ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆ ಸುತ್ತಿಕೊಂಡ ಮುಡಾ ಹಗರಣ; ಹೈಕೋರ್ಟ್‌ನಿಂದ ತುರ್ತು ನೋಟಿಸ್‌

MUDA Scam Case: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ ಗುರುವಾರ ತುರ್ತು ನೋಟಿಸ್ ಜಾರಿ ಮಾಡಿದೆ. ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಸಲ್ಲಿಸಿದ ಬಿ ರಿಪೋರ್ಟ್‌ ಅನ್ನು ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ನೋಟಿಸ್‌ ಜಾರಿ ಮಾಡಿದೆ.

ಕರ್ನಾಟಕ ಹೈಕೋರ್ಟ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)

ಬೆಂಗಳೂರು, ಮಾ. 26: ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಭಾರಿ ಸಂಚಲ ಮೂಡಿಸಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣ ಮತ್ತೊಮ್ಮೆ ಸದ್ದು ಮಾಡುತ್ತಿದೆ (MUDA Scam Case). ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ (Karnataka High Court) ಗುರುವಾರ (ಮಾರ್ಚ್ 26) ತುರ್ತು ನೋಟಿಸ್ ಜಾರಿ ಮಾಡಿದೆ. ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಸಲ್ಲಿಸಿದ ಬಿ ರಿಪೋರ್ಟ್‌ ಅನ್ನು ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ತುರ್ತು ನೋಟಿಸ್‌ ಜಾರಿ ಮಾಡಿದೆ.

ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್​ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​, ಸಿಎಂ ಹಾಗೂ ಅವರ ಪತ್ನಿ ಅಲ್ಲದೇ ಲೋಕಾಯುಕ್ತ ಪೊಲೀಸರು, ಜಾರಿ ನಿರ್ದೇಶನಾಲಯ, ಮಲ್ಲಿಕಾರ್ಜನಸ್ವಾಮಿ, ಆಕ್ಷೇಪಾರ್ಹವಾದ ಭೂಮಿಯ ಮಾಲಕ ಜೆ. ದೇವರಾಜು ಅವರಿಗೂ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನ ಮುಂದೂಡಿದೆ.

ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್: ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

ಖಾಸಗಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರ ಏಕಸದಸ್ಯ ಪೀಠ ನಡೆಸಿತು. ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲೆ ಲಕ್ಷ್ಮೀ ಐಯ್ಯಂಗಾರ್‌ ವಾದ ಮಂಡಿಸಿ, “ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್‌ ಪ್ರಶ್ನಿಸಿದ್ದೇವೆ. ಇದೊಂದು ರೀತಿಯಲ್ಲಿ ಸಮಿತಿ ವರದಿಯ ರೀತಿಯಲ್ಲಿದೆ. ಅರ್ಜಿ ಸಂಬಂಧ ರಿಜಿಸ್ಟ್ರಿಯು ಎತ್ತಿರುವ ಕಚೇರಿ ಆಕ್ಷೇಪಣೆ ಸರಿಪಡಿಸಲಾಗುವುದು” ಎಂದರು.

ಮೈಸೂರು ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2025ರ ಫೆಬ್ರವರಿ 12ರಂದು ಬೆಂಗಳೂರಿನ 82ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿ ವಿಶೇಷ ನ್ಯಾಯಾಲಯ 2026ರ ಜನವರಿ 28ರಂದು ಆದೇಶ ಹೊರಡಿಸಿತು. ʼʼಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿಸಲ್ಲಿಸಿರುವ ಬಿ ರಿಪೋರ್ಟ್‌ ಅನ್ನು ಪಡೆದು ಪರಿಶೀಲಿಸಬೇಕು. ಬಿ ರಿಪೋರ್ಟ್ ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು. ಅಲ್ಲದೇ ಸ್ವತಂತ್ರ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ವರ್ಗಾಯಿಸಬೇಕು. ತನಿಖೆ ನಡೆಸಿ ಹೊಸದಾಗಿ ವರದಿ ಸಲ್ಲಿಸಲು ಸ್ವತಂತ್ರ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕುʼʼ ಎಂದು ಸ್ನೇಹಮಯ ಕೃಷ್ಣ ಕೋರಿದ್ದಾರೆ.

ಕರ್ನಾಟಕ ಹೈಕೋರ್ಟ್‌ ಅದೇಶದಿಂದ ಸದ್ಯ ಮುಖ್ಯಮಂತ್ರಿ ಮತ್ತವರ ಕುಟುಂಬಕ್ಕೆ ಸಾಕಷ್ಟು ಹಿನ್ನಡೆಯಾದಂತಾಗಿದೆ.

ಮುಖ್ಯ ಕಾರ್ಯದರ್ಶಿ ವಿರುದ್ಧ ಭ್ರಷ್ಟಾಚಾರ ಆರೋಪ; ಮುಡಾ ಕೇಸ್‌ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್‌

ಏನಿದು ಪ್ರಕರಣ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಸೇರಿದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್ 464ರ 3 ಎಕರೆ 16 ಗುಂಟೆ ಜಮೀನಿನ ಸ್ವಾಧೀನಪಡಿಸಿಕೊಂಡು, ಅದರ ಬದಲಿಗೆ ಸುಮಾರು 56 ಕೋಟಿ ರುಪಾಯಿ ಮೌಲ್ಯದ 14 ನಿವೇಶನಗಳನ್ನು ಮುಡಾ ಅಕ್ರಮವಾಗಿ ಹಂಚಿಕೆ ಮಾಡಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಹೀಗಾಗಿ, ಪ್ರಕರಣದ ಕುರಿತು ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಕೋರಿ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ 2024ರ ಜುಲೈ 3ರಂದು ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದರು.

ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ಸದಸ್ಯರದ್ದು ಯಾವುದೇ ತಪ್ಪಿಲ್ಲ ಎಂದು ಕ್ಲೀನ್‌ ಚಿಟ್‌ (ಬಿ ರಿಪೋರ್ಟ್‌) ನೀಡಿದ್ದರು. ಸದ್ಯ ಈ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ.

Ramesh Ballamoole

View all posts by this author