Bengaluru Rains: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ; ಟ್ರಾಫಿಕ್ ಕಿರಿ ಕಿರಿ, ಸವಾರರ ಪರದಾಟ
Bengaluru Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಕೆಂಗೇರಿ ರಸ್ತೆಯ ಜ್ಞಾನಭಾರತಿ ಬಳಿ ಸೋಮವಾರ ಮಳೆಯ ನಡುವೆ ಬಸ್ಗಾಗಿ ಕಾಯುತ್ತಿದ್ದ ಪ್ರಯಾಣಿಕರು. (ಫೋಟೋಗಳು-ಸುಧಾಕರ್ ದೇವರಾಜ್, ವಿಶ್ವವಾಣಿ)


ಬೆಂಗಳೂರಿನ ಹಲವೆಡೆ ಸೋಮವಾರ ಬೆಳಗ್ಗೆಯಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೆಲಸ ಕಾರ್ಯಗಳಿಗೆ ಹೋಗುವ ಜನರಿಗೆ ತೊಂದರೆಯಾಯಿತು. ಇನ್ನು ಸಂಚಾರ ದಟ್ಟಣೆ ಹೆಚ್ಚಾಗಿದ್ದರಿಂದ ಸವಾರರು ಪರದಾಡುವಂತಾಗಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಶುರುವಾಗಿದ್ದು, ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಸುತ್ತಿದೆ. ಇತ್ತೀಚೆಗೆ ಮುಂಗಾರು ಪೂರ್ವ ಮಳೆಗೆ ಬೆಂಗಳೂರಿನ ಹಲವು ಬಡಾವಣೆಗಳು ಜಲಾವೃತವಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಇದೀಗ ಮುಂಗಾರು ಆರಂಭದಲ್ಲೇ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಅದರಂತೆ ಬೆಂಗಳೂರು ಸೇರಿ ವಿವಿಧೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ಬೆಂಗಳೂರಿನ ರಿಚ್ಮಂಡ್ ಸರ್ಕಲ್, ಶಾಂತಿನಗರ, ಎಂ.ಜಿ.ರಸ್ತೆ, ಕಾರ್ಪೊರೇಷನ್, ಕೆ.ಆರ್.ಮಾರ್ಕೆಟ್ ವಿಧಾನಸೌಧ, ಶಿವಾನಂದ ಸರ್ಕಲ್, ಮೇಖ್ರಿ ವೃತ್ತ, ಶೇಷಾದ್ರಿಪುರಂ, ಮಲ್ಲೇಶ್ವರಂ, ಯಶವಂತಪುರ, ಜ್ಞಾನಭಾರತಿ, ಆರ್ಆರ್ನಗರ ಸೇರಿ ಹಲವೆಡೆ ಸೋಮವಾರ ಮಳೆಯಾಗಿದೆ.

ಬೆಳ್ಳಂ ಬೆಳಗ್ಗೆಯೇ ಜಿಟಿ ಜಿಟಿ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಕೆಲಸ ಕಾರ್ಯಗಳಿಗೆ ಹೋಗುವ ಜನರಿಗೆ ತೊಂದರೆ ಉಂಟಾಯಿತು. ಅಲ್ಲದೇ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದರಿಂದ ವಾಹನ ಸವಾರರು ಪರದಾಡಿದರು.

ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು (ಮೇ 26) ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 27ರಂದು ಕೂಡ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.