Guest Teachers Recruitment: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ
ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 40,000 ಮತ್ತು ಪ್ರೌಢಶಾಲೆಗಳಿಗೆ 11,000 ಸೇರಿ ಒಟ್ಟು 51,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಮಂಜೂರಾತಿ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಪ್ರೌಢ) ಎಸ್.ಪ್ರಕಾಶ ಅವರು ಆದೇಶ ಹೊರಡಿಸಿದ್ದಾರೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು: ಕರ್ನಾಟಕದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಒಟ್ಟು 51,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ (Guest Teachers Recruitment) ಮಾಡಿಕೊಳ್ಳಲು ಮಂಜೂರಾತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಕಾಯಂ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ ನೀಡಿದೆ.
ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಪ್ರೌಢ) ಎಸ್.ಪ್ರಕಾಶ ಅವರು ಆದೇಶ ಹೊರಡಿಸಿದ್ದಾರೆ. 2025-26ನೇ ಶೈಕ್ಷಣಿಕ ಸಾಲಿಗೆ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿತ್ತು. ಕಳೆದ ಸಾಲಿನಲ್ಲಿ ನೇಮಕ ಮಾಡಿದಂತೆಯೇ ಶಾಲೆಗಳಿಗೆ ಈ ಸಾಲಿನಲ್ಲೂ ಅವಶ್ಯವಿರುವ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಕೋರಿ ಸರ್ಕಾರಕ್ಕೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಹೀಗಾಗಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿದೆ.
SSC Recruitment 2026: ಪದವೀಧರರಿಗೆ ಗುಡ್‌ನ್ಯೂಸ್; SSCಯಿಂದ 12,256 ಹುದ್ದೆಗಳಿಗೆ ಅರ್ಜಿ ಆಹ್ವಾನ
2026ರ ಮೇ ತಿಂಗಳಿನಲ್ಲಿಯೇ ಶಾಲೆಗಳು ಪ್ರಾರಂಭವಾಗಲಿದ್ದು, ಅದರಂತೆ 2026-27ನೇ ಸಾಲಿನಲ್ಲಿ ಪೂರ್ವ ನಿಗದಿಯಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿ ನಿರ್ವಹಣೆ ಮಾಡಬೇಕಾಗಿದೆ. ಶಾಲಾ ಪ್ರಾರಂಭದ ದಿನವೇ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಅತಿಥಿ ಶಿಕ್ಷಕರನ್ನು ಶಾಲೆಗಳಿಗೆ ಲಭ್ಯಪಡಿಸಿದರೆ ವಿದ್ಯಾರ್ಥಿಗಳ ಶೈಕ್ಷಣಿಕ ಬೋಧಕ ಪ್ರಕ್ರಿಯೆಗೆ ಅನುಕೂಲವಾಗುತ್ತದೆ ಎಂದ ಇಲಾಖೆ ಆಯುಕ್ತರು ಕೋರಿದ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲೆಗಳಿಗೆ 40,000 ಮತ್ತು ಪ್ರೌಢಶಾಲೆಗಳಿಗೆ 11,000 ಸೇರಿ ಒಟ್ಟು 51,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಸೂಚಿಸಿದೆ.