಿಂದಲೂ ವರದಿ ಕೇಳಲಾಗಿದೆ. ನಮ್ಮ ರಾಜ್ಯದಲ್ಲಿ ಈ ಘಟನೆ ನಡೆದಿರುವುದರಿಂದ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತದೆ. ಐಟಿ ಇಲಾಖೆಯ ಬಗ್ಗೆ ನಾನು ಹೆಚ್ಚು ಮಾತನಾಡಿದರೆ ಅದು ರಾಜಕೀಯವಾಗಿ ತಿರುವುದ ಪಡೆಯುತ್ತೆ. ಆದರೆ, ಅಧಿಕಾರಿಗಳ ಕಿರುಕುಳವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ತನಿಖೆಯ ಹೆಸರಿನಲ್ಲಿ ಇಂತಹ ಒತ್ತಡ ಹೇರುವುದು ಸರಿಯಲ್ಲ ಎಂದು ಕೇಂದ್ರದ ತನಿಖಾ ಸಂಸ್ಥೆಗಳ ಕಾರ್ಯವೈಖರಿ ವಿರುದ್ಧ ಡಿಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದರು.