Age Relaxation: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ 5 ವರ್ಷ ವಯೋಮಿತಿ ಸಡಿಲಿಸಿ ಸರ್ಕಾರ ಆದೇಶ
Government Recruitment: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಸರ್ಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಗಳಿಗೆ ಈ ನಿಯಮ ಅನ್ವಯವಾಗಲಿದೆ.
-
ಬೆಂಗಳೂರು: ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು (Age Relaxation) ಒಂದು ಬಾರಿಯ ಕ್ರಮವಾಗಿ 5 ವರ್ಷ ಸಡಿಲಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2025ರ ಸೆ.29ರ ಆದೇಶದಲ್ಲಿ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.
ನಂತರ ಹಲವಾರು ಉದ್ಯೋಗಾಕಾಂಕ್ಷಿಗಳು, ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು. ಈ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಇದೀಗ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ನೀಡಲು ತೀರ್ಮಾನಿಸಿ ಆದೇಶಿಸಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು-1) ಸರ್ಕಾರದ ಅಧೀನ ಕಾರ್ಯದರ್ಶಿ ಆಶಾಕುಮಾರಿ ಎ.ಜೆ. ಆದೇಶ ಹೊರಡಿಸಿದ್ದಾರೆ. 29.09.2025ರ ಆದೇಶವನ್ನು ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 5 ವರ್ಷಗಳ ಸಡಿಲಿಕೆ ನೀಡಲಾಗಿದೆ ಎಂದು ಆದೇಶಿಸಿದ್ದಾರೆ.
ವಿಬಿ ಜಿ ರಾಮ್ ಜಿ ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸಲು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ
ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಸಲು ಜ.22ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಸಚಿವಸಂಪುಟ ಸಭಯಲ್ಲಿ ನಿರ್ಧರಿಸಲಾಗಿತ್ತು. ಈ ಸಂಬಂಧ ಇದೀಗ ಅಧಿಕೃತ ಆದೇಶವನ್ನು ರಾಜ್ಯ ಸರ್ಕಾರವು ಹೊರಡಿಸಿದೆ.