ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ (Laxmi Hebbalkar) ಕಾರು ಅಪಘಾತಕ್ಕೆ ಕಾರಣವಾಗಿದ್ದ ಲಾರಿ ಚಾಲಕನ್ನು ಬಂಧಿಸಿ, ವಾಹನವನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜನವರಿ 14 ರಂದು ಕಿತ್ತೂರು ಬಳಿ ಅಂಬಡಗಟ್ಟಿ ಕ್ರಾಸ್‌ನಲ್ಲಿ ಸಂಭವಿಸಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕ ಮಧುಕರ ಕೊಂಡಿರಾಮ ಸೋಮವಂಶಿ ಎಂಬಾತನ್ನು ಪೊಲೀಸರು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.
ಪ್ರಕರಣದ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಚಾಲಕ ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಫೋನ್ ಕರೆ ಹಾಗೂ ಸಿಸಿಟಿವಿಯಲ್ಲಿ ದಾಖಲಾದ ದೃಶ್ಯ ಸೇರಿ ಹಲವು ಸಾಕ್ಷ್ಯಗಳ ಆಧಾರದ ಮೇಲೆ ಮಹಾರಾಷ್ಟ್ರದ ತಕ್ರಾರವಾಡಿ ಗ್ರಾಮದ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | ವಿದೇಶದಲ್ಲಿ ಮೃತಪಟ್ಟ ಇಬ್ಬರು ಕನ್ನಡಿಗರ ಮೃತದೇಹ ತರಲು ಎನ್ಆರ್‌ಐ ಫೋರಂ ನೆರವು
ಜ.14ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಗಂಭೀರ ಗಾಯಗಳಾಗಿದ್ದರಿಂದ ಸಚಿವೆ ಆಸ್ಪತ್ರೆಗೆ ದಾಖಲಾಗಿದ್ದರು. ಸುಮಾರು 13 ದಿನ ಚಿಕಿತ್ಸೆ ಪಡೆದ ಬಳಿಕ ಹೆಬ್ಬಾಳ್ಕರ್ ಅವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.