ಬೆಂಗಳೂರು: ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಮಂಕಾಳ ವೈದ್ಯ (Mankala Vaidya) ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ (Umashree) ಆಯ್ಕೆಯಾಗಿದ್ದಾರೆ. ವಿಧಾನಸಭೆಯ ಉಪ ಸಭಾಧ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ, ವಿಧಾನಪರಿಷತ್ತಿನ ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಸೋಮವಾರ ನಾಮಪತ್ರ ಸಲ್ಲಿಸಿದ್ದರು. ಇಂದು ಬೆಳಗ್ಗೆ ವಿಧಾನಸಭೆಯಲ್ಲಿ ಉಪಸಭಾದ್ಯಕ್ಷ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ಮಂಕಾಳ ವೈದ್ಯ ಅವರ ಹೆಸರನ್ನು ಅನುಮೋದಿಸಿದರು. ಬಳಿಕ ಸದನ ಎಲ್ಲಾ ಸದಸ್ಯರ ಸರ್ವಾನುಮತದಿಂದ ಮಂಕಾಳ ವೈದ್ಯ ಅವರು ಉಪಸಭಾದ್ಯಕ್ಷರಾಗಿ ಆಯ್ಕೆಯಾದರು.
ಉಮಾಶ್ರೀ
ರಂಗಭೂಮಿ, ಚಲನಚಿತ್ರ, ಕಿರುತೆರೆಯಲ್ಲಿ ಸುಮಾರು ಐದು ದಶಕಗಳ ಕಾಲ ಸೇವೆ ಸಲ್ಲಿಸಿರುವ ಉಮಾಶ್ರೀ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಅವರು ವಿಧಾನ ಪರಿಷತ್ ಸದಸ್ಯೆಯಾಗಿದ್ದಾರೆ. 2013ರಲ್ಲಿ ಉಮಾಶ್ರೀ ಅವರು ತೇರದಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕಿಯಾಗಿ ಆಯ್ಕೆಯಾಗಿದ್ದರು. ಅವರು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆಯಾಗಿ ಸೇವೆ ಸಲ್ಲಿಸಿದ ಅನುಭವ ಇವರಿಗಿದೆ.
ವಿಡಿಯೋ ನೋಡಿ
2021ರ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿಯ ಕೆ ಪ್ರಾಣೇಶ್ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದ ಹಿನ್ನೆಲೆಯಲ್ಲಿ, ಅವರು ಉಪಸಭಾಪತಿ ಹುದ್ದೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಹುದ್ದೆ ತೆರವಾಗಿತ್ತು. ಇದೀಗ ಉಪ ಸಭಾಪತಿಯಾಗಿ ಉಮಾಶ್ರೀ ಆಯ್ಕೆಯಾಗಿದ್ದಾರೆ.
ಮಂಕಾಳ ವೈದ್ಯ
ಜಿಲ್ಲಾ ಪಂಚಾಯತ್ ಸದಸ್ಯನಾಗಿ ರಾಜಕೀಯ ಪ್ರವೇಶ ಮಾಡಿದ ಮಂಕಾಳು ವೈದ್ಯ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ಅವರು, ಬಳಿಕ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. 2013ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಆದರೆ 2018 ರಲ್ಲಿ ಸೋಲನ್ನು ಕಂಡರು.
ಸಚಿವ ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷ ಪಟ್ಟು: ಭ್ರಷ್ಟ ಸಚಿವರಿಂದ ಉತ್ತರ ಪಡೆಯುವ ಅಗತ್ಯವಿಲ್ಲ
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಭಟ್ಕಳ ಕ್ಷೇತ್ರದಿಂದ ಸ್ಪರ್ಧಿಸಿದ ವೈದ್ಯರು 32 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗಳ ಸಚಿವ ಸ್ಥಾನವನ್ನು ನಿಭಾಯಿಸಿದರು. ಸಂಪುಟ ಪುನರ್‌ರಚನೆಯಾದಾಗ ಮಂಕಾಳ ವೈದ್ಯ ಅವರ ಹೆಸರು ಸಚಿವ ಸ್ಥಾನದ ಪಟ್ಟಿಯಲ್ಲಿ ಕೇಳಿ ಬಂದಿತ್ತು. ಆದರೆ ಕೊನೆ ಹಂತದಲ್ಲಿ ಸಚಿವ ಸ್ಥಾನ ಕೈ ತಪ್ಪಿತ್ತು. ಇದೀಗ ಅವರು ವಿಧಾನಸಭೆಯ ಉಪ ಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.