B Nagendra Resignation: ವಾಲ್ಮೀಕಿ ನಿಗಮ ಹಗರಣ; ಬಿ. ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು
ವಾಲ್ಮೀಕಿ ನಿಗಮ ಹಗರಣದಲ್ಲಿ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು. ಇದರ ಬೆನ್ನಲ್ಲೇ ತಾವು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ಅಂಗೀಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.
-
ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ (B Nagendra Resignation) ಅವರು ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ಅಂಗೀಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಈ ಹಿನ್ನೆಲೆಯನ್ನು ನಾಗೇಂದ್ರ ಅವರ ರಾಜೀನಾಮೆಯನ್ನು ಗವರ್ನರ್ ಅಂಗೀಕರಿಸಿದ್ದಾರೆ. ಈ ಸಂಬಂಧ ಆಗಸ್ಟ್ 29 ರಂದು ಹೊರಡಿಸಲಾದ ಅಧಿಕೃತ ಅಧಿಸೂಚನೆಯನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ.
ವಾಲ್ಮೀಕಿ ನಿಗಮದ ಬ್ಯಾಂಕ್ ಖಾತೆಯಿಂದ ಕೋಟ್ಯಂತರ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದ ಬಳಿಕ ನಾಗೇಂದ್ರ ಅವರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪ್ರತಿಪಕ್ಷಗಳು ತೀವ್ರ ಒತ್ತಡ ಹೇರಿದ್ದವು. ನಿಗಮದ ಲೆಕ್ಕಪತ್ರ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡು ಬರೆದಿದ್ದ ಪತ್ರದಲ್ಲಿ ಹಣ ವರ್ಗಾವಣೆಗೆ ಸಂಬಂಧಿಸಿದ ಗಂಭೀರ ಆರೋಪಗಳು ಕೇಳಿಬಂದಿದ್ದವು.
ನಾಗೇಂದ್ರ ಅವರು ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟಕ್ಕೆ ಸೇರ್ಪಡೆಯಾಗಿ ಒಂದು ತಿಂಗಳು ಕಳೆಯುವುದರೊಳಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಗರಣದಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಾದಿಸಿದ ನಾಗೇಂದ್ರ, ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ತಾವಾಗಿಯೇ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದರು.
ಹಣ ದುರುಪಯೋಗದ ಆರೋಪಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ್ದರು. ವಾಲ್ಮೀಕಿ ನಿಗಮ ಪ್ರಕರಣ ಸಂಬಂಧ 2024ರ ಜುಲೈನಲ್ಲಿ ಬಂಧನವಾಗಿ ಮೂರು ತಿಂಗಳ ಬಳಿಕ ಜಾಮೀನಿನ ಮೇಲೆ ನಾಗೇಂದ್ರ ಜೈಲಿನಿಂದ ರಿಲೀಸ್ ಆಗಿದ್ದರು. ನಂತರ ನಾಗೇಂದ್ರ ಅವರನ್ನು ಇದೇ ಆಗಸ್ಟ್ 3ರಂದು ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿ ಯೋಜನೆ ಮತ್ತು ಸಾಂಖ್ಯಿಕ ಖಾತೆಯನ್ನು ನೀಡಲಾಗಿತ್ತು.