ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಭಾಗಿಯಾದ ಆರೋಪದಲ್ಲಿ ಕಾಂಗ್ರೆಸ್ ಪಕ್ಷದಿಂದ ಕೃಪಾ ಆಳ್ವಾ (Kripa Alva) ಅವರನ್ನು ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್‌ಗೆ ಮುಜುಗರ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೈ ನಾಯಕಿಯನ್ನು ಪಕ್ಷದಿಂದ 6 ವರ್ಷ ಉಚ್ಚಾಟನೆ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸೂಚನೆ ಹಿನ್ನೆಲೆಯಲ್ಲಿ ಕೃಪಾ ಆಳ್ವಾರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಸ್ಟಿಂಗ್ ಪ್ರಕರಣದಲ್ಲಿ ನೋಟಿಸ್‌ಗೆ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ.
ಯಾರಿದು ಕೃಪಾ ಆಳ್ವಾ?
ಕೃಪಾ ಆಳ್ವಾ ಅವರು ಕರ್ನಾಟಕ ಕಾಂಗ್ರೆಸ್‌ನ ಪ್ರಮುಖ ಮಹಿಳಾ ಮುಖಂಡರಾಗಿದ್ದು, ದಶಕಕ್ಕೂ ಹೆಚ್ಚು ಕಾಲದಿಂದ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಮೂಲತಃ ಕರಾವಳಿ ಭಾಗದವರಾದ ಇವರು, 1992ರಲ್ಲಿ ಹತ್ಯೆಗೀಡಾದ ಮಂಗಳೂರಿನ ಪ್ರಭಾವಿ ಸಮಾಜ ಸೇವಕ ಹಾಗೂ ನಾಯಕ ಅಮರ್ ಆಳ್ವಾ ಅವರ ಪತ್ನಿ. ಪತಿಯ ನಿಧನದ ನಂತರ ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡು, ಬಳಿಕ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕೆಲಸ ಮಾಡಿರುವ ಇವರು, ನಂತರ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ, ವಕ್ತಾರೆ ಹಾಗೂ ರಾಜ್ಯ ಪ್ರಚಾರ ಸಮಿತಿಯ ಸಂಯೋಜಕರಾಗಿ ಪಕ್ಷ ಸಂಘಟನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. 2015ರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಇವರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದಾರೆ.