ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

SC ST Reservation: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ಕೋರಿ ಪ್ರಧಾನಿಗೆ ಪತ್ರ: ಡಿಸಿಎಂ ಪರಮೇಶ್ವರ್‌

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಬಗ್ಗೆ ಕರ್ನಾಟಕ ಸರ್ಕಾರವು 2023ರ ಮಾರ್ಚ್ 23ರಂದೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 2025ರ ಡಿಸೆಂಬರ್ 18ರಂದು ರಾಜ್ಯ ವಿಧಾನಸಭೆಯಲ್ಲಿಯೂ ನಿರ್ಣಯ ಅಂಗೀಕರಿಸಲಾಗಿತ್ತು. ನಿಕಟಪೂರ್ವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು 2026ರ ಏಪ್ರಿಲ್ 16ರಂದು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಇದೇ ಬೇಡಿಕೆಯನ್ನು ಪುನರುಚ್ಚರಿಸಿದ್ದರು ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಕುರಿತು ಪ್ರಧಾನಿಗೆ ಪತ್ರ: ಪರಮೇಶ್ವರ್‌

-

Prabhakara R
Prabhakara R Nov 14, 2026 7:59 PM

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸುವ ಉದ್ದೇಶದಿಂದ ಜಾರಿಗೊಳಿಸಲಾದ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಹಾಗೂ ರಾಜ್ಯ ಸರ್ಕಾರಿ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳ ಮೀಸಲಾತಿ) ಕಾಯ್ದೆ, 2022 ಅನ್ನು (SC ST Reservation) ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಡಾ.ವೀರೇಂದ್ರ ಕುಮಾರ್‌ ಅವರಿಗೆ ಪತ್ರ ಬರೆದಿದ್ದೇನೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸುಮಾರು ಏಳು ದಶಕಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಬದಲಾಗದೆ ಉಳಿದಿತ್ತು. ಈ ಸಮುದಾಯಗಳ ಜನಸಂಖ್ಯೆಯ ಹೆಚ್ಚಳ, ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆ ಹಾಗೂ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ಶಿಫಾರಸುಗಳನ್ನು ಆಧರಿಸಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿತ್ತು. ಈ ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸಲು 9ನೇ ಅನುಸೂಚಿಗೆ ಸೇರಿಸಬೇಕೆಂದೂ ಆಯೋಗ ಶಿಫಾರಸು ಮಾಡಿತ್ತು.

ಆದರೆ, ಒಟ್ಟು ಮೀಸಲಾತಿ ಶೇ.56ಕ್ಕೆ ಏರಿಕೆಯಾಗಿರುವುದು ಸಂವಿಧಾನಾತ್ಮಕವಾಗಿ ನಿಗದಿಪಡಿಸಲಾದ ಶೇ.50ರ ಮಿತಿಯನ್ನು ಮೀರುತ್ತದೆ ಎಂಬ ಕಾರಣಕ್ಕೆ ಕರ್ನಾಟಕ ಹೈಕೋರ್ಟ್ 2026ರ ಅಕ್ಟೋಬರ್ 12ರಂದು ಮೀಸಲಾತಿ ಹೆಚ್ಚಳದ ನಿಬಂಧನೆಗಳನ್ನು ರದ್ದುಗೊಳಿಸಿದೆ. ಈ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

1994ರಲ್ಲಿ ಸಂವಿಧಾನದ 76ನೇ ತಿದ್ದುಪಡಿಯ ಮೂಲಕ ತಮಿಳುನಾಡಿನ ಶೇ.69ರ ಮೀಸಲಾತಿ ಕಾಯ್ದೆಯನ್ನು 9ನೇ ಅನುಸೂಚಿಗೆ ಸೇರಿಸಲಾಗಿತ್ತು. ಅದೇ ಮಾದರಿಯಲ್ಲಿ ಕರ್ನಾಟಕದ ಶೇ.56ರ ಒಟ್ಟು ಮೀಸಲಾತಿಯ ಭಾಗವಾಗಿರುವ ಪರಿಶಿಷ್ಟ ಜಾತಿಗಳ ಶೇ.17 ಹಾಗೂ ಪರಿಶಿಷ್ಟ ಪಂಗಡಗಳ ಶೇ.7ರ ಮೀಸಲಾತಿಗೂ ಸಂವಿಧಾನಾತ್ಮಕ ರಕ್ಷಣೆ ಒದಗಿಸುವ ಕುರಿತು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ಕರ್ನಾಟಕ ಸರ್ಕಾರವು 2023ರ ಮಾರ್ಚ್ 23ರಂದೇ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 2025ರ ಡಿಸೆಂಬರ್ 18ರಂದು ರಾಜ್ಯ ವಿಧಾನಸಭೆಯಲ್ಲಿಯೂ ನಿರ್ಣಯ ಅಂಗೀಕರಿಸಲಾಗಿತ್ತು. ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು 2026ರ ಏಪ್ರಿಲ್ 16ರಂದು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಇದೇ ಬೇಡಿಕೆಯನ್ನು ಪುನರುಚ್ಚರಿಸಿದ್ದರು.

ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳ ವೈಯಕ್ತಿಕ ಮಧ್ಯಪ್ರವೇಶವನ್ನು ಕೋರಿ ಪತ್ರದಲ್ಲಿ ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಟ್ಟಿದ್ದೇನೆ.

  1. ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸುವ ಕರ್ನಾಟಕದ ಕಾಯ್ದೆಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಬೇಕು.
  2. ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸಲು ಅಗತ್ಯವಾದ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ತುರ್ತಾಗಿ ಆರಂಭಿಸಬೇಕು.
  3. ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಹಾಗೂ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗಗಳೊಂದಿಗೆ ಸಮಾಲೋಚನೆ ನಡೆಸಿ, ನ್ಯಾಯಾಲಯ ಗುರುತಿಸಿರುವ ಸಂವಿಧಾನಾತ್ಮಕ ಹಾಗೂ ಪ್ರಕ್ರಿಯಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು.
  4. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಬುಡಕಟ್ಟು ವ್ಯವಹಾರಗಳ ಸಚಿವಾಲಯ ಹಾಗೂ ಗೃಹ ಸಚಿವಾಲಯಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಕಾಲಮಿತಿಯೊಳಗೆ ಸೂಕ್ತ ಸಂವಿಧಾನಾತ್ಮಕ ಮತ್ತು ಶಾಸನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು.
  5. ದೇಶದ ಬದಲಾಗುತ್ತಿರುವ ಸಾಮಾಜಿಕ ವಾಸ್ತವಗಳು, ವಿವಿಧ ರಾಜ್ಯಗಳ ಅನುಭವಗಳು ಹಾಗೂ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂವಿಧಾನಾತ್ಮಕ ತತ್ವಗಳನ್ನು ಪರಿಗಣಿಸಿ, ಶೇ.50ರ ಮೀಸಲಾತಿ ಮಿತಿಯ ಪ್ರಸ್ತುತತೆ ಮತ್ತು ಅನ್ವಯದ ಕುರಿತು ರಾಷ್ಟ್ರಮಟ್ಟದಲ್ಲಿ ವ್ಯಾಪಕ ಸಮಾಲೋಚನೆ ನಡೆಸಬೇಕು.

ತಮಿಳುನಾಡಿನ ಶೇ.69ರ ಮೀಸಲಾತಿಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸಿರುವಂತೆ, ಕರ್ನಾಟಕದ ಶೇ.56ರ ಒಟ್ಟು ಮೀಸಲಾತಿಯ ಭಾಗವಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶೇ.24ರ ಒಟ್ಟು ಮೀಸಲಾತಿಗೂ ಸಂವಿಧಾನಾತ್ಮಕ ರಕ್ಷಣೆ ದೊರೆಯಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದು ಹೇಳಿದರು.

ಸಾಮಾಜಿಕ ನ್ಯಾಯದ ವಿಚಾರವು ರಾಜಕೀಯ ಪಕ್ಷಗಳು ಮತ್ತು ಸರ್ಕಾರಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಮೀರಿದ್ದಾಗಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಐತಿಹಾಸಿಕವಾಗಿ ಅವಕಾಶವಂಚಿತರಾದ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನ್ಯಾಯಯುತ ಅವಕಾಶಗಳನ್ನು ಕಲ್ಪಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ.

ಮೇಕೆದಾಟು ಅಣೆಕಟ್ಟು ವಿವಾದ: ಡಿಕೆ ಶಿವಕುಮಾರ್‌ ವಿರುದ್ಧ ತಮಿಳುನಾಡು ಕಾಂಗ್ರೆಸ್ ಸಂಸದ ಕಿಡಿ; 'ಒಂದು ಇಟ್ಟಿಗೆಯನ್ನೂ ಹಾಕಲು ಬಿಡುವುದಿಲ್ಲ' ಎಂದು ಎಚ್ಚರಿಕೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಲಕ್ಷಾಂತರ ಜನರ ಭವಿಷ್ಯಕ್ಕೆ ಸಂಬಂಧಿಸಿದ ಈ ಮಹತ್ವದ ವಿಷಯವನ್ನು ರಾಷ್ಟ್ರೀಯ ಸಂವಿಧಾನಾತ್ಮಕ ಮಹತ್ವದ ವಿಚಾರವಾಗಿ ಪರಿಗಣಿಸಿ, ಕರ್ನಾಟಕದ ದೀರ್ಘಕಾಲದ ಪ್ರಸ್ತಾವನೆ ಕುರಿತು ಕೇಂದ್ರ ಸರ್ಕಾರ ಸಕಾರಾತ್ಮಕ ಹಾಗೂ ಕಾಲಮಿತಿಯೊಳಗಿನ ನಿರ್ಧಾರ ಕೈಗೊಂಡು ಅಗತ್ಯ ಶಾಸನಾತ್ಮಕ ಕ್ರಮಗಳನ್ನು ಜರುಗಿಸಬೇಕು ಎಂದು ಮನವಿ ಮಾಡಿದ್ದೇನೆ ಎಂದು ಡಿಸಿಎಂ ತಿಳಿಸಿದ್ದಾರೆ.