ಬೆಂಗಳೂರು: ರಾಜ್ಯದಲ್ಲಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್(Chief Minister D K Shivakumar) ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಆರೋಗ್ಯ ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದೆ ಎಂದು ಹೆಬ್ಬಾಳ ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್(Byrati Suresh) ಹೇಳಿದ್ದಾರೆ.
ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜು ಆವರಣದಲ್ಲಿ 125 ಹಾಸಿಗೆ ಸಾಮರ್ಥ್ಯದ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯವಿರುವ ಕಡೆಯಲ್ಲೆಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡುವ ಸಂಕಲ್ಪ ಮಾಡಿದ್ದಾರೆ. ಈ ಮೂಲಕ ನಮ್ಮ ಕಾಂಗ್ರೆಸ್ ಸರ್ಕಾರದ ಬದ್ಧತೆಯನ್ನು ತೋರಿಸುತ್ತಿದ್ದಾರೆ ಎಂದರು.
ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಕಳೆದ ಮೂರು ವರ್ಷಗಳಲ್ಲಿ ಪಂಚ ಗ್ಯಾರೆಂಟಿ ಉಚಿತ ಯೋಜನೆಗಳಿಗೆ ನಮ್ಮ ಸರ್ಕಾರ ಬರೋಬ್ಬರಿ 1.56 ಲಕ್ಷ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದೆ ಎಂದರು.
ಇದನ್ನು ನೋಡಿ ಹೊಟ್ಟೆ ಉರಿದುಕೊಳ್ಳುತ್ತಿರುವ ಬಿಜೆಪಿ ನಾಯಕರು ಬೊಗಳೆ ಬಿಡುತ್ತಿದ್ದಾರೆ ಎಂದು ಬೈರತಿ ಸುರೇಶ್ ಲೇವಡಿ ಮಾಡಿದರು.
ನಮ್ಮ ಹೆಬ್ಬಾಳ ಕ್ಷೇತ್ರಕ್ಕೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಈಗಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಳೆದ ಮೂರು ವರ್ಷಗಳಲ್ಲಿ ಸುಮಾರು ಒಂದು ಸಾವಿರ ಕೋಟಿ ರೂಪಾಯಿಗಳ ಅನುದಾನ ನೀಡಿದ್ದಾರೆ. ಹಣವಿಲ್ಲದಿದ್ದರೆ ಕೇವಲ ಒಂದು ಕ್ಷೇತ್ರಕ್ಕೆ ಇಷ್ಟೊಂದು ಹಣ ಕೊಡಲು ಸಾಧ್ಯವಾಗುತ್ತಿತ್ತೇ ಎಂದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
13 ತಿಂಗಳಲ್ಲಿ ಪೂರ್ಣ
ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾಗಿದ್ದ ಶಿವಕುಮಾರ್ ಅವರು ವಿಶೇಷ ಆಸಕ್ತಿ ತೋರಿ ಆಸ್ಪತ್ರೆ ನಿರ್ಮಾಣಕ್ಕೆ ಸಮ್ಮತಿ ಸೂಚಿಸಿದ್ದರು. ಅವರ ಈ ಜನಪರ ನಿಲುವಿನಿಂದಾಗಿ ಇಂದು ಹೆಬ್ಬಾಳಕ್ಕೆ ಹೈಟೆಕ್ ಆಸ್ಪತ್ರೆ ಬರಲಿದೆ ಎಂದರು.
ಸುಮಾರು 3 ಎಕರೆ ಪ್ರದೇಶದಲ್ಲಿ ಈ ಆಸ್ಪತ್ರೆಯನ್ನು ಮುಂದಿನ 13 ತಿಂಗಳಲ್ಲಿ ಕಾಮಗಾರಿ ಪೂರ್ಣ ಗೊಳಿಸಿ ಮುಖ್ಯಮಂತ್ರಿ ಶಿವಕುಮಾರ್ ಅವರೇ ಉದ್ಘಾಟನೆ ಮಾಡಲಿದ್ದಾರೆ ಎಂದು ಸುರೇಶ್ ಘೋಷಿಸಿದರು.
ಬರೋಬ್ಬರಿ ಸಾವಿರ ಕೋಟಿ ಅನುದಾನ
ಕಳೆದ ಮೂರು ವರ್ಷಗಳಲ್ಲಿ ಹೆಬ್ಬಾಳ ಕ್ಷೇತ್ರಕ್ಕೆ ಒಂದು ಸಾವಿರ ಕೋಟಿ ರೂಪಾಯಿಗಳನ್ನು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಈಗಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅನುದಾನ ನೀಡಿದ್ದಾರೆ. ಇದರಲ್ಲಿ ರಸ್ತೆ ಅಭಿವೃದ್ಧಿ, ಕುಡಿಯುವ ನೀರು, ಉದ್ಯಾನಗಳ ಅಭಿವೃದ್ಧಿ ಸೇರಿದಂತೆ ಅನೇಕ ಜನಪರ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.