ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

KPSC scam: ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ತಾತ್ಕಾಲಿಕ ತಡೆ; ಅಕ್ರಮ ತನಿಖೆಗೆ ಆಂತರಿಕ ವಿಚಾರಣಾ ಉಪಸಮಿತಿ ರಚಿಸಿದ ಕೆಪಿಎಸ್‌ಸಿ

KPSC Veterinary Officer Recruitment: ಕರ್ನಾಟಕ ಲೋಕಸೇವಾ ಆಯೋಗವು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಬದ್ಧವಾಗಿದ್ದು, ತನಿಖಾ ವರದಿಯ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಕೆ. ಜ್ಯೋತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಪಶುವೈದ್ಯಾಧಿಕಾರಿಗಳ ನೇಮಕಾತಿಗೆ (KPSC Veterinary Officer Recruitment) ಸಂಬಂಧಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಅಂತಿಮ ನೇಮಕಾತಿ ಪಟ್ಟಿಗೆ ತಾತ್ಕಾಲಿಕ ತಡೆ ಬಿದ್ದಿದೆ.‌ ನೇಮಕಾತಿ ಅಕ್ರಮದ (KPSC scam) ಬಗ್ಗೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆಗಾಗಿ ಆಂತರಿಕ ವಿಚಾರಣಾ ಉಪಸಮಿತಿ ರಚಿಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ತೀರ್ಮಾನಿಸಿದೆ.

ಭಾನುವಾರ ನಡೆದ ಕೆಪಿಎಸ್‌ಸಿ ತುರ್ತು ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕರ ವಿಶ್ವಾಸವನ್ನು ಕಾಪಾಡುವ ಉದ್ದೇಶದಿಂದ ಹಾಗೂ ಆರೋಪಗಳ ಗಂಭೀರತೆಯನ್ನು ಮನಗಂಡು ಆಯೋಗವು ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಆಯೋಗದ ಕಾರ್ಯದರ್ಶಿ ಕೆ. ಜ್ಯೋತಿ ಅವರು ತಿಳಿಸಿದ್ದಾರೆ.

2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು, ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಹಾಗೂ 2026ರ ಜುಲೈ 25ರಂದು ಪೊಲೀಸ್ ಇಲಾಖೆ ನೀಡಿರುವ ಪ್ರಾಥಮಿಕ ಮಾಹಿತಿ ವರದಿಯನ್ನು (ಎಫ್‌ಐಆರ್‌) ಆಯೋಗವು ಗಂಭೀರವಾಗಿ ಪರಿಗಣಿಸಿದೆ.

ಆರೋಪಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಆಯೋಗದ ಹಿರಿಯ ಸದಸ್ಯರ ಅಧ್ಯಕ್ಷತೆಯಲ್ಲಿ ವಿಚಾರಣಾ ಉಪಸಮಿತಿಯನ್ನು ರಚಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತ ಹಾಗೂ ಸಂಬಂಧಿತ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ವಾಸ್ತವಾಂಶಗಳ ಕುರಿತ ವಿವರವಾದ ವರದಿಯನ್ನು ಒಂದು ವಾರದೊಳಗೆ ಆಯೋಗಕ್ಕೆ ಸಲ್ಲಿಸುವಂತೆ ಉಪಸಮಿತಿಗೆ ನಿರ್ದೇಶನ ನೀಡಲಾಗಿದೆ.

ತನಿಖಾ ಕಾರ್ಯಕ್ಕೆ ಅಗತ್ಯವಾದ ಆಡಳಿತಾತ್ಮಕ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಲು ಕೆಪಿಎಸ್‌ಸಿ ಕಾರ್ಯದರ್ಶಿಯನ್ನು ಹಾಗೂ ಅಗತ್ಯ ಕಾನೂನು ಸಲಹೆ ನೀಡಲು ಕಾನೂನು ವಿಭಾಗದ ಮುಖ್ಯಸ್ಥರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆವರೆಗೆ; ಯಾವಾಗ, ಏನೇನಾಯ್ತು? ಇಲ್ಲಿದೆ ಟೈಮ್‌ಲೈನ್‌

ಆಂತರಿಕ ತನಿಖಾ ಉಪಸಮಿತಿ ತನ್ನ ಅಂತಿಮ ವರದಿಯನ್ನು ಸಲ್ಲಿಸುವವರೆಗೆ, 2026ರ ಜುಲೈ 17ರಂದು ಪ್ರಕಟಿಸಲಾಗಿದ್ದ ಪಶುವೈದ್ಯಾಧಿಕಾರಿಗಳ ಅಂತಿಮ ಆಯ್ಕೆ ಪಟ್ಟಿಯ ಜಾರಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ಆಯೋಗವು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.