ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: 15,600 ರೂ. ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ; 'ನಮ್ಮ ಮೆಟ್ರೋ' ಪಿಂಕ್ ಲೈನ್ ಉದ್ಘಾಟನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ನವೆಂಬರ್ 13) ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡುತ್ತಿದ್ದು, ರಾಜ್ಯದಲ್ಲಿ ಬರೋಬ್ಬರಿ ₹15,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ 10:45ಕ್ಕೆ ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಆವರಣದಲ್ಲಿ ಆಯೋಜಿಸಲಾಗಿರುವ 'ಪ್ರಶಾಂತಿ ಕುಟೀರ'ದ 50ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
ಸಂಗ್ರಹ ಚಿತ್ರ -
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಅವರು ಇಂದು (ನವೆಂಬರ್ 13) ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡುತ್ತಿದ್ದು, ರಾಜ್ಯದಲ್ಲಿ ಬರೋಬ್ಬರಿ ₹15,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿರುವ 'ನಮ್ಮ ಮೆಟ್ರೋ' ಪಿಂಕ್ ಲೈನ್ನ (Pink Metro) ಎಲಿವೇಟೆಡ್ ಕಾರಿಡಾರ್ಗೆ ಪ್ರಧಾನಿ ಮೋದಿ ಇಂದು ಹಸಿರು ನಿಶಾನೆ ತೋರಲಿದ್ದಾರೆ.
ಮೋದಿ ಗುಂಟೆಪಾಳ್ಯ ಮೆಟ್ರೋ ನಿಲ್ದಾಣಕ್ಕೆ (ತಾವರೆಕೆರೆ) ಪ್ರಧಾನಿ ಮೋದಿ ಅವರು ಆಗಮಿಸಿ ರೈಲಿನಲ್ಲಿ ಐಐಎಂಬಿವರೆಗೆ ಪ್ರಯಾಣಿಸಲಿದ್ದಾರೆ. ಪ್ರಧಾನಿ ಜೊತೆಗೆ ರಾಜ್ಯಪಾಲರಾದ ಸುಧಾ ಯಾದವ್, ಸಿಎಂ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ, ಬಿಎಂಅರ್ಸಿಎಲ್ ಉನ್ನತಾಧಿಕಾರಿಗಳು ಮೆಟ್ರೋ ಉದ್ಘಾಟನಾ ರೈಲಿನಲ್ಲಿ ಸಂಚರಿಸಲಿದ್ದಾರೆ. ಶಾಲಾ ವಿದ್ಯಾರ್ಥಿಗಳು, ಮೆಟ್ರೊದ ಮಹಿಳಾ ಅಧಿಕಾರಿಗಳಿಗೂ ಪ್ರದಾನಿ ಜೊತೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಕಾರ್ಯಕ್ರಮಗಳ ವಿವರ
ಇಂದು ಬೆಳಗ್ಗೆ 10:45ಕ್ಕೆ ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಆವರಣದಲ್ಲಿ ಆಯೋಜಿಸಲಾಗಿರುವ 'ಪ್ರಶಾಂತಿ ಕುಟೀರ'ದ 50ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಇದರೊಂದಿಗೆ ನಗರ ಸಾರಿಗೆ, ರೈಲ್ವೆ, ವಿದ್ಯುತ್ ಪ್ರಸರಣ, ನವೀಕರಿಸಬಹುದಾದ ಇಂಧನ, ಪೆಟ್ರೋಲಿಯಂ ಮೂಲಸೌಕರ್ಯ ಹಾಗೂ ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ, ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೂ ಚಾಲನೆ ನೀಡಲಿದ್ದಾರೆ.
ವಂದೇ ಭಾರತ್ಗೆ ಚಾಲನೆ:
ಐಐಎಂಬಿಯ ಆಡಿಟೋರಿಯಂನಲ್ಲಿ ಬಹು ನಿರೀಕ್ಷೆಯ ಬೆಂಗಳೂರು-ಮಂಗಳೂರು-ಮಡಗಾಂವ್ ನಡುವೆ ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ವರ್ಚುವಲ್ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಬೈಯಪ್ಪನಹಳ್ಳಿಯ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ನಲ್ಲಿ ನೈಋುತ್ಯ ರೈಲ್ವೆ ವತಿಯಿಂದ ಕಾರ್ಯಕ್ರಮ ನಡೆಯಲಿದ್ದು, ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.
Bengaluru Metro: ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ನಲ್ಲಿ ಕೆಟ್ಟು ನಿಂತ ಮೆಟ್ರೋ ರೈಲು; ಪ್ರಯಾಣಿಕರ ಪರದಾಟ
ಬೆಂಗಳೂರಿನ ಕಾರ್ಯಕ್ರಮಗಳನ್ನು ಮುಗಿಸಿ ಪ್ರಧಾನಿಯವರು ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಾಂಸ್ಕೃತಿಕ ನಗರಿಯಲ್ಲಿ ವಿಶ್ವದ ಮೊದಲ ಓರೆಯಾದ ಎಲ್ಇಡಿ ಡೋಮ್ ತಾರಾಲಯವಾದ 'ಕಾಸ್ಮೋಸ್-ಮೈಸೂರು' (COSMOS-Mysuru) ತಾರಾಲಯವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಪ್ರಧಾನಮಂತ್ರಿಗಳ ಭೇಟಿ ಹಾಗೂ ಭದ್ರತಾ ದೃಷ್ಟಿಯಿಂದ ಬೆಂಗಳೂರು ಸಂಚಾರ ಪೊಲೀಸರು ನಗರದ ಹಲವು ಭಾಗಗಳಲ್ಲಿ ಸಂಚಾರ ಮಾರ್ಪಾಡು ಮಾಡಿದ್ದಾರೆ. ವಿಶೇಷವಾಗಿ ಬನ್ನೇರುಘಟ್ಟ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.