ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣ ಆರ್ಭಟಿಸುವ Karnataka Weather) ಸಾಧ್ಯತೆ ಇದೆ. ಹೀಗಾಗಿ ಇಂದು (ಜುಲೈ 8) ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದ್ದು, ಬೆಳಗಾವಿ, ಧಾರವಾಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಿದೆ.
ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ, ನಿರಂತರ ಗಾಳಿಯೊಂದಿಗೆ ಭಾರಿ ಅಥವಾ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ, ಗಂಟೆಗೆ 50-60 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಅಥವಾ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಮಂಡ್ಯ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ, ಗಂಟೆಗೆ 40-50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆಯಿದೆ.
ಜುಲೈ 9ರಂದು ಕೂಡ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇನ್ನು ಜುಲೈ 10ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.
ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಸಾಧ್ಯತೆ
ರಾಜ್ಯದ ಘಟ್ಟ ಪ್ರದೇಶಗಳಲ್ಲಿ ಜುಲೈ 7 ರಿಂದ 11 ರವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭೂಕುಸಿತ (Landslide Warning) ಸಂಭವಿಸುವ ಸಾಧ್ಯತೆಯಿದೆ. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಮನವಿ ಮಾಡಿದೆ.
Bengaluru Power Cut: ಜುಲೈ 9ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಮೀನುಗಾರರಿಗೆ ಎಚ್ಚರಿಕೆ:
ಜುಲೈ 9ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ನಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.