ಬೆಂಗಳೂರು: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ದರ ಏರಿಕೆ ಮಾಡಲಾಗುತ್ತಿದೆ. ಸರಕಾರದ ಅವೈಜ್ಞಾನಿಕ ಬೆಲೆ ಏರಿಕೆ ಖಂಡಿಸಿ ನ.11ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(B Y Vijayendra) ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ಅವೈಜ್ಞಾನಿಕ ಬೆಲೆ ಏರಿಕೆ ಯನ್ನು ಖಂಡಿಸಿ ಬಿಜೆಪಿ ನಾಡಿನ ಜನರ ಪರವಾಗಿ ಹೋರಾಟ ನಡೆಸಲಿದೆ. ನ.11ರಂದು ಬೆ.10ರಿಂದ ಸಂಜೆ 6ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಒಂದು ದಿನದ ಬೃಹತ್ ಪ್ರತಿಭಟನೆ ಹಮ್ಮಿ ಕೊಳ್ಳಲಾಗಿದೆ. ರಾಜ್ಯದ ಬಿಜೆಪಿ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಮಾಜಿ ಚುನಾಯಿತ ಪ್ರತಿನಿಧಿಗಳು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನಾಯಕರು ಹಾಗೂ ಪಕ್ಷದ ರಾಜ್ಯ ಪದಾಧಿಕಾರಿಗಳು ಸೇರಿದಂತೆ ಎಲ್ಲ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: BY Vijayendra: ಕಾಂಗ್ರೆಸ್ ನಾಯಕರ ಕುರಿತ ಆಕ್ಷೇಪಾರ್ಹ ಪದ ಬಳಕೆಗೆ ಕ್ಷಮೆಯಾಚಿಸಿದ ಬಿ.ವೈ.ವಿಜಯೇಂದ್ರ
ರಾಜ್ಯ ಸರಕಾರಕ್ಕೆ ಜನರ ನೋವನ್ನು ತಲುಪಿಸಿ, ಬೆಲೆ ಏರಿಕೆ ನಿರ್ಧಾರ ಹಿಂಪಡೆಯುವಂತೆ ಎಚ್ಚರಿಕೆ ನೀಡಲಾಗುವುದು. ಇದಾದ ಬಳಿಕ ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪಾದಯಾತ್ರೆ ಗಳಲ್ಲೂ ಬೆಲೆ ಏರಿಕೆ ವಿರುದ್ಧದ ಹೋರಾಟವನ್ನು ಮುಂದು ವರಿಸಲಾಗುವುದು. ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಪ್ರತಿಭಟನೆ ನಡೆಸಲಾಗುವುದು. ಜನಸಾಮಾನ್ಯರು, ಬಡವರು ಮತ್ತು ರೈತರ ಪರವಾಗಿ ಬಿಜೆಪಿ ಯಾವುದೇ ಕಾರಣಕ್ಕೂ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಸಿದರು.
ಸಿಎಸ್ಆರ್ ನಿಧಿಯ ಮೇಲೆ ಸರಕಾರದ ಅವಲಂಬನೆ ರಾಜ್ಯದ ಕನಿಷ್ಠ 2000 ಸರಕಾರಿ ಶಾಲೆಗಳನ್ನು ಖಾಸಗಿ ಕಂಪನಿಗಳು ದತ್ತು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ. ಕಂಪನಿಗಳು ತಮ್ಮ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡುವುದರಲ್ಲಿ ತಪ್ಪಿಲ್ಲ. ಆದರೆ ಸರಕಾರಿ ಶಾಲೆಗಳ ಅಭಿವೃದ್ಧಿಯ ಜವಾಬ್ದಾರಿಯನ್ನೇ ಖಾಸಗಿ ಕಂಪನಿಗಳ ಮೇಲೆ ಹಾಕು ವುದು ಸರಕಾರದ ವೈಫಲ್ಯವನ್ನು ತೋರಿಸುತ್ತದೆ. ಸಚಿವರು ಕ್ಷೇತ್ರಗಳ ಅಭಿವೃದ್ಧಿಗೂ ಸಿಎಸ್ ಆರ್ ನಿಧಿಯನ್ನು ಅವಲಂಬಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಭಿವೃದ್ಧಿಗೆ ಸರಕಾರದ ಬಳಿ ಹಣವಿಲ್ಲ ಎಂಬುದನ್ನು ಮುಖ್ಯಮಂತ್ರಿಗಳ ಹೇಳಿಕೆಗಳು ಬಹಿರಂಗ ಪಡಿಸುತ್ತಿವೆ.