ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ಬೆಂಗಳೂರಿನಂತಹ ದೊಡ್ಡ ನಗರಗಳಲ್ಲಿ ಇಂತಹ ಘಟನೆಗಳು ಸಾಮಾನ್ಯ ಎಂದ ಸಚಿವ ಪರಮೇಶ್ವರ್
Physical Abuse: ಪೊಲೀಸರು ಮಳೆ ಮತ್ತು ಚಳಿಯನ್ನು ಲೆಕ್ಕಿಸದೆ ದಿನದ 24 ಗಂಟೆಗಳೂ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಬೆಂಗಳೂರಿನಲ್ಲಿ ಶಾಂತಿ ನೆಲೆಸಿದೆ. ಆದರೆ, ಬೆಂಗಳೂರಿನಂತಹ ದೊಡ್ಡ ನಗರದಲ್ಲಿ, ಅಲ್ಲೊಂದು ಇಲ್ಲೊಂದು ಇಂತಹ ಘಟನೆಗಳು ನಡೆಯುತ್ತವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.


ಬೆಂಗಳೂರು: ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಅಲ್ಲೊಂದು ಇಲ್ಲೊಂದು ಮಹಿಳೆಯರ ಮೇಲಿನ ದೌರ್ಜನ್ಯದಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದರೆ, ಪೊಲೀಸರ ಉಪಸ್ಥಿತಿಯಿಂದಾಗಿ ನಗರದಲ್ಲಿ ಶಾಂತಿ ನೆಲೆಸಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೋಮವಾರ ಹೇಳಿದ್ದಾರೆ.
ಸುದ್ದಗುಂಟೆಪಾಳ್ಯದಲ್ಲಿ ನಿರ್ಜನ ಸ್ಥಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಇಂತಹ ಘಟನೆ ನಡೆದಾಗಲೆಲ್ಲಾ ಅದು ಸಾರ್ವಜನಿಕರ ಗಮನ ಸೆಳೆಯುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಪೊಲೀಸರು ಮಳೆ ಮತ್ತು ಚಳಿಯನ್ನು ಲೆಕ್ಕಿಸದೆ ದಿನದ 24 ಗಂಟೆಗಳೂ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಬೆಂಗಳೂರಿನಲ್ಲಿ ಶಾಂತಿ ನೆಲೆಸಿದೆ. ಬೆಂಗಳೂರಿನಂತಹ ದೊಡ್ಡ ನಗರದಲ್ಲಿ, ಅಲ್ಲೊಂದು ಇಲ್ಲೊಂದು ಇಂತಹ ಘಟನೆಗಳು ನಡೆಯುತ್ತವೆ ಎಂದು ಹೇಳಿದರು.
ಗಸ್ತು ಮತ್ತು ಮೇಲ್ವಿಚಾರಣಾ ವ್ಯವಸ್ಥೆಯನ್ನು ಬಲಪಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ಪ್ರತಿದಿನ ಸೂಚನೆಗಳನ್ನು ನೀಡಲಾಗುತ್ತಿದೆ. ಪೊಲೀಸರು ಜಾಗರೂಕರಾಗಿರಬೇಕು, ಬೀಟ್ ವ್ಯವಸ್ಥೆಯನ್ನು ನಿಯಮಿತವಾಗಿ ಅನುಸರಿಸಬೇಕು ಮತ್ತು ಮೇಲ್ವಿಚಾರಣೆಯನ್ನು ಹೆಚ್ಚಿಸಬೇಕು. ಪ್ರತಿಯೊಂದು ಪ್ರದೇಶದಲ್ಲೂ ಶಿಸ್ತುಬದ್ಧ ಮತ್ತು ಪರಿಣಾಮಕಾರಿ ರೀತಿಯಲ್ಲಿ ಗಸ್ತು ತಿರುಗಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.
ಪೊಲೀಸರ ಪ್ರಕಾರ, ಏಪ್ರಿಲ್ 3ರ ಬೆಳಗಿನ ಜಾವ ಇಬ್ಬರು ಯುವತಿಯರು ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಅವರ ಬಳಿ ಬಂದ ವ್ಯಕ್ತಿಯೊಬ್ಬ ಅವರಲ್ಲಿ ಒಬ್ಬ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿ ಪತ್ತೆಗೆ ಹುಡುಕಾಟ ನಡೆಯುತ್ತಿದೆ ಎಂದು ಆಗ್ನೇಯ ಬೆಂಗಳೂರಿನ ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಸಾರಾ ಫಾತಿಮಾ ತಿಳಿಸಿದ್ದಾರೆ.
ಬಿಜೆಪಿಯ ನಿರಂತರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಬಿಜೆಪಿ ಈಗ ವಿರೋಧ ಪಕ್ಷದಲ್ಲಿದೆ. ಅವರಿಗೆ ನಮ್ಮ ಸರ್ಕಾರದ ಬಗ್ಗೆ ಮಾತನಾಡಲು ಬೇರೆ ಏನೂ ಇಲ್ಲ. ನಾವು ಇಲ್ಲಿಯವರೆಗೆ ಉತ್ತಮ ಆಡಳಿತ ನೀಡಿದ್ದೇವೆ ಮತ್ತು ನಾವು ಅದನ್ನು ಮುಂದುವರಿಸುತ್ತೇವೆ' ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ | Vidhana Soudha lighting: ವಿಧಾನಸೌಧದ ನಿತ್ಯ ದೀಪಾಲಂಕಾರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬಿಜೆಪಿಯ 'ಜನಾಕ್ರೋಶ ಯಾತ್ರೆ' ಕುರಿತು ಮಾತನಾಡಿದ ಪರಮೇಶ್ವರ್ ಅವರು, ಇದು ಆಡಳಿತಾರೂಢ ಸರ್ಕಾರದ ಯಶಸ್ಸಿಗೆ ಪ್ರತಿಕ್ರಿಯೆಯಾಗಿದೆ. ಬಿಜೆಪಿಗೆ ಇದನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ಅವರು ಈ 'ಜನಾಕ್ರೋಶ ಯಾತ್ರೆ'ಯನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು.