ಬೆಂಗಳೂರು: ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ವಿರುದ್ಧ ಅವಹೇಳನಕಾರಿ ಆರೋಪ ಮಾಡಿ, ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ವಕ್ತಾರ, ಮೈಸೂರಿನ ಎಂ.ಜಿ. ಮಹೇಶ್ (M.G. Mahesh) ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಜೂನ್ 19ರಂದು ಸಂಜೆ ನಡೆದ ಪಕ್ಷದ ವೆಬೆಕ್ಸ್ ಸಭೆಯಲ್ಲಿ, ತಾವು ರಾಷ್ಟ್ರೀಯ ನಾಯಕರು ಹಾಗೂ ರಾಜ್ಯ ಬಿಜೆಪಿ ಪ್ರಮುಖರ ಕುರಿತಾಗಿ ಇಲ್ಲಸಲ್ಲದ ಮತ್ತು ಕೀಳುಮಟ್ಟದ ಹಾಗೂ ಅವಹೇಳನಕಾರಿ ಆರೋಪಗಳನ್ನು ಮಾಡಿ, ಪಕ್ಷದ ಸಂಘಟನೆಯಲ್ಲಿ ಅಶಿಸ್ತು ಪ್ರದರ್ಶಿಸಿರುವುದು ಗಮನಕ್ಕೆ ಬಂದಿದ್ದು, ಅದರ ಕುರಿತಾಗಿ ಸ್ಪಷ್ಟಿಕರಣ ಕೇಳಿ ನೋಟೀಸ್ ನೀಡಲಾಗಿತ್ತು.
ಈಗ ತಾವು ಸ್ಪಷ್ಟಿಕರಣ ನೀಡಿದ್ದು, ಅದು ಸಮಾಧಾನಕರವಾಗಿರುವುದಿಲ್ಲ. ಆದುದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.