ಬೆಂಗಳೂರು, ಮೇ 21: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ (Gruhalakshmi) ಯೋಜನೆಯ 2 ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ (Karnataka High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಹಣಕಾಸು ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ತುರ್ತು ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದ್ದು, ವಿಚಾರಣೆಯನ್ನು ಮುಂದೂಡಿದೆ.
ಗೃಹಲಕ್ಷ್ಮಿ ಯೋಜನೆಯಡಿ ಹಿಂಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಆರ್. ಗಂಗಾ ಮತ್ತು ಜಿ.ಡಿ. ಪವಿತ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಸೂರಜ್ ಗೋವಿಂದರಾಜ್ ಮತ್ತು ಡಾ. ಕೆ. ಮನ್ಮಥ ರಾವ್ ಅವರ ರಜಾಕಾಲೀನ ವಿಭಾಗೀಯ ಪೀಠ ನಡೆಸಿತು. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 2025ರ ಫೆಬ್ರವರಿ ಹಾಗೂ ಮಾರ್ಚ್‌ನ ಹಿಂಬಾಕಿ ಹಣ ಬಿಡುಗಡೆ ಮಾಡಲು ಆದೇಶಿಸುವಂತೆ ಅರ್ಜಿದಾರರು ಕೋರಿದ್ದರು.
ರಾಜ್ಯ ಸರ್ಕಾರದ ಮಹತ್ವದ ಯೋಜನೆ
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾದುದು. ಮನೆಯ ಮುಖ್ಯಸ್ಥ ಮಹಿಳೆಗೆ ಮಾಸಿಕ 2 ಸಾವಿರ ರುಪಾಯಿ ನೀಡುವ ಯೋಜನೆ ಇದಾಗಿದ್ದು, 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂತು. 2023ರ ಆಗಸ್ಟ್‌ನಿಂದ 2024 ಮಾರ್ಚ್‌ವರೆಗೆ 8 ಟು ತಿಂಗಳು ಹಣ ಬಿಡುಗಡೆ ಮಾಡಲಾಗಿತ್ತು. ಯೋಜನೆ ಮುಂದುವರಿಸಿದ ಸರ್ಕಾರ 2024ರ ಏಪ್ರಿಲ್‌ರಿಂದ 2025ರ ಜನವರಿವರೆಗೆ ಹಣ ಬಿಡುಗಡೆ ಮಾಡಿತು. ಅದಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬದಲಿಗೆ ತಾಲೂಕು ಪಂಚಾಯತ್ ಮೂಲಕ ಹಣವನ್ನು ಫಲಾನುಭವಿಗಳಿಗೆ ಪಾವತಿ ಮಾಡಲು ನಿರ್ಧರಿಸಲಾಯಿತು. ಈ ಹಿನ್ನೆಲೆಯಲ್ಲಿ 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣವನ್ನು ಪಾವತಿ ಮಾಡಿಲ್ಲ. ಈ ಬಗ್ಗೆ ಅರ್ಜಿಯಲ್ಲಿ ವಿವರಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆ ದುರುಪಯೋಗ; ಮೃತರ ಹೆಸರಿಗೆ 22 ಕೋಟಿ ರುಪಾಯಿ ಜಮೆ
2025ರ ಏಪ್ರಿಲ್ 4ರಂದು ಸರ್ಕಾರವು 2025-2026ರ ಹಣಕಾಸು ವರ್ಷಕ್ಕೆ ಜಿಲ್ಲಾ ಪಂಚಾಯತ್‌ಗಳ ಮೂಲಕ ಯೋಜನೆಯ ಅನುಷ್ಠಾನ ಮಾಡುವುದಾಗಿ ತಿಳಿಸಿ ಹಣ ಮಂಜೂರಿನ ಆದೇಶ ಹೊರಡಿಸಿತು. ಜತೆಗೆ 2023-2024ನೇ ಆರ್ಥಿಕ ವರ್ಷಕ್ಕೆ ಅನ್ವಯವಾಗುವ ಅದೇ ನಿಯಮಗಳು ಮತ್ತು ಷರತ್ತುಗಳ ಮೇಲೆ ಯೋಜನೆಯನ್ನು ಮುಂದುವರಿಸುವುದಾಗಿ ತಿಳಿಸಿತು.
ಮೃತರ ಹೆಸರಿಗೆ 22 ಕೋಟಿ ರುಪಾಯಿ ಜಮೆ
ಕೆಲವು ದಿನಗಳ ಹಿಂದೆ ಗೃಹಲಕ್ಷ್ಮಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿತ್ತು. ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬರೋಬ್ಬರಿ 22 ಕೋಟಿ ರುಪಾಯಿ ವರ್ಗಾಯಿಸಿರುವುದು ಕಂಡು ಬಂದಿತ್ತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಖಾತರಿ ಯೋಜನೆಗಳ ಅನುಷ್ಠಾನ ಪರಿಶೀಲನಾ ಸಮಿತಿ ಸಭೆಯಲ್ಲಿ ಈ ವಿಷಯ ಬಹಿರಂಗಗೊಂಡಿತ್ತು.
ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.