ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ಕರ್ನಾಟಕ ಕರಾವಳಿ ಹಾಗೂ ಗೋವಾಗೆ ತೆರಳುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಸಿಹಿಸುದ್ದಿ ಸಿಕ್ಕಿದೆ. ಕರಾವಳಿ ಮತ್ತು ಬೆಂಗಳೂರು ನಡುವಿನ ರೈಲು ಸಂಪರ್ಕವನ್ನು ಬಲಪಡಿಸುವ ನಿಟ್ಟಿನಲ್ಲಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಪ್ರಸ್ತುತ ಚಾಲನೆಯಲ್ಲಿರುವ ಮಡಗಾಂವ್-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು (Bengaluru-Goa Vande Bharat Express) ಬೆಂಗಳೂರಿಗೆ ವಿಸ್ತರಿಸುವುದಾಗಿ ಘೋಷಿಸಿದ್ದಾರೆ.
ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂದಣಿ ಹಾಗೂ ಪ್ರವಾಸೋದ್ಯಮ, ಧಾರ್ಮಿಕ ಯಾತ್ರೆ, ಶಿಕ್ಷಣ ಮತ್ತು ವಾಣಿಜ್ಯ ಕ್ಷೇತ್ರಗಳಿಗೆ ಈ ಮಾರ್ಗದ (ಕಾರಿಡಾರ್) ಮಹತ್ವವನ್ನು ಗಮನದಲ್ಲಿಟ್ಟುಕೊಂಡು, ಹಾಸನ, ಮಂಗಳೂರು, ಉಡುಪಿ ಮತ್ತು ಕಾರವಾರದ ಮೂಲಕ ಬೆಂಗಳೂರು ಹಾಗೂ ಮಡಗಾಂವ್‌ಗಳನ್ನು ಸಂಪರ್ಕಿಸುವ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲು ಸಂಪರ್ಕ ಕಲ್ಪಿಸಬೇಕೆಂದು ಎಚ್.ಡಿ.ಕುಮಾರಸ್ವಾಮಿ ಅವರು ಮನವಿ ಮಾಡಿದ್ದರು. ಇದಕ್ಕೆ ರೈಲ್ವೆ ಇಲಾಖೆ ಸ್ಪಂದಿಸಿದೆ.
ಇನ್ನು ಈ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ, ನನ್ನ ಮನವಿಗೆ ತ್ವರಿತ ಹಾಗೂ ಸಕಾರಾತ್ಮಕವಾಗಿ ಸ್ಪಂದಿಸಿದ ನನ್ನ ಸಂಪುಟ ಸಹೋದ್ಯೋಗಿ ಹಾಗೂ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ (Ashwini Vaishnaw) ಅವರಿಗೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಪ್ರಸ್ತುತ ಚಾಲನೆಯಲ್ಲಿರುವ ಮಡಗಾಂವ್- ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಈಗ ಹಾಸನ, ಉಡುಪಿ ಮತ್ತು ಕಾರವಾರದ ಮೂಲಕ ಬೆಂಗಳೂರುವರೆಗೆ ವಿಸ್ತರಿಸಲಾಗಿದೆ. ಇದು ಪರಿಷ್ಕೃತ ಸಮಯದೊಂದಿಗೆ 'ರೈಲು ಸಂಖ್ಯೆ 26655/26656 ಯಶವಂತಪುರ-ಮಂಗಳೂರು- ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್' ಆಗಿ ಸಂಚರಿಸಲಿದೆ.
ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಅತ್ಯಾಧುನಿಕ ರೈಲು ಸಂಪರ್ಕವನ್ನು ಬಲಪಡಿಸುವ ಹಾಗೂ ಬೆಂಗಳೂರು, ಕರಾವಳಿ ಕರ್ನಾಟಕ ಮತ್ತು ಗೋವಾವನ್ನು ಪರಸ್ಪರ ಹತ್ತಿರವಾಗಿಸುವ ನಿಟ್ಟಿನಲ್ಲಿ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಈ ಸುಧಾರಿತ ಸಂಪರ್ಕ ವ್ಯವಸ್ಥೆಯು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವುದಲ್ಲದೆ, ಪ್ರವಾಸೋದ್ಯಮ, ಪ್ರಾದೇಶಿಕ ಆರ್ಥಿಕ ಚಟುವಟಿಕೆಗಳು ಮತ್ತು ಅಂತಾರಾಜ್ಯ ಸಂಪರ್ಕವನ್ನು ಮತ್ತಷ್ಟು ಉತ್ತೇಜಿಸಲಿದೆ ಎಂದು ತಿಳಿಸಿದ್ದಾರೆ.
ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲ
ಈ ರೈಲು ಸೇವೆಯು ಬೆಂಗಳೂರು, ಹಾಸನ, ಮಂಗಳೂರು, ಉಡುಪಿ, ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಪ್ರವಾಸೋದ್ಯಮ, ತೀರ್ಥಯಾತ್ರೆ, ಶಿಕ್ಷಣ ಮತ್ತು ವೃತ್ತಿಪರ ಪ್ರಯಾಣಕ್ಕಾಗಿ ಈ ಕಾರಿಡಾರ್ ಹೆಚ್ಚಿನ ಮಹತ್ವ ಹೊಂದಿದೆ. ಈ ಮಾರ್ಗದಲ್ಲಿ ಸಂಪರ್ಕ ಸುಧಾರಿಸುವುದರಿಂದ ಬೆಂಗಳೂರು ಹಾಗೂ ಕರಾವಳಿ ಕರ್ನಾಟಕ ಮತ್ತು ಗೋವಾದ ವಾಣಿಜ್ಯ, ಬಂದರು ಮತ್ತು ಪ್ರವಾಸೋದ್ಯಮ ಕೇಂದ್ರಗಳ ನಡುವಿನ ಬಾಂಧವ್ಯ ಮತ್ತಷ್ಟು ಬಲಗೊಳ್ಳಲಿದೆ.