SIR in Karnataka: ರಾಜ್ಯ ಸರಕಾರದಿಂದ SIR ದುರುಪಯೋಗ; ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಜೆಡಿಎಸ್-ಬಿಜೆಪಿ ನಿಯೋಗ ದೂರು
ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಂಡು ರಾಜ್ಯ ಸರ್ಕಾರ SIR ಪ್ರಕ್ರಿಯೆಯನ್ನು ಹಳಿ ತಪ್ಪಿಸುತ್ತಿದೆ. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಜಂಟಿ ನಿಯೋಗದಿಂದ ಚುನಾವಣಾ ಆಯುಕ್ತರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬಿಜೆಪಿ-ಜೆಡಿಸ್ ನಾಯಕರು. -
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ SIR ಪ್ರಕ್ರಿಯೆಯನ್ನು ದುರುಪಯೋಗ ಮಾಡಿಕೊಂಡು ಮತದಾರರ ಪಟ್ಟಿ ತಿರುಚುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಮತ್ತು ಬಿಜೆಪಿ ಜಂಟಿ ನಿಯೋಗವು ರಾಜ್ಯ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ದಾಖಲೆಗಳ ಸಮೇತ ದೂರು ಸಲ್ಲಿಸಿತು.
ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಂಡು ರಾಜ್ಯ ಸರ್ಕಾರ SIR ಪ್ರಕ್ರಿಯೆಯನ್ನು ಹಳಿ ತಪ್ಪಿಸುತ್ತಿರುವ ಕುರಿತು ನಾನು ಮತ್ತು ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಹಾಗೂ ಉಳಿದ ಎಲ್ಲಾ ನಾಯಕರು ಸೇರಿ ಆಯುಕ್ತರಿಗೆ ಮನವರಿಕೆ ಮಾಡಿಕೊಟ್ಟೆವು ಎಂದು ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರ SIR ಪ್ರಕ್ರಿಯೆಯನ್ನು ದುರುಪಯೋಗ ಮಾಡಿಕೊಂಡು ಮತದಾರರ ಪಟ್ಟಿ ತಿರುಚುತ್ತಿರುವ ಬಗ್ಗೆ @JanataDal_S ಮತ್ತು @BJP4Karnataka ಪಕ್ಷಗಳನ್ನು ಒಳಗೊಂಡ ಜಂಟಿ.ನಿಯೋಗವು ರಾಜ್ಯ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ದಾಖಲೆಗಳ ಸಮೇತ ದೂರು ಸಲ್ಲಿಸಿತು.
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 6, 2026
ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಂಡು ರಾಜ್ಯ ಸರ್ಕಾರ… pic.twitter.com/KS9Y7XfUvl
ನಿಯೋಗದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿಧಾನಸಭೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಂಸದ ಎಂ.ಮಲ್ಲೇಶ್ ಬಾಬು, ಗೋವಿಂದ ಕಾರಜೋಳ, ಶಾಸಕರಾದ ಅರವಿಂದ ಬೆಲ್ಲದ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಸಿ.ಟಿ.ರವಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ ಅವರು, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಸೇರಿದಂತೆ ಇನ್ನೂ ಕೆಲ ಪ್ರಮುಖ ನಾಯಕರು ಇದ್ದರು.
ಅಕ್ರಮ ವಲಸಿಗರಿಗೆ ಮತದಾರರ ಪಟ್ಟಿಯಲ್ಲಿ ಸ್ಥಾನ: ಜೋಶಿ ಆರೋಪ

ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆಯ (SIR) ಮಾರ್ಗಸೂಚಿಗಳ ಪ್ರಕಾರ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸಿ, ಎನ್ಯುಮರೇಷನ್ ಫಾರ್ಮ್ (Enumeration Forms) ವಿತರಿಸುವುದು ಕಡ್ಡಾಯವಾಗಿದೆ. ಈ ಪ್ರಕ್ರಿಯೆಯಿಂದ ಯಾವುದೇ ರೀತಿಯ ತಪ್ಪಾದರೂ ಪರಿಷ್ಕರಣೆಯ ಮೂಲ ಉದ್ದೇಶವೇ ವಿಫಲವಾಗುತ್ತದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದೆ ಮತ್ತು ಆಡಳಿತ ಯಂತ್ರವನ್ನು ಸಕ್ರಿಯವಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ಕಟ್ಟುನಿಟ್ಟಿನ ನಿಯಮಗಳನ್ನು ಸಡಿಲಗೊಳಿಸುವ ಮೂಲಕ ಅಕ್ರಮ ವಲಸಿಗರಿಗೆ ನಮ್ಮ ಮತದಾರರ ಪಟ್ಟಿಯಲ್ಲಿ ಸ್ಥಾನ ಸಿಗುವಂತೆ ಬಾಗಿಲು ತೆರೆಯುತ್ತಿದ್ದಾರೆ. ಇದು ದೇಶದ ರಾಷ್ಟ್ರೀಯ ಭದ್ರತೆಗೆ ಹಾಗೂ ಭಾರತದ ಪ್ರಜಾಪ್ರಭುತ್ವದ ಪಾವಿತ್ರ್ಯಕ್ಕೆ ಧಕ್ಕೆ ತರುವ ಬೆಳವಣಿಗೆಯಾಗಿದೆ. ಅಲ್ಪ ರಾಜಕೀಯ ಲಾಭಕ್ಕಾಗಿ ನೈಜ ಭಾರತೀಯ ನಾಗರಿಕರ ಮತದಾನದ ಹಕ್ಕಿಗೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ಸಹಿಸಲಾಗುವುದಿಲ್ಲ.
ಚುನಾವಣಾ ಪ್ರಕ್ರಿಯೆಯ ಸಮಗ್ರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವ ನಿಟ್ಟಿನಲ್ಲಿ, ಎಸ್‌ಐಆರ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಕಂಡುಬಂದಿರುವ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿಗಳನ್ನು ಒತ್ತಾಯಿಸಲಾಯಿತು ಎಂದು ತಿಳಿಸಿದ್ದಾರೆ.