ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru News: ಯುವತಿಗೆ 'ನಿನ್‌ ರೇಟ್ ಎಷ್ಟುʼ ಎಂದು ಕೇಳಿ ಕಿರುಕುಳ ಕೊಟ್ಟಿದ್ದ ಕಾಮುಕ ಅರೆಸ್ಟ್‌

​ಬೆಂಗಳೂರಿನ ರಾಮಮೂರ್ತಿನಗರದಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ, ವ್ಯಕ್ತಿಯೊಬ್ಬ "ರೇಟ್ ಎಷ್ಟು?" ಎಂದು ಕೇಳಿ ಕಿರುಕುಳ ನೀಡಿದ್ದ. ವ್ಯಕ್ತಿಯ ಈ ವಿಕೃತ ವರ್ತನೆಯಿಂದ ಆಕ್ರೋಶಗೊಂಡಿದ್ದ ಯುವತಿ, ತಕ್ಷಣ ತನ್ನ ಮೊಬೈಲ್ ತೆಗೆದು ವಿಡಿಯೋ ರೆಕಾರ್ಡ್ ಮಾಡಿದ್ದಳು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು: ರಸ್ತೆಬದಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳ ಜತೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿ ಕಿರುಕುಳ (Bengaluru woman harassed) ನೀಡಿದ ಘಟನೆ ರಾಮಮೂರ್ತಿನಗರದಲ್ಲಿ ನಡೆದಿತ್ತು. ಪ್ರಕರಣ ಸಂಬಂಧ ವಿಡಿಯೊ ವೈರಲ್‌ ಆದ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

ಏನಿದು ಪ್ರಕರಣ?

​ರಾಮಮೂರ್ತಿನಗರದ ರಸ್ತೆ ಬದಿಯಲ್ಲಿ ಯುವತಿಯೊಬ್ಬಳು ಕ್ಯಾಬ್‌ಗಾಗಿ ಕಾಯುತ್ತಾ ನಿಂತಿದ್ದಾಗ, ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಆಕೆಗೆ ಅಸಭ್ಯವಾಗಿ "ರೇಟ್ ಎಷ್ಟು?" ಎಂದು ಕೇಳಿ ಕಿರುಕುಳ ನೀಡಿದ್ದ. ವ್ಯಕ್ತಿಯ ಈ ವಿಕೃತ ವರ್ತನೆಯಿಂದ ಆಕ್ರೋಶಗೊಂಡಿದ್ದ ಯುವತಿ, ತಕ್ಷಣ ತನ್ನ ಮೊಬೈಲ್ ತೆಗೆದು ವಿಡಿಯೋ ರೆಕಾರ್ಡ್ ಮಾಡಿದ್ದಳು. ಅಲ್ಲದೆ, ಪೊಲೀಸರಿಗೆ ದೂರು ನೀಡುವುದಾಗಿಯೂ ಎಚ್ಚರಿಸಿದ್ದಾಳೆ. ಇದರಿಂದ ಗಲಿಬಿಲಿಗೊಂಡ ಆರೋಪಿ ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಸ್ಥಳದಿಂದ ಪರಾರಿಯಾಗಿದ್ದ.

​ಇನ್ನು ​ಧೈರ್ಯಗೆಡದ ಯುವತಿ ತಾನು ಅನುಭವಿಸಿದ ಕಿರುಕುಳದ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, ವಿಕೃತ ಕಾಮುಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸರಿಗೆ ಆಗ್ರಹಿಸಿದ್ದಳು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.



ಎಫ್‌ಐಆರ್ ದಾಖಲು, ಆರೋಪಿ ಬಂಧನ:

​ವಿಡಿಯೊ ವೈರಲ್‌ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಮಮೂರ್ತಿನಗರ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ಎಫ್‌ಐಆರ್ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ್ದಾರೆ.

​ತನಿಖೆ ತೀವ್ರಗೊಳಿಸಿದ ಪೊಲೀಸರು 42 ವರ್ಷದ ವಿಜಯ್ ರಾಘವ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ರಾಮಮೂರ್ತಿನಗರದ ಎನ್‌ಆರ್‌ಐ ಲೇಔಟ್‌ನ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಹಣ್ಣಿನ ವ್ಯಾಪಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಸ್ತುತ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.