ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಪೊಲೀಸರ ಭರ್ಜರಿ ಕಾರ್ಯಾಚರಣೆ; 2 ಸಾವಿರ ಮಂದಿ ವಶಕ್ಕೆ, ದಾಖಲೆಗಳ ಪರಿಶೀಲನೆ

illegal Bangladeshi immigrants: ಬೆಂಗಳೂರಿನ ವರ್ತೂರು, ಕಾಡುಗೋಡಿ, ಮಾರತಹಳ್ಳಿ, ಬೆಳ್ಳಂದೂರು, ಎಲೆಕ್ಟ್ರಾನಿಕ್‌ ಸಿಟಿ, ಬೇಗೂರು, ಬಂಡೇಪಾಳ್ಯ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನೆಲೆಸಿರುವ ಬಾಂಗ್ಲಾ ಪ್ರಜೆಗಳ ಶೆಡ್‌ಗಳ ಮೇಲೆ ದಾಳಿ ನಡೆಸಲಾಗಿದ್ದು, ಇಲ್ಲಿ ನೆಲೆಸಿರುವವರ ಆಧಾರ್‌ ಕಾರ್ಡ್‌, ಪ್ಯಾನ್‌ ಕಾರ್ಡ್‌, ವೋಟರ್‌ ಐಡಿ ಸೇರಿದಂತೆ ವಿವಿಧ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರು, ಆ.8: ಅಕ್ರಮ ಬಾಂಗ್ಲಾ ವಲಸಿಗರ (illegal Bangladeshi immigrants) ವಿರುದ್ಧ ನಗರದ ವೈಟ್‌ಫೀಲ್ಡ್‌‍ ಹಾಗೂ ಎಲೆಕ್ಟ್ರಾನಿಕ್‌ ಸಿಟಿ ವಿಭಾಗದ ಪೊಲೀಸರು 'ಆಪರೇಷನ್‌ ಮುಕ್ತ' (Operation Mukta) ಹೆಸರಿನಲ್ಲಿ ಶನಿವಾರ ವಿಶೇಷ ಕಾರ್ಯಾಚರಣೆ ಕೈಗೊಂಡು 50 ಕಡೆ ದಾಳಿ ನಡೆಸಿದ್ದು, ಈ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಸುಮಾರು 2 ಸಾವಿರ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆದು, ಅವರ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ವರ್ತೂರು, ಕಾಡುಗೋಡಿ, ಮಾರತಹಳ್ಳಿ, ಬೆಳ್ಳಂದೂರು, ಎಲೆಕ್ಟ್ರಾನಿಕ್‌ ಸಿಟಿ, ಬೇಗೂರು, ಬಂಡೇಪಾಳ್ಯ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನೆಲೆಸಿರುವ ಬಾಂಗ್ಲಾ ಪ್ರಜೆಗಳ ಶೆಡ್‌ಗಳ ಮೇಲೆ ದಾಳಿ ನಡೆಸಲಾಗಿದ್ದು, ಇಲ್ಲಿ ನೆಲೆಸಿರುವವರ ಆಧಾರ್‌ ಕಾರ್ಡ್‌, ಪ್ಯಾನ್‌ ಕಾರ್ಡ್‌, ವೋಟರ್‌ ಐಡಿ ಸೇರಿದಂತೆ ವಿವಿಧ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ವರ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ಅಲ್ಲದೆ ನೂರಕ್ಕೂ ಹೆಚ್ಚು ಶೆಡ್‌ಗಳಿರುವ ಪ್ರದೇಶಗಳಲ್ಲೂ ಕಾರ್ಯಾಚರಣೆ ಕೈಗೊಂಡು ಅಲ್ಲಿ ವಾಸವಿರುವ ಪ್ರತಿಯೊಬ್ಬ ವ್ಯಕ್ತಿ ಹಾಗೂ ಮಹಿಳೆಯರ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಸುಮಾರು 2 ಸಾವಿರ ಮಂದಿ ಪೈಕಿ 15 ಜನ ಅಕ್ರಮ ವಲಸಿಗರು ಎಂದು ದೃಢಪಟ್ಟಿರುವುದಾಗಿ ತಿಳಿದುಬಂದಿದೆ.

ಪ್ರಮುಖವಾಗಿ ಎಸ್‌‍ಐಆರ್‌ ಮಾಹಿತಿ ಸೇರಿ ಅವರ ಸ್ವಂತ ಊರು, ಅಂಚೆ ಕಚೇರಿ ಹಾಗೂ ಸ್ಥಳೀಯ ಪೊಲೀಸ್‌‍ ಠಾಣೆಯ ವಿವರಗಳನ್ನು ಪೊಲೀಸರು ಸ್ಥಳೀಯ ನಿವಾಸಿಗಳಿಂದ ಕೇಳಿ ಪಡೆದುಕೊಂಡಿದ್ದಾರೆ. ದಾಖಲೆಗಳಲ್ಲಿರುವ ಮಾಹಿತಿಗೂ, ವ್ಯಕ್ತಿಗಳು ನೀಡುವ ಮಾಹಿತಿಗೂ ಹೊಂದಾಣಿಕೆ ಇದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ಸಿಂಗ್‌ ಅವರ ಸೂಚನೆ ಮೇರೆಗೆ ಬಾಂಗ್ಲಾ ವಲಸಿಗರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವೈಟ್‌ಫೀಲ್ಡ್‌‍ ವಿಭಾಗದ ಡಿಸಿಪಿ ಸೈದುಲು ಅಡಾವತ್‌ ತಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅಧಿಕಾರಿಗಳೂ ಸೇರಿದಂತೆ 500ಕ್ಕೂ ಹೆಚ್ಚು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಕಾರ್ಯಾಚರಣೆ ವೇಳೆ ವಿದೇಶಿ ಪ್ರಜೆಗಳು ಪತ್ತೆಯಾದರೆ ಅವರ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ದಾಖಲೆಗಳಲ್ಲಿ ಅನುಮಾನ ಕಂಡುಬಂದಲ್ಲಿ ಹೆಚ್ಚಿನ ಪರಿಶೀಲನೆ ನಡೆಸಿ, ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಮುಂದೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ. ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಕ್ರಮವಾಗಿ ನೆಲೆಸಿರುವುದು ದೃಢಪಟ್ಟ ವಿದೇಶಿ ಪ್ರಜೆಗಳನ್ನು ಅವರ ದೇಶಕ್ಕೆ ವಾಪಸ್‌‍ ಕಳುಹಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ತಿಳಿಸಿದ್ದಾರೆ.